ADVERTISEMENT

₹ 200 ಕೋಟಿ ವೆಚ್ಚದಲ್ಲಿ 100 ಹೊಸ ಕಟ್ಟಡ

‍ಪೊಲೀಸ್ ಸಂಸ್ಮರಣಾ ದಿನಾಚರಣೆ; ಹುತಾತ್ಮರಿಗೆ ಗೌರವ ನಮನ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2021, 18:17 IST
Last Updated 21 ಅಕ್ಟೋಬರ್ 2021, 18:17 IST
ಬೆಂಗಳೂರು ನಗರ ಸಶಸ್ತ್ರ ಮೀಸಲು (ಸಿಎಆರ್) ಪಡೆಯ ಮೈದಾನದಲ್ಲಿ ಗುರುವಾರ ಆಯೋಜಿಸಿದ್ದ ‘ಪೊಲೀಸ್ ಸಂಸ್ಮರಣಾ ದಿನಾಚರಣೆ’ ಕಾರ್ಯಕ್ರಮದಲ್ಲಿ  ಹುತಾತ್ಮ ಪೊಲೀಸರ ಆತ್ಮಕ್ಕೆ ಶಾಂತಿ ಕೋರಿ ಸಿಬ್ಬಂದಿ ಮೌನಾಚರಣೆ ಮಾಡಿದರು – ಪ್ರಜಾವಾಣಿ ಚಿತ್ರ
ಬೆಂಗಳೂರು ನಗರ ಸಶಸ್ತ್ರ ಮೀಸಲು (ಸಿಎಆರ್) ಪಡೆಯ ಮೈದಾನದಲ್ಲಿ ಗುರುವಾರ ಆಯೋಜಿಸಿದ್ದ ‘ಪೊಲೀಸ್ ಸಂಸ್ಮರಣಾ ದಿನಾಚರಣೆ’ ಕಾರ್ಯಕ್ರಮದಲ್ಲಿ  ಹುತಾತ್ಮ ಪೊಲೀಸರ ಆತ್ಮಕ್ಕೆ ಶಾಂತಿ ಕೋರಿ ಸಿಬ್ಬಂದಿ ಮೌನಾಚರಣೆ ಮಾಡಿದರು – ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ರಾಜ್ಯದ ಹಲವು ಪೊಲೀಸ್ ಠಾಣೆಗಳ ಕಟ್ಟಡಗಳು ಹಳೆಯದ್ದಾಗಿದ್ದು, ಹೊಸ ಕಟ್ಟಡಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ₹ 200 ಕೋಟಿ ವೆಚ್ಚದಲ್ಲಿ 100 ಠಾಣೆಗಳಿಗೆ ಹೊಸ ಕಟ್ಟಡ ನಿರ್ಮಿಸುವ ಯೋಜನೆ ಹಾಕಿಕೊಳ್ಳಲಾಗಿದೆ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಮೈಸೂರು ರಸ್ತೆಯಲ್ಲಿರುವ ನಗರ ಸಶಸ್ತ್ರ ಮೀಸಲು (ಸಿಎಆರ್) ಪಡೆಯ ಮೈದಾನದಲ್ಲಿ ಗುರುವಾರ ಆಯೋಜಿಸಿದ್ದ ‘ಪೊಲೀಸ್ ಸಂಸ್ಮರಣಾ ದಿನಾಚರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಹುತಾತ್ಮ ಪೊಲೀಸರಿಗೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

‘ಜನರ ಹಾಗೂ ಸಮಾಜದ ರಕ್ಷಣೆಗಾಗಿ ಪೊಲೀಸರು ಹಗಲಿರುಳು ಶ್ರಮಿಸುತ್ತಿದ್ದಾರೆ. ಜೀವವನ್ನು ಪಣಕ್ಕಿಟ್ಟು ಕೆಲಸ ಮಾಡುತ್ತಿದ್ದಾರೆ. ಪೊಲೀಸ್ ಇಲಾಖೆ ಅಭಿವೃದ್ಧಿ ಹಾಗೂ ಸಿಬ್ಬಂದಿ ಕ್ಷೇಮಾಭಿವೃದ್ಧಿಗಾಗಿ ರಾಜ್ಯ ಸರ್ಕಾರ ಹೆಚ್ಚಿನ ಒತ್ತು ನೀಡಲಿದೆ’ ಎಂದೂ ಹೇಳಿದರು.

ADVERTISEMENT

‘ಪೊಲೀಸರ ವಸತಿ ಸಮಸ್ಯೆ ಇರುವುದು ಗಮನಕ್ಕೆ ಬಂದಿದೆ. ಹೀಗಾಗಿ, ₹ 2 ಸಾವಿರ ಕೋಟಿ ವೆಚ್ಚದಲ್ಲಿ 10 ಸಾವಿರ ಮನೆಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದೆ. ಇದಕ್ಕಾಗಿ ‘ಪೊಲೀಸ್ ಗೃಹ–2025’ ಯೋಜನೆ ಸಹ ಜಾರಿಗೊಳಿಸಲಾಗಿದೆ’ ಎಂದೂ ತಿಳಿಸಿದರು.

377 ಪೊಲೀಸರ ಸಾವು: ‘ಗಲಾಟೆ, ಗಲಭೆ ಹಾಗೂ ಇತರೆ ಸಂದಿಗ್ಧ ಸ್ಥಿತಿಯಲ್ಲಿ ಶಾಂತಿ ಕಾಪಾಡಲು ಪೊಲೀಸರು ಕೆಲಸ ಮಾಡುತ್ತಿದ್ದಾರೆ. 2020ರ ಸೆಪ್ಟೆಂಬರ್‌ನಿಂದ 2021ರ ಆಗಸ್ಟ್‌ವರೆಗೆ ದೇಶದಲ್ಲಿ ಕರ್ತವ್ಯದ ವೇಳೆ 377 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲೂ ಕರ್ತವ್ಯದ ವೇಳೆ 16 ಪೊಲೀಸರು ಮೃತಪಟ್ಟಿದ್ದಾರೆ' ಎಂದು ಆರಗ ಜ್ಞಾನೇಂದ್ರ ಹೇಳಿದರು.

‘ರಾಜ್ಯದಲ್ಲಿ ಕೋವಿಡ್ ಸಂದರ್ಭದಲ್ಲೂ 173 ಸಿಬ್ಬಂದಿಯನ್ನು ನಾವೆಲ್ಲರೂ ಕಳೆದುಕೊಂಡಿದ್ದೇವೆ’ ಎಂದೂ ತಿಳಿಸಿದರು.

ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹಾಗೂ ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂತ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.