
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಸಹಾಯಕ ಜೈಲರ್ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವರ ಮೇಲೆ ಸಜಾಬಂಧಿಗಳು ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಸಹಾಯಕ ಜೈಲರ್ ಎಸ್.ಮೂರ್ತಿ ಅವರ ದೂರಿನ ಮೇರೆಗೆ ಆನಂದ್(33) ಮತ್ತು ಅಬ್ದುಲ್ ಘನಿ(41) ಎಂಬುವರ ವಿರುದ್ಧ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಕರಣದ ವಿವರ: ಜನವರಿ 7ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಕೈದಿಗಳಾದ ಆನಂದ್ ಮತ್ತು ಅಬ್ದುಲ್ ಘನಿ ಎಂಬುವರು ಅನವಶ್ಯವಾಗಿ ಸಜಾಬಂಧಿ ಕಚೇರಿಗೆ ನುಗ್ಗಲು ಯತ್ನಿಸಿದ್ದು, ಈ ವೇಳೆ ಕರ್ತವ್ಯದಲ್ಲಿದ್ದ ಸಹಾಯಕ ಜೈಲರ್ ಹಾಗೂ ಜೈಲು ಸಿಬ್ಬಂದಿ ಅವರನ್ನು ತಡೆದಿದ್ದಾರೆ. ಇದರಿಂದ ಸಿಟ್ಟಿಗೆದ್ದ ಆರೋಪಿಗಳು, ಅವಾಚ್ಯ ಶಬ್ದಗಳಿಂದ ನಿಂದಿಸಿ ಕುರ್ಚಿಯಲ್ಲಿ ಕುಳಿತಿದ್ದ ಸಹಾಯಕ ಜೈಲರ್‌ಗೆ ಒದ್ದು, ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
‘ಈ ರೀತಿಯ ಘಟನೆಗಳು ಜೈಲಿನಲ್ಲಿ ನಿತ್ಯವೂ ನಡೆಯುತ್ತಿದ್ದು, ಭಯದ ವಾತಾವರಣ ನಿರ್ಮಾಣವಾಗಿದೆ. ಸಿಬ್ಬಂದಿಗೆ ಸೂಕ್ತ ರಕ್ಷಣೆ ಇಲ್ಲದಂತಾಗಿದೆ. ಪರಿಸ್ಥಿತಿ ಕೈ ಮೀರುವ ಮೊದಲು ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು’ ಎಂದು ದೂರುದಾರರು ಮನವಿ ಮಾಡಿದ್ದಾರೆ.
ಕೈದಿಗಳಿಗೆ ಐಷಾರಾಮಿ ಸೌಲಭ್ಯಗಳು ಲಭ್ಯವಾಗುತ್ತಿರುವ ಕುರಿತ ವಿಡಿಯೊ ತುಣುಕುಗಳು ಜಾಲತಾಣದಲ್ಲಿ ಹರಿದಾಡಿದ ಬೆನ್ನಲ್ಲೇ ಇಬ್ಬರು ಜೈಲು ಅಧಿಕಾರಿಗಳನ್ನು ಈಚೆಗೆ ಅಮಾನತು ಮಾಡಲಾಗಿತ್ತು. ಅಲ್ಲದೆ ನೂತನ ಡಿಜಿಪಿಯಾಗಿ ಅಲೋಕ್ ಕುಮಾರ್ ಅವರನ್ನು ನೇಮಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.