ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ವಿದ್ಯಾರ್ಥಿಗಳ ಅಸೋಸಿಯೇಷನ್ ವತಿಯಿಂದ ಗುರುವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರಜಾವಾಣಿ ಚಿತ್ರ
ಬೆಂಗಳೂರು: ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ಹುದ್ದೆಗಳಿಗೆ ಆಯ್ಕೆಯಾಗಿರುವ 402 ಅಭ್ಯರ್ಥಿಗಳಿಗೆ ಶೀಘ್ರ ನೇಮಕಾತಿ ಆದೇಶ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ವಿದ್ಯಾರ್ಥಿಗಳ ಅಸೋಸಿಯೇಷನ್ ವತಿಯಿಂದ ಗುರುವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಾಯಿತು.
ಡಿಸೆಂಬರ್ 26ರಂದು ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದ್ದು, ಆಯ್ಕೆಯಾದ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ, ದೈಹಿಕ ತಪಾಸಣೆ, ಸಿಂಧುತ್ವ ಪ್ರಮಾಣಪತ್ರ ಸೇರಿದಂತೆ ನೇಮಕಾತಿ ಪ್ರಕ್ರಿಯೆಗೆ ಬೇಕಾಗುವ ಎಲ್ಲಾ ಕಾರ್ಯಗಳು ಪೂರ್ಣಗೊಂಡಿವೆ. ಆದರೆ, ನೇಮಕಾತಿ ಆದೇಶ ಪತ್ರ ನೀಡಲು ವಿಳಂಬ ಮಾಡಲಾಗುತ್ತಿದೆ ಎಂದು ಪ್ರತಿಭಟನಕಾರರು ಆರೋಪಿಸಿದರು.
ಏಳು ತಿಂಗಳಿಂದ ಅಭ್ಯರ್ಥಿಗಳು ಆದೇಶ ಪ್ರತಿಗಾಗಿ ಗೃಹ ಸಚಿವರು ಮತ್ತು ಸಂಬಂಧಪಟ್ಟ ಅಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸುತ್ತಲೇ ಇದ್ದಾರೆ. ಗೃಹ ಸಚಿವರು ಆಶ್ವಾಸನೆ ನೀಡುತ್ತಿದ್ದಾರೆ ಹೊರತು ಈವರೆಗೂ ಯಾವುದೇ ರೀತಿಯ ಪ್ರಕ್ರಿಯೆಗಳು ಪ್ರಾರಂಭವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ರಾಜ್ಯ ವಿದ್ಯಾರ್ಥಿಗಳ ಅಸೋಸಿಯೇಷನ್ ಅಧ್ಯಕ್ಷ ಕಾಂತಕುಮಾರ್ ಮಾತನಾಡಿ, ‘ಕಲ್ಯಾಣ ಕರ್ನಾಟಕದ 21 ಹುದ್ದೆಗಳ ಫಲಿತಾಂಶವನ್ನು ಕೂಡಲೇ ಪ್ರಕಟಿಸಿ ಪ್ರಕ್ರಿಯೆ ಬೇಗ ಮುಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಆದರೆ ಅವರು ನೆಪ ಹೇಳುತ್ತಿದ್ದಾರೆ. ಸಿಂಧುತ್ವ ಪ್ರಮಾಣಪತ್ರದ ಬಳಿಕ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು ಎನ್ನುತ್ತಿದ್ದಾರೆ. ಸಿಂಧುತ್ವ ಪ್ರಮಾಣಪತ್ರವನ್ನು ಮಾಡಿಸಿಕೊಂಡ ಅಭ್ಯರ್ಥಿಗಳಿಗೆ ಆದೇಶ ಪ್ರತಿ ನೀಡಬೇಕೆಂದು ಡಿಪಿಎಆರ್ ನಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಆದರೆ, ಪೊಲೀಸ್ ಇಲಾಖೆಯ ನೇಮಕಾತಿ ವಿಭಾಗ ಇದನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ’ ಎಂದು ಆರೋಪಿಸಿದರು.
ಅಭ್ಯರ್ಥಿಗಳು ಈಗಾಗಲೇ ಸಾಕಷ್ಟು ಬಾರಿ ಪ್ರತಿಭಟನೆ ಮಾಡಿದ್ದು ಸಂಬಂಧಪಟ್ಟವರಿಗೆ ಮನವಿ ಸಲ್ಲಿಸಿದ್ದಾರೆ. ಮತ್ತಷ್ಟು ವಿಳಂಬ ಮಾಡದೇ 15 ದಿನಗಳಲ್ಲಿ ಆದೇಶ ಪ್ರತಿ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.