ADVERTISEMENT

ಗರ್ಭಿಣಿಯರಿಗೆ ಮನೆಯಿಂದ ಕೆಲಸ: ನೌಕರರ ಮನವಿ

​ಪ್ರಜಾವಾಣಿ ವಾರ್ತೆ
Published 21 ಜೂನ್ 2021, 22:31 IST
Last Updated 21 ಜೂನ್ 2021, 22:31 IST

ಬೆಂಗಳೂರು: ಕೋವಿಡ್‌ ಸಂಪೂರ್ಣ ನಿಯಂತ್ರಣಕ್ಕೆ ಬಾರದೇ ಇರುವುದರಿಂದ ಶಿಕ್ಷಣ ಇಲಾಖೆಯೂ ಸೇರಿದಂತೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗರ್ಭಿಣಿಯರಿಗೆ ಮುಂದಿನ ಎರಡು ತಿಂಗಳು ಮನೆಯಿಂದಲೇ ಕೆಲಸ ಮಾಡಲು ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿ ಮುಖ್ಯಮಂತ್ರಿ
ಬಿ. ಎಸ್‌. ಯಡಿಯೂರಪ್ಪ ಅವರಿಗೆ ರಾಜ್ಯದ ಸರ್ಕಾರದ ಮಹಿಳಾ ನೌಕರರು ಮನವಿ ಸಲ್ಲಿಸಿದ್ದಾರೆ.

ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರು ಇದೇ 19ರಂದು ಹೊರಡಿಸಿದ್ದ ಆದೇಶದಲ್ಲಿ ಗ್ರೂಪ್‌ ಬಿ, ಸಿ ಮತ್ತು ಡಿ ವೃಂದದ ಅಧಿಕಾರಿ ಮತ್ತು ಸಿಬ್ಬಂದಿ ವರ್ಗ ಶೇ 50ರಂತೆ ಪಾಳಿ ಆಧಾರದಲ್ಲಿ ಕರ್ತವ್ಯಕ್ಕೆ ಹಾಜರಾಗು
ವಂತೆ ಸೂಚಿಸಿದ್ದಾರೆ. ಅಲ್ಲದೆ, ಈ ವರ್ಗದ ಸಿಬ್ಬಂದಿ ಕೇಂದ್ರ ಸ್ಥಾನದಲ್ಲಿಯೇ ಇದ್ದು, ಕೋವಿಡ್‌ ಕರ್ತವ್ಯಕ್ಕೆ ನಿಯೋಜಿಸಿದರೆ ಕಡ್ಡಾಯವಾಗಿ ಹಾಜರಾಗಬೇಕು ಎಂದೂ ತಿಳಿಸಿದ್ದಾರೆ.

ಆದರೆ, ಈ ಸುತ್ತೋಲೆಯಲ್ಲಿ ಗರ್ಭಿಣಿಯರು ಮತ್ತು ಅಂಗವಿಕಲ ನೌಕರರಿಗೆ ಯಾವುದೇ ವಿನಾಯಿತಿ ನೀಡಿಲ್ಲ. ರಾಜ್ಯದಲ್ಲಿರುವ ಅಂದಾಜು 6 ಲಕ್ಷ ಸರ್ಕಾರಿ ನೌಕರರ ಪೈಕಿ ಶೇ 10ರಷ್ಟು ಗರ್ಭಿಣಿಯರು ಇರಬಹುದು. ಗರ್ಭಿಣಿಯರು ಕೋವಿಡ್‌ ಲಸಿಕೆ ತೆಗೆದುಕೊಳ್ಳಬಾರದು ಎಂದು ವಿಶ್ವ ಆರೋಗ್ಯ ಸಂಸ್ಥೆ, ಐಸಿಎಂಆರ್‌, ಏಮ್ಸ್‌, ರಾಜ್ಯ ಕೋವಿಡ್‌ ತಾಂತ್ರಿಕ ಸಮಿತಿಯ ತಜ್ಞರು ಸಲಹೆ ನೀಡಿದ್ದಾರೆ. ಹೀಗಾಗಿ, ಕೋವಿಡ್‌ ಮತ್ತು ಕಪ್ಪು ಶಿಲೀಂಧ್ರ (ಬ್ಲ್ಯಾಕ್‌ ಫಂಗಸ್‌) ರೋಗ ಸಂಪೂರ್ಣ ನಿಯಂತ್ರಣಕ್ಕೆ ಬರುವವರೆಗೆ ಗರ್ಭಿಣಿ ನೌಕರರಿಗೆ ತಮ್ಮ ಮನೆಯಿಂದಲೇ ಕೆಲಸ ನಿರ್ವಹಿಸಲು ಅವಕಾಶ ಕಲ್ಪಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.