ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ನಗರಕ್ಕೆ ಭೇಟಿ ನೀಡುತ್ತಿದ್ದು, ಭದ್ರತೆಗಾಗಿ 10 ಸಾವಿರ ಪೊಲೀಸರನ್ನು ಬಳಸಿಕೊಳ್ಳಲಾಗುತ್ತಿದೆ. ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ನೇತೃತ್ವದಲ್ಲಿ ಭದ್ರತಾ ಕ್ರಮ ಕೈಗೊಳ್ಳಲಾಗಿದೆ.
ನಾಲ್ವರು ಜಂಟಿ ಪೊಲೀಸ್ ಕಮಿಷನರ್, 10 ಡಿಸಿಪಿಗಳು, 50 ಎಸಿಪಿಗಳು ಹಾಗೂ 200ಕ್ಕೂ ಹೆಚ್ಚು ಇನ್‌ಸ್ಪೆಕ್ಟರ್‌ಗಳು, 650ಕ್ಕೂ ಹೆಚ್ಚು ಪಿಎಸ್‌ಐಗಳನ್ನು ಭದ್ರತೆಗೆ ಬಳಸಿಕೊಳ್ಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ನಗರ ಸಶಸ್ತ್ರ ಮೀಸಲು ಪಡೆ ಹಾಗೂ ಕೆಎಸ್‌ಆರ್‌ಪಿ ತುಕಡಿಗಳನ್ನೂ ಅಲ್ಲಲ್ಲಿ ನಿಯೋಜಿಸಲಾಗಿದೆ.
50 ಚೆಕ್‌ಪೋಸ್ಟ್ ಸ್ಥಾಪನೆ: ಜಯನಗರ ಮತ್ತು ಜೆಪಿ ನಗರದ ಬಳಿ 50 ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ. ರಾಗಿಗುಡ್ಡ ಮೆಟ್ರೊ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಳದಿ ಮಾರ್ಗ ಉದ್ಘಾಟಿಸಲಿದ್ದಾರೆ.
ನಗರ ಪೊಲೀಸ್ ಕಮಿಷನರ್ ಹಾಗೂ ಹಿರಿಯ ಅಧಿಕಾರಿಗಳು ರಾಗಿಗುಡ್ಡ ಮೆಟ್ರೊ ನಿಲ್ದಾಣಕ್ಕೆ ಶನಿವಾರ ಭೇಟಿ ನೀಡಿ ಭದ್ರತಾ ಕ್ರಮಗಳನ್ನು ಪರಿಶೀಲನೆ ನಡೆಸಿದರು.
ಸ್ಥಳದಲ್ಲಿ ಪೊಲೀಸ್ ವಾಹನಗಳು, ಆಂಬ್ಯುಲೆನ್ಸ್‌ಗಳು ಮತ್ತು ಅಗ್ನಿಶಾಮಕ ದಳದ ವಾಹನಗಳನ್ನು ಮುನ್ನೆಚ್ಚರಿಕಾ ಕ್ರಮವಾಗಿ ಮೆಟ್ರೊ ನಿಲ್ದಾಣ ಸುತ್ತಮುತ್ತ ಇರಿಸಲಾಗಿದೆ.
34 ನಾಕಾಬಂದಿ ರಚನೆ: ನಗರದ 34 ಕಡೆ ನಾಕಾಬಂದಿ ಸ್ಥಾಪಿಸಿ ಅನುಮಾನ ಬಂದ ವ್ಯಕ್ತಿಗಳು ಮತ್ತು ವಾಹನ ಸವಾರರನ್ನು ತಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪೂರ್ವ ವಿಭಾಗದ ಡಿಸಿಪಿ ವಲಯದಲ್ಲಿ 6, ಕೇಂದ್ರ ವಿಭಾಗದಲ್ಲಿ 6, ಪಶ್ಚಿಮ ವಿಭಾಗದಲ್ಲಿ 10 ಮತ್ತು ಉತ್ತರ ವಿಭಾಗದಲ್ಲಿ 10 ನಾಕಾಬಂದಿ ನ್ನು ಸ್ಥಾಪನೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.