ADVERTISEMENT

ವಿಧಾನಸಭಾ ಅಧಿವೇಶನಕ್ಕೆ ಮುಂಜಾಗ್ರತಾ ಕ್ರಮ

29, 30ರಂದು ವಿಧಾನಸೌಧ ಸುತ್ತ ನಿಷೇಧಾಜ್ಞೆ

​ಪ್ರಜಾವಾಣಿ ವಾರ್ತೆ
Published 27 ಜುಲೈ 2019, 19:49 IST
Last Updated 27 ಜುಲೈ 2019, 19:49 IST
ವಿಧಾನಸೌಧ
ವಿಧಾನಸೌಧ   

ಬೆಂಗಳೂರು: ಇದೇ 29 ಮತ್ತು 30ರಂದು ವಿಧಾನಸಭಾ ಅಧಿವೇಶನ ನಡೆಯಲಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ವಿಧಾನಸೌಧದ ಸುತ್ತಮುತ್ತ 2 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ (ಸೆಕ್ಷನ್ 144) ಜಾರಿಗೊಳಿಸಲು ಪೊಲೀಸ್‌ ಇಲಾಖೆ ನಿರ್ಧರಿಸಿದೆ.

ಈ ಸಂಬಂಧ ನಗರ ಪೊಲೀಸ್ ಕಮಿಷನರ್ ಅಲೋಕ್‌ ಕುಮಾರ್ ಆದೇಶ ಹೊರಡಿಸಿದ್ದು, ಜುಲೈ 29ರ ಬೆಳಿಗ್ಗೆ 6ಗಂಟೆಯಿಂದ ಜುಲೈ30ರ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ.

ವಿಧಾನಸೌಧ ಸುತ್ತಮುತ್ತ ಹಾಗೂ ನಗರದಲ್ಲಿ ರಾಜಕೀಯ ಪಕ್ಷಗಳ ಮುಖಂಡರು, ಅವರ ಬೆಂಬಲಿಗರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ. ಆ ರೀತಿಯಾದರೆ ಪರಸ್ಪರ ಘರ್ಷಣೆ ಉಂಟಾಗಲಿದ್ದು, ಸಾರ್ವಜನಿಕರಿಗೆ ತೊಂದರೆ ಆಗಲಿದೆ. ಶಾಂತಿ ಕಾಪಾಡುವ ಉದ್ದೇಶದಿಂದ ಈ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ADVERTISEMENT

ನಿಷೇಧ ಜಾರಿಯ ಅವಧಿಯಲ್ಲಿ ಮೆರವಣಿಗೆ, ಪ್ರತಿಭಟನೆ, ಧರಣಿ ಮತ್ತು ಸಭೆ ನಡೆಸುವಂತಿಲ್ಲ. ಐದು ಅಥವಾ ಅದಕ್ಕಿಂತ ಹೆಚ್ಚು ಜನ ಗುಂಪು ಸೇರುವಂತಿಲ್ಲ. ಶಸ್ತ್ರಾಸ್ತ್ರ, ದೊಣ್ಣೆ, ಕತ್ತಿ, ಈಟಿ, ಗದೆ, ಕಲ್ಲು, ಇಟ್ಟಿಗೆ, ಚಾಕು ಸೇರಿದಂತೆ ಯಾವುದೇ ಮಾರಕಾಸ್ತ್ರ ಹಿಡಿದು ಓಡಾಡುವಂತಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.