ಕನಿಷ್ಠ ವೇತನ ನೀಡುವುದು, (ಸಾಂದರ್ಭಿಕ ಚಿತ್ರ)
ಬೆಂಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ನೀತಿಗಳನ್ನು ವಿರೋಧಿಸಿ ಹಾಗೂ ಬಿಸಿಯೂಟ, ಅಂಗನವಾಡಿ, ಕೈಗಾರಿಕಾ ಕಾರ್ಮಿಕರಿಗೆ ₹31,500 ಕನಿಷ್ಠ ವೇತನ ನೀಡುವಂತೆ ಆಗ್ರಹಿಸಿ ಫೆ.1ರಂದು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ) ತಿಳಿಸಿದೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಐಟಿಯುಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಿ.ಎ. ವಿಜಯಭಾಸ್ಕರ್, ‘ಕಾರ್ಖಾನೆ ಕಾಯ್ದೆಗೆ ತಿದ್ದುಪಡಿ ಮಾಡುವ ಮೂಲಕ ಕೆಲಸದ ಅವಧಿಯನ್ನು 8 ಗಂಟೆಯಿಂದ 12 ಗಂಟೆಗೆ ಹೆಚ್ಚಿಸಿರುವುದನ್ನು ಕೂಡಲೇ ಹಿಂಪಡೆಯಬೇಕು. ಪ್ಲಾಂಟೇಷನ್ ಕಾರ್ಮಿಕರಿಗೆ ಸಮರ್ಪಕ ವೇತನದ ಜೊತೆಗೆ ವಸತಿ ಸೌಲಭ್ಯ ನೀಡಬೇಕು’ ಎಂದು ಒತ್ತಾಯಿಸಿದರು.
‘ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಸೆಸ್‌ನಿಂದ ಸಂಗ್ರಹಿಸಿರುವ ಹಣದ ದುರುಪಯೋಗವನ್ನು ತಡೆಯಬೇಕು. ಬೀಡಿ ಕಾರ್ಮಿಕರ ತುಟ್ಟಿಭತ್ಯೆ, ಕನಿಷ್ಠ ವೇತನ ಹಾಗೂ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು. ಗಿಗ್ ಕಾರ್ಮಿಕರಿಗೆ ಆರ್ಥಿಕ ಹಾಗೂ ಸಾಮಾಜಿಕ ಭದ್ರತೆ ಒದಗಿಸಬೇಕು. ನಾಲ್ಕು ಸಾರಿಗೆ ನಿಗಮಗಳ ನೌಕರರ ಬೇಡಿಕೆಗಳನ್ನು ಈಡೇರಿಸಬೇಕು’ ಎಂದು ಆಗ್ರಹಿಸಿದರು.
ಎಐಟಿಯುಸಿಯ ಕಾರ್ಯಾಧ್ಯಕ್ಷ ಎಂ. ದೀಪಕ್, ರಾಜ್ಯ ಉಪಾಧ್ಯಕ್ಷರಾದ ಬಿ. ಅಮ್ಜದ್, ಎಂ. ಜಯಮ್ಮ, ಕಾರ್ಯದರ್ಶಿ ಎಂ. ಸತ್ಯಾನಂದ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.