ADVERTISEMENT

ವಿಚಾರಣೆಗೆ ಶೀಘ್ರ 18 ನ್ಯಾಯಾಲಯ

ಮಕ್ಕಳ ಮೇಲೆ ಲೈಂಗಿಕ ಕಿರುಕುಳ ಪ್ರಕರಣ ಹೆಚ್ಚಳ * ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಕ್ರಮ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2019, 20:04 IST
Last Updated 13 ಅಕ್ಟೋಬರ್ 2019, 20:04 IST
ಪೋಕ್ಸೊ ಕುರಿತು ‘ಕಾರ್ಯಾಚರಣೆ ನಿರ್ದಿಷ್ಟ ವಿಧಾನ ಮತ್ತು ಮಾರ್ಗದರ್ಶನ’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಕೃಪಾ ಆಳ್ವ, ನ್ಯಾಯಮೂರ್ತಿ ಬಿ.ವಿ. ನಾಗರತ್ನ, ಮುಖ್ಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ ಓಕ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಡಾ. ಅಂಥೋನಿ ಸೆಬಾಸ್ಟಿಯನ್‌ ಇದ್ದರು
ಪೋಕ್ಸೊ ಕುರಿತು ‘ಕಾರ್ಯಾಚರಣೆ ನಿರ್ದಿಷ್ಟ ವಿಧಾನ ಮತ್ತು ಮಾರ್ಗದರ್ಶನ’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಕೃಪಾ ಆಳ್ವ, ನ್ಯಾಯಮೂರ್ತಿ ಬಿ.ವಿ. ನಾಗರತ್ನ, ಮುಖ್ಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ ಓಕ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಡಾ. ಅಂಥೋನಿ ಸೆಬಾಸ್ಟಿಯನ್‌ ಇದ್ದರು   

ಬೆಂಗಳೂರು: ರಾಜ್ಯದಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯಡಿ (ಪೋಕ್ಸೊ) ದಾಖಲಾಗುವ ಪ್ರಕರಣಗಳ ವಿಚಾರಣೆಗಾಗಿಯೇ 18 ನ್ಯಾಯಾಲಯಗಳನ್ನು ಸ್ಥಾಪಿಸಲು ಸರ್ಕಾರ ಮುಂದಾಗಿದೆ.

ದೇಶದಲ್ಲಿಯೂ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಯಾವ ಜಿಲ್ಲೆಯಲ್ಲಿ ಪೋಕ್ಸೊ ಕಾಯ್ದೆಯಡಿ 100ಕ್ಕೂ
ಹೆಚ್ಚು ಪ್ರಕರಣಗಳು ದಾಖಲಾಗಿವೆಯೋ, ಅಲ್ಲಿ ವಿಶೇಷ ನ್ಯಾಯಾಲಯ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್‌ ಮಾರ್ಗ
ಸೂಚಿ ರೂಪಿಸಿದೆ. ಕರ್ನಾಟಕ ಹೈಕೋರ್ಟ್‌ 18 ಜಿಲ್ಲೆಗಳನ್ನು ಈಗಾಗಲೇಗುರುತಿಸಿದ್ದು, ಈ ಜಿಲ್ಲೆಗಳಲ್ಲಿ ಈ
ವಿಶೇಷ ನ್ಯಾಯಾಲಯಗಳು ಸ್ಥಾಪನೆಯಾಗಲಿವೆ.

ರಾಜ್ಯದ 30 ಜಿಲ್ಲೆಗಳಲ್ಲಿ ಈವರೆಗೆ 5,142 ಪೋಕ್ಸೊ ಪ್ರಕರಣಗಳು ದಾಖಲಾಗಿವೆ. ರಾಜಧಾನಿ ಬೆಂಗಳೂರಿನಲ್ಲಿಯೇ ಈ ಪ್ರಕರಣಗಳ ಸಂಖ್ಯೆ ಜಾಸ್ತಿ ಇದೆ (1,125). ನಂತರದ ಸ್ಥಾನದಲ್ಲಿ ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ ಮತ್ತು ಮೈಸೂರು ಇದೆ.

ADVERTISEMENT

‘ಪೋಕ್ಸೊ ಪ್ರಕರಣಗಳ ವಿಚಾರಣೆಗೆ ನ್ಯಾಯಾಲಯ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್‌ ಸ್ಪಷ್ಟ ನಿರ್ದೇಶನ ನೀಡಿದೆ. ರಾಜ್ಯ ಸರ್ಕಾರ ಈ ಪ್ರಕಾರ ನ್ಯಾಯಾಲಯಗಳನ್ನು ಸ್ಥಾಪಿಸಿ ಅವುಗಳಲ್ಲಿ ಅಗತ್ಯ ಮೂಲಸೌಕರ್ಯ, ಸಿಬ್ಬಂದಿ ಒದಗಿಸಬೇಕು’ ಎಂದುಹೈಕೋರ್ಟ್‌ನ ಬಾಲ ನ್ಯಾಯ ಕಾಯ್ದೆ ಸಮಿತಿ ಮುಖ್ಯಸ್ಥರಾದ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಹೇಳುತ್ತಾರೆ.

‘ಈ ವಿಶೇಷ ನ್ಯಾಯಾಲಯಗಳ ಪಬ್ಲಿಕ್‌ ಪ್ರಾಸಿಕ್ಯೂಟರ್‌ಗಳಿಗೆ ರಾಜ್ಯ ಸರ್ಕಾರದ ವತಿಯಿಂದಲೇ ತರಬೇತಿ ನೀಡಿದರೆ ಅನುಕೂಲವಾಗುತ್ತದೆ’ ಎಂದೂ ಅವರು ಹೇಳುತ್ತಾರೆ.

‘ಕಾನೂನು ಅರಿವಿನ ಕೊರತೆ’
‘ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ತಡೆಗೆ ರೂಪಿಸಲಾಗಿರುವ ಕಾನೂನುಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವಿನ ಕೊರತೆ ಇದೆ. ಶೇ 90 ಮಕ್ಕಳು ಮತ್ತು ಶಿಕ್ಷಕರಿಗೂ ಈ ಕಾನೂನುಗಳ ಬಗ್ಗೆ ಮಾಹಿತಿ ಇಲ್ಲ’ ಎಂದು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ್‌ ಓಕಾ ಬೇಸರ ವ್ಯಕ್ತಪಡಿಸಿದರು.

ನಗರದಲ್ಲಿ ಭಾನುವಾರ ಪೋಕ್ಸೊ ಕುರಿತು ‘ಕಾರ್ಯಾಚರಣೆ ನಿರ್ದಿಷ್ಟ ವಿಧಾನ ಮತ್ತು ಮಾರ್ಗದರ್ಶನ’ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು, ‘ದೇಶದಲ್ಲಿ ಇಂದು ಮಕ್ಕಳು ತಮ್ಮ ಕುಟುಂಬದವರಿಂದಲೇ ಹೆಚ್ಚಾಗಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ’ ಎಂದರು.

*
ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುವ ಮಕ್ಕಳಿಗೆ ಸರಿಯಾದ ರೀತಿಯಲ್ಲಿ ನ್ಯಾಯ ಸಿಗುತ್ತಿಲ್ಲ. ನಿರ್ಧರಿತ ಪ್ರಕರಣಗಳು ಶೇ 15 ರಿಂದ ಶೇ 21ರಷ್ಟು ಮಾತ್ರ ಇದೆ.
-ಕೃಪಾ ಆಳ್ವ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.