ಬೆಂಗಳೂರು: ನಕಲಿ ಪ್ರಮಾಣ ಪತ್ರ ಸಲ್ಲಿಸಿರುವ ಅಭ್ಯರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ, ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಒಕ್ಕೂಟದ ನೇತೃತ್ವದಲ್ಲಿ ಅತಿಥಿ ಉಪನ್ಯಾಸಕರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ಯುಜಿಸಿಯ ಅರ್ಹ ಮಾನದಂಡ ಹೊಂದಿರುವ ಅತಿಥಿ ಉಪನ್ಯಾಸಕರಿಗೆ ಆಗುತ್ತಿರುವ ಅನ್ಯಾಯವನ್ನು ತಕ್ಷಣವೇ ಸರಿಪಡಿಸಲು ಶಿಕ್ಷಣ ಇಲಾಖೆ ಕ್ರಮ ತೆಗೆದುಕೊಳ್ಳಬೇಕು ಎಂದೂ ಪ್ರತಿಭಟನಕಾರರು ಆಗ್ರಹಿಸಿದರು.
2025–26ನೇ ಶೈಕ್ಷಣಿಕ ಸಾಲಿನಿಂದಲೇ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಯುಜಿಸಿಯ ಮಾನದಂಡ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಬೇಕಾಗಿ ಹೈಕೋರ್ಟ್ ಆದೇಶ ನೀಡಿದೆ. ಆದರೆ, ಇದುವರೆಗೂ ಶಿಕ್ಷಣ ಇಲಾಖೆಯಿಂದ ಆಯ್ಕೆ ಪ್ರಕ್ರಿಯೆ ಆರಂಭವಾಗಿಲ್ಲ. ಎಂ.ಫಿಲ್, ಪಿಎಚ್.ಡಿಯ ನಕಲಿ ಸೇವಾ ಪ್ರಮಾಣ ಪತ್ರ ಪಡೆದು ಕಾರ್ಯನಿರ್ವಹಿಸುತ್ತಿರುವ ಸಾಕಷ್ಟು ಅಭ್ಯರ್ಥಿಗಳಿದ್ದಾರೆ. ಈ ಸಂಗತಿಯು ಇಲಾಖೆಯ ಗಮನಕ್ಕೂ ಬಂದಿದೆ. ಅಂತಹವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ನಕಲಿ ಪಿಎಚ್.ಡಿ ಪ್ರಮಾಣ ಪತ್ರಗಳನ್ನು ಪಡೆದು ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಭ್ಯರ್ಥಿಗಳನ್ನು ಈ ಬಾರಿ ಆಯ್ಕೆ ಪ್ರಕ್ರಿಯೆ ಹಂತದಲ್ಲೇ ಕೈಬಿಡಬೇಕು ಎಂದು ಆಗ್ರಹಿಸಿದರು.
ಒಕ್ಕೂಟದ ಅಧ್ಯಕ್ಷ ಕಾಂತಕುಮಾರ್, ಉಪಾಧ್ಯಕ್ಷ ಎಂ.ಎಸ್.ಶ್ರೇಯಸ್, ಪ್ರಧಾನ ಕಾರ್ಯದರ್ಶಿ ಜೆ.ಸಂಜಯ್‌ಕುಮಾರ್ ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.