ADVERTISEMENT

ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 21 ಮೇ 2019, 18:58 IST
Last Updated 21 ಮೇ 2019, 18:58 IST
ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸಂಘಟನೆಯ ಕಾರ್ಯಕರ್ತರು
ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸಂಘಟನೆಯ ಕಾರ್ಯಕರ್ತರು   

ಯಲಹಂಕ: ಅಪೂರ್ಣಗೊಂಡಿರುವ ಕಾಮಗಾರಿಯಿಂದ ನಿತ್ಯ ಅಪಘಾತಗಳು ಸಂಭವಿಸುತ್ತಿದ್ದರೂ ರಸ್ತೆಯನ್ನು ಸರಿಪಡಿಸಿಲ್ಲ ಎಂದು ಆರೋಪಿಸಿ, ಟೋಲ್ ಆಡಳಿತ ಮಂಡಳಿ ವಿರುದ್ಧ ಸುವರ್ಣ ಕರ್ನಾಟಕ ಜನಶಕ್ತಿ ವೇದಿಕೆಯ ನೂರಾರು ಕಾರ್ಯಕರ್ತರು ಯಲಹಂಕ- ದೊಡ್ಡಬಳ್ಳಾಪುರ ಮುಖ್ಯರಸ್ತೆಯ ಕಡತನಮಲೆ ಟೋಲ್ ಬಳಿ ಬೃಹತ್ ಪ್ರತಿಭಟನೆ ನಡೆಸಿದರು.

ಸುಮಾರು ಒಂದು ಗಂಟೆ ಕಾಲ ರಸ್ತೆತಡೆ ನಡೆಸಿದ ಪ್ರತಿಭಟನಾಕಾರರು,‘ಸಂಬಂಧಪಟ್ಟವರು ಸ್ಥಳಕ್ಕೆ ಬಂದು ಉತ್ತರ ನೀಡಬೇಕು’ ಎಂದು ಪಟ್ಟುಹಿಡಿದರು. ಇದರಿಂದ ಈ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿ, ವಾಹನಗಳು ಸುಮಾರು ಎರಡು ಕಿಲೋಮೀಟರ್‌ವರೆಗೆ ಸಾಲುಗಟ್ಟಿ ನಿಂತವು. ಇದರಿಂದ ವಾಹನ ಸವಾರರು ಪರದಾಡುವಂತಾಯಿತು.

ಈ ಸಂದರ್ಭದಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಸ್ಥಳದಲ್ಲಿ ಕೆಲಕಾಲ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಯಿತು.

ADVERTISEMENT

ಟೋಲ್ ಅಧಿಕಾರಿಗಳು ಮತ್ತು ಪೊಲೀಸರು ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರು.

‘ಮೂರು ದಿನಗಳೊಳಗೆ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುತ್ತೇವೆ. ಬೈರಾಪುರ ಗ್ರಾಮದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಆದಷ್ಟು ಬೇಗ ಪರಿಹಾರ ನೀಡುತ್ತೇವೆ’ ಎಂದು ಅಧಿಕಾರಿಗಳು ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಹಿಂದಕ್ಕೆ ಪಡೆಯಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.