ಬೆಂಗಳೂರು: ಹೆಬ್ಬಾಳ ಜಂಕ್ಷನ್‌ನಿಂದ ನಾಯಂಡಹಳ್ಳಿ ಜಂಕ್ಷನ್‌ವರೆಗಿನ ಹೊರ ವರ್ತುಲ ರಸ್ತೆಯನ್ನು ಸುಸ್ಥಿತಿಯಲ್ಲಿಡಬೇಕು ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಹೊರ ವರ್ತುಲ ರಸ್ತೆ ಹಾಗೂ ಸರ್ವೀಸ್ ರಸ್ತೆಗಳನ್ನು ಸೋಮವಾರ ಪರಿಶೀಲಿಸಿದ ಅವರು, ಹೆಬ್ಬಾಳ ಜಂಕ್ಷನ್ ಕೆಳಭಾಗದಲ್ಲಿ ವೆಟ್ ಮಿಕ್ಸ್ ಹಾಕಲಾಗಿದ್ದು, ತಕ್ಷಣ ಅದಕ್ಕೆ ಡಾಂಬರೀಕರಣ ಮಾಡಬೇಕು. ಪಾದಚಾರಿಗಳ ಸಂಚಾರಕ್ಕೆ ಅನುಕೂಲವಾಗುವಂತೆ ‘ಹೈ ರೈಸ್ ಪಾದಚಾರಿ ಕ್ರಾಸಿಂಗ್’ ನಿರ್ಮಿಸಬೇಕು ಎಂದರು.
ಭದ್ರಪ್ಪ ಲೇಔಟ್ ಮೇಲ್ಸೇತುವೆ ಬಳಿಯ ಸರ್ವಿಸ್ ರಸ್ತೆ ಹಾಳಾಗಿದ್ದು, ಹೈ ಡೆನ್ಸಿಟಿ ಕಾರಿಡಾರ್ ಯೋಜನೆಯಡಿ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ಇದೇ ಸ್ಥಳದಲ್ಲಿ ಕೆ-ರೈಡ್ ವತಿಯಿಂದ ಕಾಮಗಾರಿ ನಡೆಯುತ್ತಿರುವುದರಿಂದ, ಆ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಸರ್ವಿಸ್ ರಸ್ತೆಯ ದುರಸ್ಥಿಯನ್ನು ಶೀಘ್ರ ಪೂರ್ಣಗೊಳಿಸಲು ಸೂಚಿಸಿದರು.
ಬಿಇಎಲ್ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿದ್ದು, ಜಂಕ್ಷನ್‌ನಲ್ಲಿ ರಸ್ತೆ ಮೇಲ್ಮೈ ಹಾಳಾಗಿರುವುದನ್ನು ವೈಟ್ ಟಾಪಿಂಗ್ ಗುತ್ತಿಗೆದಾರರಿಂದಲೇ ಮುಚ್ಚಿಸುವಂತೆ ಸೂಚಿಸಿದರು.
ಹೊರ ವರ್ತುಲ ರಸ್ತೆಯಲ್ಲಿರುವ ಎಲ್ಲ ಗುಂಡಿಗಳನ್ನು ತಕ್ಷಣ ಮುಚ್ಚಬೇಕು. ರಾಜ್ ಕುಮಾರ್ ಸಮಾಧಿಯಿಂದ ನಾಗರಭಾವಿ ಜಂಕ್ಷನ್‌ವರೆಗಿನ ಸರ್ವಿಸ್ ರಸ್ತೆಗಳಲ್ಲಿರುವ ಗುಂಡಿಗಳನ್ನು ಮತ್ತು ಹಾಳಾದ ಮೇಲ್ಮೈಯನ್ನು ಸರಿಪಡಿಸಬೇಕು. ಗೊರಗುಂಟೆ ಪಾಳ್ಯ ಕೈಗಾರಿಕಾ ಪ್ರದೇಶದ ರಸ್ತೆ ಸಂಪೂರ್ಣ ಹಾಳಾಗಿರುವುದರಿಂದ, ಅದನ್ನೂ ಶೀಘ್ರ ದುರಸ್ತಿಪಡಿಸಬೇಕು ಎಂದರು.
ಕಂಠೀರವ ಸ್ಟುಡಿಯೊ ಜಂಕ್ಷನ್ ಬಳಿ ಜಲಮಂಡಳಿಯ ಕಾಮಗಾರಿ ನಡೆಯುತ್ತಿದ್ದು, ಒಳಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿರುವುದನ್ನು ಗಮನಿಸಿದ ಮಹೇಶ್ವರ್ ರಾವ್, ಜಲಮಂಡಳಿ ಅಧ್ಯಕ್ಷರಿಗೆ ಕರೆ ಮಾಡಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ತಿಳಿಸಿದರು.
ಸುಮನಹಳ್ಳಿ ಜಂಕ್ಷನ್ ಮೇಲ್ಸೇತುವೆ ಕೆಳಭಾಗದಲ್ಲಿ ತ್ಯಾಜ್ಯ ಇರದಂತೆ ಕ್ರಮ ಕೈಗೊಂಡು ಸ್ವಚ್ಛತೆ ಕಾಪಾಡಬೇಕು ಎಂದರು.
ಪರಿಶೀಲನೆ ವೇಳೆ ಅನೇಕ ಸ್ಥಳಗಳಲ್ಲಿ ಅನಾಥ ವಾಹನಗಳು ಕಂಡುಬಂದಿದ್ದು, ಅವುಗಳನ್ನು ರಸ್ತೆ ಬದಿಯಿಂದ ತೆರವುಗೊಳಿಸಲು ಸೂಚಿಸಿದರು.
ಶಾಸಕ ರವಿ ಸುಬ್ರಮಣ್ಯ, ನಗರ ಪಾಲಿಕೆಗಳ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್, ಡಾ. ಕೆ.ವಿ. ರಾಜೇಂದ್ರ, ಜಂಟಿ ಆಯುಕ್ತ ಮೊಹಮ್ಮದ್ ನಯೀಮ್ ಮೊಮಿನ್, ಮುಖ್ಯ ಎಂಜಿನಿಯರ್‌ಗಳಾದ ರಾಘವೇಂದ್ರ ಪ್ರಸಾದ್, ರಾಜೇಶ್, ರಂಗನಾಥ್, ಯಮುನಾ, ಸ್ವಯಂಪ್ರಭಾ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.