ADVERTISEMENT

ವಿದ್ಯಾಗಮ ಹೆಸರಿನಲ್ಲಿ ಕೋವಿಡ್ ಮಾರ್ಗಸೂಚಿ ಉಲ್ಲಂಘನೆ: ಆರೋಪ

ಅನುದಾನ ರಹಿತ ಶಾಲೆಗಳಿಗೆ ಅನ್ಯಾಯ: ಆರೋಪ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2020, 20:01 IST
Last Updated 9 ಅಕ್ಟೋಬರ್ 2020, 20:01 IST

ಬೆಂಗಳೂರು: ‘ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳನ್ನು ಕೋವಿಡ್‌ನಂತಹ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರ ನಿರ್ಲಕ್ಷಿಸುತ್ತಿದೆ. ವಿದ್ಯಾಗಮ ಹೆಸರಿನಲ್ಲಿ ಸರ್ಕಾರವೇ ಕೋವಿಡ್‌ ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತಿದೆ’ ಎಂದು ಮಾನ್ಯತೆ ಪಡೆದ ಅನುದಾನರಹಿತ ಖಾಸಗಿ ಶಾಲೆಗಳ ಸಂಘದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಆರೋಪಿಸಿದರು.

‘ಕೇಂದ್ರ ಸರ್ಕಾರ ತನ್ನ ಅಧೀನದ ಶಾಲೆಗಳಿಗೆ ಶೈಕ್ಷಣಿಕ ಚಟುವಟಿಕೆಗಳು ಮತ್ತು ಶೈಕ್ಷಣಿಕ ವೇಳಾಪಟ್ಟಿಯ ಕುರಿತು ಸ್ಪಷ್ಟ ಮಾರ್ಗಸೂಚಿ ಹೊರಡಿಸಿದೆ. ಆದರೆ ರಾಜ್ಯ ಸರ್ಕಾರ ಈವರೆಗೂ ಅಂತಹ ಯಾವ ನಿರ್ದೇಶನಗಳನ್ನೂ ನೀಡಿಲ್ಲ. ಎಷ್ಟು ಪಾಠ ಮಾಡಬೇಕು, ಯಾವ ವಿಷಯಗಳು ಈ ವರ್ಷದ ಶೈಕ್ಷಣಿಕ ಚಟುವಟಿಕೆಯಲ್ಲಿ ಇವೆ ಎಂದು ಗೊತ್ತಾಗುತ್ತಿಲ್ಲ’ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಅಸಮಾಧಾನ ವ್ಯಕ್ತಪಡಿಸಿದರು.

‘ವಿದ್ಯಾಗಮ ಹೆಸರಿನಲ್ಲಿ ಶಿಕ್ಷಕ–ಶಿಕ್ಷಕಿಯರನ್ನು ಕೋವಿಡ್‌ಗೆ ಬಲಿ ಕೊಡಲಾಗುತ್ತಿದೆ.ಬಯಲಲ್ಲಿ ಮಕ್ಕಳಿಗೆ ಪಾಠ ಮಾಡುವಾಗ ಸೋಂಕು ತಗುಲಿ ಶಿಕ್ಷಕರು ಮೃತಪಟ್ಟಿದ್ದಾರೆ. ಅಲ್ಲದೆ,ಖಾಸಗಿ ಶಾಲೆಗಳ ವಿದ್ಯಾರ್ಥಿಗಳು ವಿದ್ಯಾಗಮದ ಅಡಿ ಪಾಠ ಕೇಳಲು ಹೋದರೆ, ವರ್ಗಾವಣೆ ಪತ್ರ ತೆಗೆದುಕೊಂಡು ಬಂದು ಸರ್ಕಾರಿ ಶಾಲೆಗೆ ಸೇರಿಸಿ ಎಂದು ಒತ್ತಡ ಹೇರುತ್ತಿದ್ದಾರೆ’ ಎಂಬುದಾಗಿ ಹೇಳಿದರು.

ADVERTISEMENT

‘ಸರ್ಕಾರ ತಲುಪದ ಭಾಗಗಳಲ್ಲೂ ನಾವು ಶಾಲೆಗಳನ್ನು ಆರಂಭಿಸಿ ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದೇವೆ. ಸರ್ಕಾರ ಪ್ರತಿ ವಿದ್ಯಾರ್ಥಿಗೆ ವರ್ಷಕ್ಕೆ ₹40 ಸಾವಿರ ಖರ್ಚು ಮಾಡುತ್ತಿದೆ. ನಾವು ₹10 ಸಾವಿರಕ್ಕಿಂತ ಕಡಿಮೆ ಶುಲ್ಕ ಪಡೆದು ಶಿಕ್ಷಣ ನೀಡುತ್ತಿದ್ದೇವೆ. 20 ಸಾವಿರ ಶಾಲೆಗಳಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿದ್ದೇವೆ. ಈ ಶಾಲೆಗಳಿಗೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಆರ್‌ಟಿಇ ಬಾಕಿ ಹಣ ಬಿಡುಗಡೆ ಮಾಡಬೇಕು’ ಎಂದು ಅವರು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.