ADVERTISEMENT

ಖಾಸಗಿ ಶಾಲಾ ಆಡಳಿತ ಮಂಡಳಿಯಿಂದ 23ರಂದು ಪ್ರತಿಭಟನಾ ರ‍್ಯಾಲಿ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2021, 8:46 IST
Last Updated 20 ಫೆಬ್ರುವರಿ 2021, 8:46 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ‘ಶಿಕ್ಷಣ ಇಲಾಖೆಯ ಧೋರಣೆ, ದ್ವಂದ್ವ ನಿಲುವು, ಅವೈಜ್ಞಾನಿಕ ಕ್ರಮಗಳನ್ನು ಖಂಡಿಸಿ ಇದೇ 23ರಂದು ಬೃಹತ್‌ ಪ್ರತಿಭಟನಾ ರ‍್ಯಾಲಿ ಮತ್ತು ಸಮಾವೇಶ ಹಮ್ಮಿಕೊಳ್ಳಲಾಗಿದೆ’ ಎಂದು ರಾಜ್ಯ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಸಂಘಟನೆಯ (ಕ್ಯಾಮ್ಸ್) ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್‌ ತಿಳಿಸಿದ್ದಾರೆ.

‘ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೆ ಅಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಬೃಹತ್‌ ಪ್ರತಿಭಟನಾ ರ‍್ಯಾಲಿಯಲ್ಲಿ ರಾಜ್ಯದಾದ್ಯಂತ ಖಾಸಗಿ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿ, ಶಿಕ್ಷಕರು, ವ್ಯವಸ್ಥಾಪಕರು ಸೇರಿ 25 ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಲಿದ್ದಾರೆ’ ಎಂದು ಅವರು ಹೇಳಿದ್ದಾರೆ.

‘ಕ್ಯಾಮ್ಸ್‌ ಮತ್ತು ಇತರ 10 ರಾಜ್ಯ ಸಂಘಟನೆಗಳನ್ನು ಒಳಗೊಂಡ ಕರ್ನಾಟಕ ಖಾಸಗಿ ಶಾಲಾ ಆಡಳಿತ ಮಂಡಳಿಗಳು, ಶಿಕ್ಷಣ– ಶಿಕ್ಷಕೇತರ ಸಿಬ್ಬಂದಿಯ ಸಮನ್ವಯ ಸಮಿತಿಯ ಅಡಿಯಲ್ಲಿ ಈ ರ‍್ಯಾಲಿ ಮತ್ತು ಪ್ರತಿಭಟನಾ ಸಮಾವೇಶ ನಡೆಯಲಿದೆ. ಸಂಜೆ 4 ಗಂಟೆಯವರೆಗೆ ಪ್ರತಿಭಟನೆ ನಡೆಯಲಿದೆ’ ಎಂದೂ ಅವರು ಹೇಳಿದ್ದಾರೆ.

ADVERTISEMENT

‘ಸರ್ಕಾರದ ಅನೇಕ ನಿಯಮಗಳು ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಆರ್ಥಿಕ ಸಂಕಷ್ಟಕ್ಕೆ ನೂಕಿದೆ. ಒಂದೆಡ ಶುಲ್ಕ ಕಡಿತ, ಇನ್ನೊಂದೆಡೆ ಹಳೆಯ ಶಾಲೆಗಳಿಗೂ ಹೊಸ ಶಾಲೆಗಳ ನಿಯಮ ಹೇರಿ ನವೀಕರಣದ ಹೆಸರಿನಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರಕ್ಕೆ ಅವಕಾಶ ಮಾಡಿ ಕೊಡಲಾಗಿದೆ. ಸರ್ಕಾರ ಅನೇಕ ವ್ಯವಸ್ಥೆಗಳಿಗೆ ನಯಾ ಪೈಸೆಯ ಸಹಕಾರ ಕೊಡದೇ ಇರುವುದರಿಂದ ಶಿಕ್ಷಕರು ಮತ್ತು ಶಿಕ್ಷಕರೇತರ ಸಿಬ್ಬಂದಿ ಕಷ್ಟಕ್ಕೆ ಸಿಲುಕಿದ್ದಾರೆ. ಶಿಕ್ಷಣ ಸಚಿವರು ಮತ್ತು ಶಿಕ್ಷಣ ಇಲಾಖೆ ನಮ್ಮ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ. ಇದರ ವಿರುದ್ಧ ಪ್ರತಿಭಟನೆ ನಡೆಯಲಿದೆ’ ಎಂದೂ ಅವರು ವಿವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.