ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು, ನ್ಯಾಯಾಲಯದ ಷರತ್ತಿಗೆ ಒಳಪಟ್ಟು ನೇಮಕಾತಿ ಆದೇಶ ನೀಡುವಂತೆ ಆಗ್ರಹಿಸಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಶುಕ್ರವಾರದಿಂದ
ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದರು. ಮಳೆಯಲ್ಲಿ ಕೊಡೆ ಹಿಡಿದು ಪ್ರತಿಭಟನೆ ನಡೆಸಿ, ಆಕ್ರೋಶ ಹೊರಹಾಕಿದರು.
ಲೋಕಸಭೆ ಚುನಾವಣೆ ನೀತಿ ಸಂಹಿತೆ ಕಾರಣದಿಂದ ಸ್ಥಳ ನಿಯುಕ್ತಿ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ಇಲಾಖೆ ಮುಂದೂಡಿತ್ತು. ಲೋಕಸಭೆ ಚುನಾವಣೆ ಮುಕ್ತಾಯವಾಗಿ ಒಂದೂವರೆ ತಿಂಗಳು ಕಳೆದರೂ ಸ್ಥಳ ನಿಯುಕ್ತಿ ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ಇಲಾಖೆ ಪ್ರಕಟಿಸಿಲ್ಲ. ನಾನಾ ಕಾರಣದಿಂದ ನೇಮಕಾತಿ ಆದೇಶ ನೀಡದೇ ದಿನಾಂಕ
ಮುಂದೂಡಲಾಗುತ್ತಿದೆ. ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾದವರ ಭವಿಷ್ಯ ಡೋಲಾಯಮಾನ ಆಗಿದೆ ಎಂದು ಅಭ್ಯರ್ಥಿಗಳು ಅಳಲು ತೋಡಿಕೊಂಡರು.
'ಕಲ್ಯಾಣ ಕರ್ನಾಟಕ ಮೀಸಲಾತಿ ವಿಚಾರವು ಹೈಕೋರ್ಟ್‌ನಲ್ಲಿದ್ದು, ಪ್ರಕರಣ ಮುಕ್ತಾಯವಾದ ಮೇಲೆ ನೇಮಕಾತಿ ಮುಂದುವರೆಸುತ್ತೇವೆ’
ಎಂದು ಉನ್ನತ ಶಿಕ್ಷಣ ಸಚಿವರು ಹಾಗೂ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಆದರೆ, ವಾಸ್ತವವಾಗಿ ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ ಕೌನ್ಸೆಲಿಂಗ್ ನಡೆಸಲು ಅವಕಾಶ ನೀಡಿ ಆದೇಶ ನೀಡಿದೆ. ಆದರೂ, ಕೌನ್ಸೆಲಿಂಗ್ ನಡೆಸುತ್ತಿಲ್ಲ ಎಂದು ಅಳಲು ತೋಡಿಕೊಂಡರು.
‘ಕಲ್ಯಾಣ ಕರ್ನಾಟಕ ಮೀಸಲಾತಿ ವಿಚಾರವಾಗಿ ಹೈಕೋರ್ಟ್‌ನಲ್ಲಿ ಹಲವು ಪ್ರಕರಣಗಳು ವಿಚಾರಣೆ ಹಂತದಲ್ಲಿದ್ದರೂ ಇತರೆ ಇಲಾಖೆಗಳಲ್ಲಿ ನ್ಯಾಯಾಲಯದ ಷರತ್ತಿಗೆ ಒಳಪಟ್ಟು ಆದೇಶ ನೀಡಲಾಗಿದೆ. ಅದರಂತೆ ನಮಗೂ ಆದೇಶ ಪ್ರತಿ ನೀಡಿ’ ಎಂದು ಅಭ್ಯರ್ಥಿಗಳು ಆಗ್ರಹಿಸಿದರು.
2021ರಲ್ಲಿ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರ 26 ವಿಷಯಗಳ 1,242 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿತ್ತು. 2023ರ ಮಾರ್ಚ್ 3ರಂದು 1,208 ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. ಈ ಆಯ್ಕೆ ಪಟ್ಟಿಯಲ್ಲಿ ಒಟ್ಟು 1,208 ಅಭ್ಯರ್ಥಿಗಳು ಆಯ್ಕೆ ಆಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.