ADVERTISEMENT

‘ದಲಿತ ಮಹಾಸಂಗಮ’ ರ‍್ಯಾಲಿ

ಪರಿಶಿಷ್ಟರ, ಅಲೆಮಾರಿಗಳ ಬೇಡಿಕೆ ಈಡೇರಿಕೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2019, 19:11 IST
Last Updated 7 ಮಾರ್ಚ್ 2019, 19:11 IST
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂಟ ವತಿಯಿಂದ ನಗರದಲ್ಲಿ ಗುರುವಾರ ‘ದಲಿತ ಮಹಾಸಂಗಮ’ ರ‍್ಯಾಲಿ ನಡೆಸಲಾಯಿತು – ಪ್ರಜಾವಾಣಿ ಚಿತ್ರ
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂಟ ವತಿಯಿಂದ ನಗರದಲ್ಲಿ ಗುರುವಾರ ‘ದಲಿತ ಮಹಾಸಂಗಮ’ ರ‍್ಯಾಲಿ ನಡೆಸಲಾಯಿತು – ಪ್ರಜಾವಾಣಿ ಚಿತ್ರ   

ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಲೆಮಾರಿ– ಬುಡಕಟ್ಟು ಜನಾಂಗಗಳ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಗರದಲ್ಲಿ ಗುರುವಾರ ‘ದಲಿತ ಮಹಾಸಂಗಮ ರ‍್ಯಾಲಿ’ ನಡೆಲಾಯಿತು.

ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಂ.ವೆಂಕಟಸ್ವಾಮಿ ನೇತೃತ್ವದಲ್ಲಿ ಈ ರ‍್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ಪುರಭವನದಿಂದ ಮೌರ್ಯ ವೃತ್ತದವರೆಗೆ ಜರುಗಿದ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದ ಜನಾಂಗದವರು, ಘೋಷಣಾ ಫಲಕಗಳನ್ನು ಪ್ರದರ್ಶಿಸಿದರು.

‘ರಾಜ್ಯ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಆಯೋಗಕ್ಕೆ ಅಧ್ಯಕ್ಷರನ್ನು ನೇಮಕ ಮಾಡಬೇಕು. ದಲಿತರ ಅಭಿವೃದ್ಧಿಗಾಗಿ ರೂಪಿಸಿರುವ ಸರ್ಕಾರದ ಯೋಜನೆಗಳಿಗೆ ಫಲಾನುಭವಿಗಳನ್ನು ಆಯ್ಕೆ ಮಾಡುವ ಅಧಿಕಾರವನ್ನು ಶಾಸಕರ ಅಧ್ಯಕ್ಷತೆಯ ಸಮಿತಿಯ ಬದಲು ಆಯಾ ಇಲಾಖೆ ಅಧಿಕಾರಿಗಳಿಗೆ ನೀಡಬೇಕು’ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ADVERTISEMENT

‘500 ಜನರಿಗೆ ಒಬ್ಬ ಪೌರ ಕಾರ್ಮಿಕರನ್ನು ನೇಮಕ ಮಾಡಬೇಕು. ಅಂಥ ಪೌರ ಕಾರ್ಮಿಕರಿಗೆ ನೇರ ವೇತನ ಪಾವತಿ ಮಾಡಬೇಕು.ನಕಲಿ ಜಾತಿ ಪ್ರಮಾಣ ಪತ್ರ ಜಾಲದ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

‘ಅರಣ್ಯ ಭೂಮಿ ಸಂಬಂಧ ಸುಪ್ರೀಂಕೋರ್ಟ್ ಇತ್ತೀಚೆಗೆ ಹೊರಡಿಸಿರುವ ಆದೇಶದಿಂದ ದಲಿತರು ಭೂಮಿ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಸುಪ್ರೀಂಕೋರ್ಟ್‌ಗೆಮರುಪರಿಶೀಲನಾ ಅರ್ಜಿ ಸಲ್ಲಿಸಿ ಸಮರ್ಥ ವಾದ ಮಂಡಿಸಿ ದಲಿತರಿಗೆ ನ್ಯಾಯ ಒದಗಿಸಬೇಕು’ ಎಂದು ಬೇಡಿಕೆಯಿಟ್ಟರು.

‘ಎಸ್‌.ಸಿ., ಎಸ್‌.ಟಿ. ಜನಾಂಗದ ಯೋಜನೆಗಳ ಫಲಾನುಭವಿಗಳ ಆದಾಯ ಮಿತಿಯನ್ನು ₹10 ಲಕ್ಷಕ್ಕೆ ಹೆಚ್ಚಿಸಬೇಕು. ರಾಜ್ಯದ ಎಲ್ಲ ನ್ಯಾಯಾಲಯಗಳಲ್ಲಿ ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಅನಾವರಣಗೊಳಿಸುವ ಆದೇಶ ಹೊರಡಿಸಬೇಕು’ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.