ಬೆಂಗಳೂರು: ‘ಪ್ಲಾಸ್ಟರ್ ಆಫ್ ಪ್ಯಾರಿಸ್‌ನ (ಪಿಒಪಿ) ಗಣೇಶ ಮೂರ್ತಿಗಳನ್ನು ಬಳಸುವುದಿಲ್ಲ’ ಎಂದು ಸಾರ್ವಜನಿಕ ಗಣೇಶೋತ್ಸವ ಸಮಿತಿಗಳಿಂದ ಮುಚ್ಚಳಿಕೆ ಬಳಸಿಕೊಂಡು ಪೆಂಡಾಲ್‌ಗೆ ಅನುಮತಿ ನೀಡುವಂತೆ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಿಒಪಿ ಮೂರ್ತಿಗಳನ್ನು ನೀರಿನಲ್ಲಿ ವಿಸರ್ಜನೆ ಮಾಡಿದರೆ ಅವು ಕರಗುವುದಿಲ್ಲ. ಅವುಗಳಲ್ಲಿರುವ ವಿಷಕಾರಕ ಅಂಶಗಳು ನೀರಿನಲ್ಲಿ ಸೇರಿ, ಜಲಚರಗಳ ಸಾವಿಗೆ ಕಾರಣವಾಗುತ್ತವೆ. ಹೀಗಾಗಿ, ಗಣೇಶೋತ್ಸವ ಸಮಿತಿಗಳು ಮತ್ತು ಸಾರ್ವಜನಿಕರು ಪಿಒಪಿ ಗಣಪತಿ ಮೂರ್ತಿಗಳನ್ನು ಖರೀದಿಸದೆ, ಪರಿಸರ ಸ್ನೇಹಿಯಾದ ಮಣ್ಣಿನ ಗಣಪತಿ ಮೂರ್ತಿಗಳನ್ನು ಪೂಜಿಸಬೇಕು ಎಂದು ಮನವಿ ಮಾಡಿದರು.
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶೇ 90ರಷ್ಟು ಮಣ್ಣಿನ ವಿಗ್ರಹಗಳನ್ನೇ ಪೂಜಿಸುತ್ತಾರೆ. ಅಲ್ಲಿ ಸಾಧ್ಯವಾಗುವುದಾದರೆ ಉಳಿದ ಕಡೆ ಏಕೆ ಆಗುವುದಿಲ್ಲ. ಈ ಬಗ್ಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾಡಳಿತ, ತಾಲ್ಲೂಕು ಆಡಳಿತ ಮತ್ತು ಸ್ಥಳೀಯ ಸಂಸ್ಥೆಗಳು ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು.
ಬೆಂಗಳೂರು ನಗರ ಸೇರಿದಂತೆ ರಾಜ್ಯದ ಅನೇಕ ಪಟ್ಟಣ, ನಗರಗಳಲ್ಲಿ ಸಮುಚ್ಚಯಗಳಿವೆ. ಇವುಗಳಲ್ಲಿ ಸಂಘಗಳು ಇರುತ್ತವೆ. ಮಣ್ಣಿನ ಗಣಪತಿ ಪೂಜಿಸುವಂತೆ ಅವರಿಗೆ ಮನವಿ ಮಾಡಲು ಮತ್ತು ಶಾಲಾ, ಕಾಲೇಜು ಮಕ್ಕಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನು ಪೂಜಿಸುವ ಬಗ್ಗೆ ಅರಿವು ಮೂಡಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.
ಹಸಿರು ಪಟಾಕಿ: ಗಣೇಶೋತ್ಸವದ ವೇಳೆ ಪಟಾಕಿ ಹಚ್ಚಲಾಗುತ್ತದೆ. 125 ಡೆಸಿಬಲ್‌ಗಿಂತ ಹೆಚ್ಚು ಶಬ್ದ ಮಾಡುವ ಪಟಾಕಿ ಸಿಡಿಸದಂತೆ ಮತ್ತು ರಾತ್ರಿ 8ರಿಂದ 10 ಗಂಟೆಯೊಳಗೆ ಮಾತ್ರ ಪಟಾಕಿ ಸಿಡಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದ್ದು, ಇದನ್ನು ಎಲ್ಲರೂ ಪಾಲಿಸಬೇಕು. ಪರಿಸರಕ್ಕೆ ಮಾರಕವಾದ ಪಟಾಕಿ ಬಳಸದೆ, ಹಸಿರು ಪಟಾಕಿ ಸಿಡಿಸಬೇಕು ಎಂದು ಸೂಚಿಸಿದರು.
ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಪಿ.ಎಂ. ನರೇಂದ್ರ ಸ್ವಾಮಿ, ಸದಸ್ಯ ಕಾರ್ಯದರ್ಶಿ ಎಸ್.ಎಸ್. ಲಿಂಗರಾಜ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.