ADVERTISEMENT

25ರಂದು ಪ್ರತಿಭಟನಾ ಮೆರವಣಿಗೆ

ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಸಮುದಾಯಗಳ ಕಡೆಗಣನೆ: ಆರೋಪ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2021, 18:04 IST
Last Updated 22 ಅಕ್ಟೋಬರ್ 2021, 18:04 IST

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಫಲಾನುಭವಿಗಳಿಗೆ ಯಾವುದೇ ಹಣ ವಿನಿಯೋಗ ಮಾಡುತ್ತಿಲ್ಲ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯುಆರೋಪಿಸಿದೆ.

ಇಲಾಖೆಯ ಧೋರಣೆಯನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅ.25ರಂದು ಬೆಳಿಗ್ಗೆ 11 ಗಂಟೆಗೆ ಮೈಸೂರು ಬ್ಯಾಂಕ್ ವೃತ್ತದಿಂದ ಮುಖ್ಯಮಂತ್ರಿ ನಿವಾಸದವರೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದೆ.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಎನ್.ಮೂರ್ತಿ,‘ಕೋವಿಡ್‌ನಿಂದಾಗಿಎರಡು ವರ್ಷಗಳಿಂದಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದವರ ಬದುಕು ದುಸ್ತರವಾಗಿದೆ. ಸಮುದಾಯದ ಅಭಿವೃದ್ಧಿಗಾಗಿ ರಚನೆಯಾಗಿರುವ ನಿಗಮಗಳು ಹಾಗೂ ಸಮಾಜ ಕಲ್ಯಾಣ ಇಲಾಖೆ ಜನರಿಗಾಗಿ ಬಿಡಿಗಾಸನ್ನೂ ವಿನಿಯೋಗಿಸಿಲ್ಲ’ ಎಂದು ದೂರಿದರು.

ADVERTISEMENT

‘ಸಮುದಾಯದ 4 ಲಕ್ಷಕ್ಕೂ ಹೆಚ್ಚಿನ ವಿದ್ಯಾರ್ಥಿಗಳಿಗೆವಿದ್ಯಾರ್ಥಿವೇತನ ಬಿಡುಗಡೆಯಾಗಿಲ್ಲ. ಹಾಸ್ಟೆಲ್‌ಗಳನ್ನೂ ಮುಚ್ಚಲಾಗಿದ್ದು,ಇಲಾಖೆಯ ಹಣವನ್ನು ವಿವಿಧ ಇಲಾಖೆಗಳಿಗೆ ವರ್ಗಾಯಿಸಲಾಗಿದೆ. ಬಿಡುಗಡೆಯಾಗಿರುವ ಹಣವೆಲ್ಲ ಎಲ್ಲಿಗೆ ತಲುಪಿದೆ ಎಂಬ ಬಗ್ಗೆ ಶ್ವೇತಪತ್ರ ಹೊರಡಿಸಬೇಕು’ ಎಂದು ಆಗ್ರಹಿಸಿದರು.

‘ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳಲ್ಲಿ ನೊಂದವರಿಗೆ ಯಾವುದೇ ನ್ಯಾಯ ಮತ್ತು ಪರಿಹಾರಗಳು ಸಿಗುತ್ತಿಲ್ಲ. ಇಲಾಖೆಯ ಸಚಿವರೂ ಅವರ ನೆರವಿಗೆ ಧಾವಿಸಿಲ್ಲ. ಹಾಗಾಗಿ, ಈ ಅನ್ಯಾಯಗಳನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರಲು ತಮಟೆ ಹಾಗೂ ಡೊಳ್ಳುಗಳೊಂದಿಗೆ ಪ್ರತಿಭಟನೆ ನಡೆಸಲಿದ್ದೇವೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.