ADVERTISEMENT

ಬೆಂಗಳೂರು ವಿವಿ: ಪಿಎಚ್‌.ಡಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2021, 19:17 IST
Last Updated 15 ಮಾರ್ಚ್ 2021, 19:17 IST
ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಆಡಳಿತ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು - ಪ್ರಜಾವಾಣಿ ಚಿತ್ರ
ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಆಡಳಿತ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು - ಪ್ರಜಾವಾಣಿ ಚಿತ್ರ   

ಬೆಂಗಳೂರು: ಪಿಎಚ್‌.ಡಿ ಪ್ರವೇಶ ಪ್ರಕ್ರಿಯೆಯಲ್ಲಿ ಯುಜಿಸಿ ನಿಯಮಾವಳಿಗಳನ್ನು ಉಲ್ಲಂಘಿಸಲಾಗುತ್ತಿದೆ ಎಂದು ಆರೋಪಿಸಿ ನೂರಾರು ವಿದ್ಯಾರ್ಥಿಗಳು ಬೆಂಗಳೂರು ಆಡಳಿತ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ವಿಶ್ವವಿದ್ಯಾಲಯದ ಆವರಣದಲ್ಲಿನ ಡಾ.ಬಿ.ಆರ್. ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಿ ರ‍್ಯಾಲಿ ನಡೆಸಿದ ವಿದ್ಯಾರ್ಥಿಗಳು ಎಲ್ಲ ವಿಭಾಗಗಳಿಗೆ ಬೀಗ ಹಾಕಿ ಪ್ರತಿಭಟಿಸಿದರು.

‘ಯುಜಿಸಿ ನಿಯಮಾವಳಿಗಳ ಪ್ರಕಾರ ಪ್ರತಿ ಪ್ರವೇಶ ಪ್ರಕ್ರಿಯೆಯಲ್ಲಿ ಸಾಮಾನ್ಯ ವರ್ಗಕ್ಕೆ ಶೇ 55, ಹಿಂದುಳಿದ ವರ್ಗಗಳಿಗೆ ಶೇ 50 ಮತ್ತು ಪರಿಶಿಷ್ಟ ಜಾತಿ ಹಾಗೂ ವರ್ಗಗಳಿಗೆ ಶೇ 45ರಷ್ಟು ಅರ್ಹತಾ ಅಂಕಗಳನ್ನು ನಿಗದಿಪಡಿಸಬೇಕು. ಆದರೆ, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಈ ಯಾವುದೇ ವಿನಾಯಿತಿ ನೀಡದೆ ಪ್ರವೇಶ ಪ್ರಕ್ರಿಯೆ ನಡೆಸಲಾಗುತ್ತಿದೆ’ ಎಂದು ವಿದ್ಯಾರ್ಥಿಗಳು ದೂರಿದರು.

ADVERTISEMENT

‘ನಿವೃತ್ತಿಗೆ 6 ತಿಂಗಳು ಬಾಕಿ ಇರುವ ಪ್ರಾಧ್ಯಾಪಕರಿಗೆ ಪಿಎಚ್‌.ಡಿ ಮಾರ್ಗದರ್ಶನ ನೀಡಲು ಪ್ರೊ. ಕೆ.ಆರ್. ವೇಣುಗೋಪಾಲ್ ಅವರು ಅವಕಾಶ ನಿರಾಕರಿಸುತ್ತಿದ್ದಾರೆ. ಇದರಿಂದ ಹಲವಾರು ವಿದ್ಯಾರ್ಥಿಗಳ ಪಿಎಚ್‌.ಡಿ ವ್ಯಾಸಂಗ ಮಾಡಲು ಸಾಧ್ಯವಾಗುತ್ತಿಲ್ಲ’ ಅಳಲು ತೋಡಿಕೊಂಡರು.

ಯುಜಿಸಿ ನಿಯಮ ಪಾಲನೆ:

‘ವಿಶ್ವವಿದ್ಯಾಲಯದಲ್ಲಿ ಪಿಎಚ್‌.ಡಿ ಪ್ರವೇಶ ಪ್ರಕ್ರಿಯೆಯು ಯುಜಿಸಿ ನಿಯಮಾವಳಿಯಂತೆಯೇ ನಡೆಯುತ್ತಿದೆ. 2019ರ ಜುಲೈನಲ್ಲಿ ಅರ್ಜಿ ಕರೆಯಲಾಗಿತ್ತು. 3,737 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಆಗ 764 ಸೀಟುಗಳು ಲಭ್ಯವಿದ್ದವು. ಅದೇ ಡಿಸೆಂಬರ್‌ನಲ್ಲಿ ಪ್ರವೇಶಾತಿ ಪರೀಕ್ಷೆ ನಡೆಸಲಾಗಿತ್ತು. ಫಲಿತಾಂಶ ಪ್ರಕಟಿಸಿದ ನಂತರ ಆಕ್ಷೇಪಣೆಗೆ ಕಾಲಾವಕಾಶ ನೀಡಲಾಗಿತ್ತು. ಜೇಷ್ಠತಾ ಪಟ್ಟಿ ಪ್ರಕಟಿಸುವ ವೇಳೆ ಕೋವಿಡ್‌ನಿಂದಾಗಿ ಲಾಕ್‌ಡೌನ್‌ ಮಾಡಿದ್ದರಿಂದ ಪ್ರವೇಶ ಪ್ರಕ್ರಿಯೆ ನಡೆಸಲು ಸಾಧ್ಯವಾಗಲಿಲ್ಲ’ ಎಂದು ಕುಲಪತಿ ಪ್ರೊ.ಕೆ.ಆರ್. ವೇಣುಗೋಪಾಲ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ಶೇ 5ರಷ್ಟು ರಿಯಾಯಿತಿ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಯುಜಿಸಿ ನಿಯಮಾವಳಿಯಂತೆ ಸಾಮಾನ್ಯ ವರ್ಗಕ್ಕೆ ಶೇ 55 ಮತ್ತು ಎಸ್‌ಸಿ,ಎಸ್‌ಟಿ ವಿದ್ಯಾರ್ಥಿಗಳು ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಶೇ 50ರಷ್ಟು ಅಂಕಗಳನ್ನು ನಿಗದಿಪಡಿಸಲಾಗಿದೆ. ವಿಶ್ವವಿದ್ಯಾಲಯದಲ್ಲಿ ಜಾರಿಯಲ್ಲಿರುವ ಪಿಎಚ್‌.ಡಿ ವಿನಿಯಮ–2016ರಲ್ಲಿ ಯಾವುದೇ ತಿದ್ದುಪಡಿಯನ್ನು ಮಾಡಲು ವಿಶ್ವವಿದ್ಯಾಲಯವು ಸರ್ಕಾರದ ಅನುಮತಿಯನ್ನು ಪಡೆಯಬೇಕಾಗಿರುತ್ತದೆ. ಈ ಸಂಬಂಧ ಏ.9ರಂದು ವಿಶ್ವವಿದ್ಯಾಲಯವು ಸಂಬಂಧಪಟ್ಟವರ ಸಭೆ ಕರೆದಿದೆ. ಆ ಸಭೆಯಲ್ಲಿ ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಅವರು ಭರವಸೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.