ADVERTISEMENT

ಠಾಣೆಯಲ್ಲಿ ಮಾಸಿಕ ಜನಸಂಪರ್ಕ ಸಭೆ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2020, 20:49 IST
Last Updated 19 ನವೆಂಬರ್ 2020, 20:49 IST

ಬೆಂಗಳೂರು: ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ಸಮನ್ವಯ ಸಾಧಿಸಿ ಜನಸ್ನೇಹಿ ವ್ಯವಸ್ಥೆ ರೂಪಿಸುವ ಉದ್ದೇಶದಿಂದ ನಗರದ ಪ್ರತಿ ಠಾಣೆಯಲ್ಲಿ ಮಾಸಿಕ ಜನಸಂಪರ್ಕ ಸಭೆ ನಡೆಸಲು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ತೀರ್ಮಾನಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಮಲ್ ಪಂತ್, ‘ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಹೊಸದಾಗಿ ‘ಮಾಸಿಕ ಜನಸಂಪರ್ಕ ದಿನ’ ಎಂಬ ನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ’ ಎಂದಿದ್ದಾರೆ.

‘ಪ್ರತಿ ತಿಂಗಳ 4ನೇ ಶನಿವಾರ ಬೆಳಿಗ್ಗೆ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಈ ಅವಧಿಯಲ್ಲಿ ಸಾರ್ವಜನಿಕರು, ತಮ್ಮ ವ್ಯಾಪ್ತಿಯ ಠಾಣೆ ಇನ್‌ಸ್ಪೆಕ್ಟರ್‌ಗಳು ಹಾಗೂ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದು’ ಎಂದೂ ಹೇಳಿದ್ದಾರೆ.

ADVERTISEMENT

‘ಬಾಕಿ ಇರುವ ಪ್ರಕರಣಗಳ ಪ್ರಗತಿ, ಸಾಮಾನ್ಯ ಹಾಗೂ ಇತರೆ ಮಾಹಿತಿ ಮತ್ತು ದೂರುಗಳ ಪರಿಹಾರ ಬಗ್ಗೆಯೂ ಸಾರ್ವಜನಿಕರು ಪೊಲೀಸರನ್ನು ಸಂಪರ್ಕಿಸಬಹುದು. ಇದೇ ಮೊದಲ ಬಾರಿಗೆ ಇಂಥ ಕಾರ್ಯಕ್ರಮ ಜಾರಿಗೆ ತರಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದೂ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.