ಬೆಂಗಳೂರು: ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯದಲ್ಲೂ ಪ್ರೋತ್ಸಾಹಧನ ನೀಡುವುದೂ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಇಲ್ಲಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.
ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಆಶಾ ಕಾರ್ಯಕರ್ತೆಯರು, ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.
ಮುಖ್ಯಮಂತ್ರಿ ಘೋಷಿಸಿದ ರಾಜ್ಯದ ಗೌರವಧನ ಮತ್ತು ಕೇಂದ್ರದ ಭಾಗಶಃ ಪ್ರೋತ್ಸಾಹಧನ ಸೇರಿಸಿ ತಿಂಗಳಿಗೆ ಕನಿಷ್ಠ ₹10 ಸಾವಿರ ನೀಡುವ ಸಂಬಂಧ ಏಪ್ರಿಲ್‌ನಿಂದಲೇ ಅನ್ವಯ ಆಗುವಂತೆ ಆದೇಶ ಹೊರಡಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.
‘ಮಾರ್ಚ್‌ನಲ್ಲಿ ಮಂಡನೆಯಾದ ರಾಜ್ಯ ಬಜೆಟ್‌ನಲ್ಲಿ ಅಂಗನವಾಡಿ ಹಾಗೂ ಬಿಸಿಯೂಟ ಕಾರ್ಯಕರ್ತೆಯರಿಗೆ ₹1 ಸಾವಿರ ಪ್ರೋತ್ಸಾಹಧನ ಹೆಚ್ಚಿಸಲಾಗಿತ್ತು. ಅದೇ ಮಾದರಿಯಲ್ಲಿ ಆಶಾ ಕಾರ್ಯಕರ್ತೆಯರಿಗೂ ಪ್ರೋತ್ಸಾಹಧನ ನೀಡಬೇಕು’ ಎಂದು ಕೋರಿದರು.
ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆದು ಹಾಕಬಾರದು. ಆಶಾ ಕಾರ್ಯಕರ್ತೆಯರ ಕಾರ್ಯನಿರ್ವಹಣೆಯನ್ನು ಅವೈಜ್ಞಾನಿಕವಾಗಿ ಮೌಲ್ಯಮಾಪನ ಮಾಡಲಾಗುತ್ತಿದೆ. ಅದನ್ನು ಕೈಬಿಡಬೇಕು. ಆಶಾ ಸುಗಮಕಾರರನ್ನು ಸೂಕ್ತ ವೇತನ ನೀಡಿ ಕೆಲಸದಲ್ಲಿ ಮುಂದುವರಿಸಬೇಕು ಎಂದು ಆಗ್ರಹಿಸಿದರು.
ಪಶ್ಚಿಮ ಬಂಗಾಳದ ಮಾದರಿಯಲ್ಲಿ ನಿವೃತ್ತ ಆಶಾಗಳಿಗೆ ಇಡುಗಂಟು ನೀಡಬೇಕು. ನಗರದಲ್ಲಿ ಕೆಲಸ ಮಾಡುತ್ತಿರುವ ಕಾರ್ಯಕರ್ತೆಯರಿಗೆ ₹2 ಸಾವಿರ ಗೌರವಧನ ನೀಡಬೇಕು. ಕಳೆದ ಜೂನ್‌ನಲ್ಲಿ ಕೇಂದ್ರ ಸರ್ಕಾರವು ಪ್ರೋತ್ಸಾಹಧನ ಜಾರಿಗೆ ತಂದಿದೆ. ಅದನ್ನು ರಾಜ್ಯದಲ್ಲೂ ಜಾರಿ ಮಾಡಬೇಕು ಎಂದು ಪ್ರತಿಭಟನಕಾರರು ಕೋರಿದರು. ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.
ಸಂಘದ ರಾಜ್ಯ ಘಟಕದ ಅಧ್ಯಕ್ಷ ಕೆ.ಸೋಮಶೇಖರ್ ಯಾದಗಿರಿ, ಕಾರ್ಯದರ್ಶಿ ಡಿ.ನಾಗಲಕ್ಷ್ಮಿ, ಉಪಾಧ್ಯಕ್ಷರಾದ ಟಿ.ಸಿ.ರಮಾ ಸೇರಿ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.