ADVERTISEMENT

ಕನ್ನಡ ಭಾಷಾ ವಿಷಯ ಹೊರತುಪಡಿಸಿ ಪರೀಕ್ಷೆಗೆ ಅನುಮತಿ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2023, 21:01 IST
Last Updated 30 ಮಾರ್ಚ್ 2023, 21:01 IST
   

ಬೆಂಗಳೂರು: ನಗರದ ಖಾಸಗಿ ಶಾಲೆಯ ವಿದ್ಯಾರ್ಥಿಯೊಬ್ಬರು ಕನ್ನಡ ಭಾಷಾ ವಿಷಯ ಹೊರತುಪಡಿಸಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಹೈಕೋರ್ಟ್ ಅನುಮತಿ ನೀಡಿದೆ.

ಕನ್ನಡ ಭಾಷಾ ವಿಷಯವನ್ನು ಹೊರತುಪಡಿಸಿ ಹಿಂದಿ, ಸಂಸ್ಕೃತ ಮತ್ತು ಇಂಗ್ಲಿಷ್ ಭಾಷಾ ವಿಷಯಗಳಲ್ಲಿ ಎಸ್‌ಎಸ್‌ಎಲ್ ಪರೀಕ್ಷೆ ಬರೆಯಲು ಹೈಕೋರ್ಟ್‌ನ ಏಕಸದಸ್ಯ ನ್ಯಾಯಪೀಠ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕರು ವಿಭಾಗೀಯ ನ್ಯಾಯಪೀಠದಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ಮೇಲ್ಮನವಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ, ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಎತ್ತಿ ಹಿಡಿದಿದೆ. ವಿದ್ಯಾರ್ಥಿಗೆ ಶುಕ್ರವಾರದಿಂದ (ಮಾ.31ರಿಂದ) ನಡೆಯುವ ಪರೀಕ್ಷೆಗೆ ಪ್ರವೇಶಪತ್ರ ಒದಗಿಸುವಂತೆ ನಿರ್ದೇಶಿಸಿದೆ.

ADVERTISEMENT

ವಿಚಾರಣೆ ವೇಳೆ ಮಂಡಳಿ ಪರ ವಕೀಲರು, ‘ರಾಜ್ಯ ಸರ್ಕಾರವು ಕನ್ನಡ ಭಾಷೆ ಕಲಿಕೆಯ ನಿಯಮಗಳು–2017 ಅನ್ನು ಪರಿಚಯಿಸಿದ್ದು, ಎಲ್ಲಾ ಶಾಲೆಗಳಲ್ಲಿ ಸಿಬಿಎಸ್‌ಸಿ ಮತ್ತು ಐಸಿಎಸ್‌ಸಿ ಪಠ್ಯಕ್ರಮಗಳಲ್ಲಿ ಕನ್ನಡವನ್ನೂ ಒಂದು ವಿಷಯವಾಗಿ ಕಡ್ಡಾಯವಾಗಿ ಕಲಿಸಬೇಕು ಎಂಬ ಆದೇಶವಿದೆ’ ಎಂದು ನ್ಯಾಯಪೀಠಕ್ಕೆ ವಿವರಿಸಿದ್ದರು. ಆದರೆ, ಈ ವಾದಾಂಶವನ್ನು ತಿರಸ್ಕರಿಸಿರುವ ನ್ಯಾಯಪೀಠ, ‘ವಿದ್ಯಾರ್ಥಿಯು ಒಂದನೇ ತರಗತಿಯಿಂದ ಈವರೆಗೂ ಕನ್ನಡ ಭಾಷಾ ವಿಷಯವನ್ನು ಅಧ್ಯಯನ ಮಾಡಿಲ್ಲ. ಹಾಗಾಗಿ, ಕನ್ನಡ ಭಾಷಾ ವಿಷಯದಲ್ಲಿ ಪರೀಕ್ಷೆ ಬರೆಯಬೇಕು ಎಂದು ನಿರೀಕ್ಷಿಸುವುದು ಸರಿಯಲ್ಲ’ ಎಂದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.