ADVERTISEMENT

PMFME ಬಳಸಿ ಉದ್ಯಮಿಗಳಾಗಿ: ಸಚಿವ ಚಲುವರಾಯಸ್ವಾಮಿ

ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಿಗೆ ಗುರುತಿನ ಚೀಟಿ ವಿತರಣೆ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2025, 14:53 IST
Last Updated 8 ಆಗಸ್ಟ್ 2025, 14:53 IST
ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ರಫ್ತು ನಿಗಮದಲ್ಲಿ (ಕೆಪೆಕ್‌) ಗುರುವಾರ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಿಗೆ ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಗುರುತಿನ ಚೀಟಿ ವಿತರಿಸಿದರು.
ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ರಫ್ತು ನಿಗಮದಲ್ಲಿ (ಕೆಪೆಕ್‌) ಗುರುವಾರ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಿಗೆ ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಗುರುತಿನ ಚೀಟಿ ವಿತರಿಸಿದರು.   

ಬೆಂಗಳೂರು: ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯನ್ನು (ಪಿಎಂಎಫ್‌ಎಂಇ) ಬಳಸಿಕೊಂಡರೆ ರೈತರೇ ಉದ್ಯಮಿಗಳಾಗಬಹುದು ಎಂದು ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಹೇಳಿದರು.

ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ರಫ್ತು ನಿಗಮದಲ್ಲಿ (ಕೆಪೆಕ್‌) ಗುರುವಾರ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಿಗೆ ಗುರುತಿನ ಚೀಟಿ ವಿತರಿಸಿ ಅವರು ಮಾತನಾಡಿದರು.

ಪಿಎಂಎಫ್‌ಎಂಇ ಉತ್ತಮ ಯೋಜನೆಯಾಗಿದ್ದು, ಈ ಬಾರಿ ರಾಜ್ಯದಲ್ಲಿ 5000 ಘಟಕಗಳನ್ನು ಸ್ಥಾಪಿಸುವ ಗುರಿಯಿದೆ. ರಾಜ್ಯ ಬಜೆಟ್‌ನಲ್ಲಿ ₹206 ಕೋಟಿ ಒದಗಿಸಲಾಗಿದೆ. ಈ ಉದ್ಯಮಕ್ಕೆ ಬಂದವರಿಗೆ ಕೇಂದ್ರ ಸರ್ಕಾರದಿಂದ ₹6 ಲಕ್ಷ, ರಾಜ್ಯ ಸರ್ಕಾರದಿಂದ ₹9 ಲಕ್ಷ ಸೇರಿ ಸುಮಾರು ₹15 ಲಕ್ಷ ಸಹಾಯಧನ ಸಿಗುತ್ತಿದೆ. ರೈತರು ಉದ್ಯಮಿಗಳಾಗುವ ನಿಟ್ಟಿನಲ್ಲಿ ಈ ಯೋಜನೆಯ ಪ್ರಯೋಜನ ಪಡೆಯಬೇಕು ಎಂದು ಸಲಹೆ ನೀಡಿದರು.

ADVERTISEMENT

ಮೈಸೂರಿನ ಸಿಎಫ್‌ಟಿಆರ್‌ಐನಲ್ಲಿ ತರಬೇತಿ ಪಡೆದ 84 ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಿಗೆ ಗುರುತಿನ ಚೀಟಿ ವಿತರಿಸಿದರು. ತರಬೇತಿ ಪಡೆದವರು ಗ್ರಾಮೀಣ ಮಟ್ಟದಲ್ಲಿ ಯೋಜನೆ ಕುರಿತು ಮಾಹಿತಿ ನೀಡಬೇಕು ಎಂದು ಸೂಚಿಸಿದರು.

ಕೆಪೆಕ್‌ ಅಧ್ಯಕ್ಷ ಬಿ.ಎಚ್. ಹರೀಶ್‌ ಮಾತನಾಡಿ, ‘ರಾಜ್ಯದಲ್ಲಿ 6,385 ಫಲಾನುಭವಿಗಳು ಈಗಾಗಲೇ ಈ ಯೋಜನೆಯ ಲಾಭ ಪಡೆದಿದ್ದಾರೆ. ಈ ಆರ್ಥಿಕ ವರ್ಷದಲ್ಲಿ ಇನ್ನೂ 5 ಸಾವಿರ ಘಟಕಗಳನ್ನು ಸ್ಥಾಪಿಸುವ ಗುರಿಯಿದೆ. ಎಲ್ಲ ಜಿಲ್ಲೆಗಳಲ್ಲೂ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದೇವೆ’ ಎಂದು ವಿವರಿಸಿದರು.

ಕೆಪೆಕ್‌ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್. ಶಿವಪ್ರಕಾಶ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.