ADVERTISEMENT

ಹೊರಗುತ್ತಿಗೆ ನೌಕರರನ್ನು ಕಾಯಂಗೊಳಿಸಲು ಆಗ್ರಹ

ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರ ಅನಿರ್ದಿಷ್ಟಾವಧಿ ಪ್ರತಿಭಟನೆ ನಾಳೆಯಿಂದ

​ಪ್ರಜಾವಾಣಿ ವಾರ್ತೆ
Published 30 ಜನವರಿ 2023, 17:16 IST
Last Updated 30 ಜನವರಿ 2023, 17:16 IST

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಹೊರಗುತ್ತಿಗೆ ನೌಕರರನ್ನು ನೇರ ಪಾವತಿಗೊಳಪಡಿಸಿ, ಕಾಯಂಗೊಳಿಸಬೇಕು ಎಂದು ಆಗ್ರಹಿಸಿ ಫೆ. 1ರಿಂದ ರಾಜ್ಯದಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪ‍ಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ಸಂಘ ಆಗ್ರಹಿಸಿದೆ.

ಕುಡಿಯುವ ನೀರು ಮತ್ತು ಸ್ವಚ್ಛತಾ ಕೆಲಸವನ್ನು ಸ್ಥಗಿತಗೊಳಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ‍ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದೆ.

‘ರಾಜ್ಯ ಸರ್ಕಾರ ಪೌರಕಾರ್ಮಿಕರನ್ನು ನೇರ ನೇಮಕಾತಿ ಮಾಡಿಕೊಂಡ ರೀತಿಯಲ್ಲಿ ವಾಹನ ಚಾಲಕರು, ನೀರು ಸರಬರಾಜು ಸಹಾಯಕರು, ಲೋಡರ್ಸ್, ಕ್ಲೀನರ್ಸ್, ಹೆಲ್ಪರ್ಸ್‌, ಡಾಟಾ ಆಪರೇಟರ್ಸ್‌ ಮತ್ತು ಸ್ಯಾನಿಟರಿ ಸೂಪರ್‌ ವೈಸರ್ಸ್‌ ಸೇರಿ 15 ಸಾವಿರಕ್ಕೂ ಹೆಚ್ಚು ನೌಕರರು ಹೊರಗುತ್ತಿಗೆಯಲ್ಲಿ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರೆಲ್ಲರನ್ನು ಕೂಡಲೇ ನೇರ ಪಾವತಿಗೊಳಪಡಿಸಿ ಹಂತ ಹಂತವಾಗಿ ಖಾಯಂಗೊಳಿಸಬೇಕು’ ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಂ.ಬಿ. ನಾಗಣ್ಣಗೌಡ ಸೋಮವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ADVERTISEMENT

‘ನಗರಗಳ ಸ್ವಚ್ಛತೆ ಹಾಗೂ ಕುಡಿಯುವ ನೀರು ನಿರ್ವಹಣೆಯಲ್ಲಿ ಹೊರಗುತ್ತಿಗೆ ನೌಕರರ ಪಾತ್ರ ಮಹತ್ವದಾಗಿದೆ. 2017 ಮತ್ತು 2022 ಸರ್ಕಾರ ಪೌರಕಾರ್ಮಿಕರನ್ನು ನೇರ ನೇಮಕಾತಿ ಮಾಡಿಕೊಂಡಿದೆ. ಆದರೆ, ನಮ್ಮನ್ನು ಪರಿಗಣಿಸಿದೇ ತಾರತಮ್ಯ ನೀತಿ ಅನುಸರಿಸಲಾಗಿದೆ. ಒಂದೇ ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ನೌಕರರ ಮಧ್ಯ ಸರ್ಕಾರ ಒಡೆದಾಳುವ ನೀತಿಯನ್ನು ಅನುಸರಿಸುತ್ತಿದೆ’ ಎಂದು ಆರೋಪಿಸಿದರು.

‘ರಾಜ್ಯದ 330 ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರು ಈ ಮುಷ್ಕರದಲ್ಲಿ ಭಾಗವಹಿಸಲಿದ್ದಾರೆ. ಕುಡಿಯುವ ನೀರು ಮತ್ತು ಕಸ ವಿಲೇವಾರಿಯಲ್ಲಿ ನಾಗರಿಕರಿಗೆ ಆಗುವ ಅನನುಕೂಲಕ್ಕೆ ನಾವು ಜವಾಬ್ದಾರರಲ್ಲ. ಸಾರ್ವಜನಿಕರು ನಮ್ಮ ಹೋರಾಟಕ್ಕೆ ಕೈ ಜೋಡಿಸಬೇಕು’ ಎಂದು ಕರೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.