ಕೆ.ಆರ್.ಪುರ: ಅರಣ್ಯ ಇಲಾಖೆ ಒತ್ತುವರಿ ತೆರವು ಹೆಸರಿನಲ್ಲಿ, ದಶಕಗಳಿಂದ ನೆಲಸಿರುವ ನಿವಾಸಿಗಳನ್ನು ಒಕ್ಕಲೆಬ್ಬಿಸುತ್ತಿದೆ ಎಂದು ಆರೋಪಿಸಿ ದಿನ್ನೂರು ಗ್ರಾಮದ ಸರ್ವೇ ನಂಬರ್ 1ರಲ್ಲಿನ ದಿನ್ನೂರು ಗ್ರಾಮಸ್ಥರು ಹಾಗೂ ವಿವಿಧ ಸಂಘಟನೆಗಳು ಹದಿನೈದು ದಿನಗಳಿಂದ ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದೆ.
ದಿನ್ನೂರಿನಲ್ಲಿ ಜೂನ್ 23 ರಿಂದ ಅರಣ್ಯ ಇಲಾಖೆ ಒತ್ತುವರಿ ತೆರವು ಕಾರ್ಯಾಚರಣೆ ಕೈಗೊಂಡಿದೆ. ಅಂದಿನಿಂದಲೇ ಅರಣ್ಯ ಇಲಾಖೆ ವಿರುದ್ಧ ಸ್ಥಳೀಯ ನಿವಾಸಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಇವರಿಗೆ ರೈತ, ದಲಿತ, ಕಾರ್ಮಿಕ ಸಂಘಟನೆ, ರಾಜಕೀಯ ಪಕ್ಷಗಳ ಮುಖಂಡರು ಬೆಂಬಲ ವ್ಯಕ್ತಪಡಿಸಿದ್ದಾರೆ.
‘ದಿನ್ನೂರಿನಲ್ಲಿ ಒತ್ತುವರಿ ತೆರವು ಹೆಸರಿನಲ್ಲಿ ಅರಣ್ಯ ಇಲಾಖೆ ನಮ್ಮ ಜಮೀನುಗಳನ್ನು ಕಿತ್ತುಕೊಳ್ಳಲು ಮುಂದಾಗಿದೆ. ಗ್ರಾಮದ ಹಿರಿಯರಿಗೆ ಅಂದಿನ ಮೈಸೂರಿನ ಮಹಾರಾಜರು ಜಮೀನುಗಳನ್ನು ಹಂಚಿಕೆ ಮಾಡಿದ್ದರು. ಅಂದಿನಿಂದ ಇಂದಿನವರೆಗೆ ಕೃಷಿ ಚಟುವಟಿಕೆಗಳನ್ನು ಮಾಡುತ್ತಾ ಬಂದಿದ್ದೇವೆ’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
‘ನಮ್ಮ ಹಿರಿಯರು ಕಾಪಾಡಿಕೊಂಡು ಬಂದಿರುವ ಜಮೀನನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ’ ಎಂದು ಎಚ್ಚರಿಸಿದರು.
ಮಾಜಿ ಸಂಸದ ಮುನಿಸ್ವಾಮಿ, ಕರ್ನಾಟಕ ಜನಾಂದೋಲನ ಸಂಘಟನೆಯ ಅಧ್ಯಕ್ಷ ಮರಿಯಪ್ಪ, ಕರ್ನಾಟಕ ಸಾಮರಸ್ಯ ಸಮಿತಿ ರಾಜ್ಯಾಧ್ಯಕ್ಷ ಕನ್ನಲ್ಲಿ ಕೃಷ್ಣಪ್ಪ, ದಲಿತ ಹಕ್ಕುಗಳ ಸಮಿತಿ ಅಧ್ಯಕ್ಷ ಎನ್.ರಾಜಣ್ಣ, ಸಾಮಾಜಿಕ ಕಾರ್ಯಕರ್ತ ಎಂ.ಆರ್.ರಫೀಕ್, ದಲಿತ ಮುಖಂಡರಾದ ಜಯಮ್ಮ, ಮುನಿರಾಜು, ಡಿಎಸ್ಎಸ್ ರಾಜು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.