ADVERTISEMENT

ಅಕ್ರಮ ಆರೋಪ: ಪಿಎಸ್‌ಐ ನೇಮಕಾತಿ ಪ್ರಕ್ರಿಯೆ ಸ್ಥಗಿತ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2022, 14:39 IST
Last Updated 7 ಫೆಬ್ರುವರಿ 2022, 14:39 IST
   

ಬೆಂಗಳೂರು: ‘545 ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿಯಲ್ಲಿ ಅಕ್ರಮ ನಡೆದಿದೆ’ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ, ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ.

ಈ ಬಗ್ಗೆ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಅಮ್ರಿತ್ ಪಾಲ್ ಅವರು ರಾಜ್ಯದ ಹಿರಿಯ ಅಧಿಕಾರಿಗಳಿಗೆ ಸೋಮವಾರ ತುರ್ತು ಸಂದೇಶ ಕಳುಹಿಸಿದ್ದಾರೆ.

‘ಸಿವಿಲ್ ಪಿಎಸ್‌ಐ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಂಡು, ಅರ್ಹ ಅಭ್ಯರ್ಥಿಗಳ ಘಟಕವಾರು ತಾತ್ಕಾಲಿಕ ಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿದೆ. ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ವೈದ್ಯಕೀಯ ಪರೀಕ್ಷೆ ಹಾಗೂ ದಾಖಲೆಗಳ ಪರಿಶೀಲನಾ ಕಾರ್ಯ ಕೈಗೊಳ್ಳುವಂತೆ ಜ. 21ರಂದು ಬರೆದಿದ್ದ ಪತ್ರದಲ್ಲಿ ಸೂಚಿಸಲಾಗಿತ್ತು. ಇದೀಗ, ಆಡಳಿತಾತ್ಮಕ ಕಾರಣದಿಂದ ನೇಮಕಾತಿ ಪ್ರಕ್ರಿಯೆಯನ್ನು ಮುಂದಿನ ಆದೇಶದವರೆಗೂ ಸ್ಥಗಿತಗೊಳಿಸಬೇಕು’ ಎಂದು ಸಂದೇಶದಲ್ಲಿ ತಿಳಿಸಲಾಗಿದೆ.

ADVERTISEMENT

ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಬಗ್ಗೆ ‘ಪ್ರಜಾವಾಣಿ’ಯಲ್ಲಿ ಜ. 25ರಂದು ‘ಪಿಎಸ್‌ಐ ನೇಮಕಾತಿಯಲ್ಲೂ ಅಕ್ರಮ?’ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟವಾಗಿತ್ತು. ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಳಿಸಿರುವ ಬಗ್ಗೆ ಪ್ರತಿಕ್ರಿಯೆ ಪಡೆಯಲು ಅಮ್ರಿತ್ ಪಾಲ್ ಅವರು ಲಭ್ಯರಾಗಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.