ಬೆಂಗಳೂರು: ಮುಜರಾಯಿ ದೇವಸ್ಥಾನಗಳಲ್ಲಿ ಏಕಬಳಕೆಯ ಪ್ಲಾಸ್ಟಿಕ್ ನಿಷೇಧಿಸಲಾಗಿದ್ದು, ಪರಿಸರಕ್ಕೆ ಹಾನಿಯಾಗದ ಕೈ ಚೀಲಗಳನ್ನು ಭಕ್ತರು ಬಳಸಬೇಕು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಬಸವನಗುಡಿ ದೊಡ್ಡಗಣಪತಿ ದೇವಸ್ಥಾನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ‘ಪ್ಲಾಸ್ಟಿಕ್ ಮುಕ್ತ ದೇವಾಲಯಗಳ ಅಭಿಯಾನ– ಪರಿಸರ ಉಳಿಸಿ, ಪರಿಸರ ಬೆಳೆಸಿ’ ಜಾಗೃತಿ ಕಾರ್ಯಕ್ರಮಕ್ಕೆೆ ಚಾಲನೆ ನೀಡಿ ಅವರು ಮಾತನಾಡಿದರು.
ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿಗಳ ಇಲಾಖೆಯಡಿ (ಮುಜರಾಯಿ) 34,500ಕ್ಕೂ ಅಧಿಕ ದೇವಸ್ಥಾನಗಳಿವೆ. ಇಲ್ಲಿ ಪ್ಲಾಸ್ಟಿಕ್ ಬಳಸಬಾರದು ಎಂಬ ತೀರ್ಮಾನ ಕೈಗೊಳ್ಳಲಾಗಿದೆ. ಈ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಭಕ್ತರು ಸಹಕಾರ ನೀಡಬೇಕು ಎಂದು ಕೋರಿದರು.
ಬೇರೆ ರಾಜ್ಯಗಳಿಂದ ಕರ್ನಾಟಕಕ್ಕೆ ಪ್ಲಾಸ್ಟಿಕ್ ಪೂರೈಕೆ ಆಗುತ್ತಿರುವುದರಿಂದ ಅದರ ಬಳಕೆ ಹೆಚ್ಚುತ್ತಿದೆ. ಪ್ಲಾಸ್ಟಿಕ್ ನಿಷೇಧಿಸಿ ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದ್ದರೂ ಈ ಕಾರಣದಿಂದ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿಲ್ಲ . ರಾಜ್ಯ ಸರ್ಕಾರ ಮಾತ್ರವಲ್ಲ, ಕೇಂದ್ರ ಸರ್ಕಾರವೂ ಪ್ಲಾಸ್ಟಿಕ್ ನಿಷೇಧಿಸಬೇಕು ಎಂದು ಆಗ್ರಹಿಸಿದರು.
ಶಾಸಕ ಎಲ್.ಎ. ರವಿ ಸುಬ್ರಹ್ಮಣ್ಯ ಮಾತನಾಡಿ, ‘ರಾಜ್ಯದ ಯಾವುದೇ ದೇವಾಲಯಗಳ ಆವರಣದಲ್ಲಿ ಮರು ಬಳಕೆಯಾಗದ ಪ್ಲಾಸ್ಟಿಕ್ ಉಪಯೋಗಿಸಬಾರದು ಎಂಬುದು ಒಳ್ಳೆಯ ನಿರ್ಧಾರವಾಗಿದೆ’ ಎಂದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್‌ನ ಮಾಜಿ ಸದಸ್ಯ ಯು.ಬಿ. ವೆಂಕಟೇಶ್, ದೊಡ್ಡಗಣಪತಿ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಶ್ರೀನಿವಾಸ್, ಜಿಲ್ಲಾ ಧಾರ್ಮಿಕ ಪರಿಷತ್ತಿನ ಸದಸ್ಯ ಕೆ.ಎಸ್. ನಾಗರಾಜ್, ಧಾರ್ಮಿಕ ಇಲಾಖೆಯ ಕೇಂದ್ರ ಸ್ಥಾನಿಕ ಸಹಾಯಕ ಮಹೇಶ್ ಉಪಸ್ಥಿತರಿದ್ದರು.
ಬಸವನಗುಡಿಯ ದೊಡ್ಡಗಣಪತಿ ದೇವಾಲಯಕ್ಕೆೆ ಭೇಟಿ ನೀಡಿದ್ದ ಮಹಿಳೆಯರಿಗೆ ಸಚಿವರು ಬಟ್ಟೆೆಯ ಕೈ ಚೀಲ ವಿತರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.