
ಬೆಂಗಳೂರು: ‘ಬೆಂಗಳೂರು ನಗರ ಜಿಲ್ಲೆಯಾದ್ಯಂತ ಡಿಸೆಂಬರ್ 21ರಿಂದ 24 ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ ಆಯೋಜಿಸಿದ್ದು, 5 ವರ್ಷದೊಳಗಿನ ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ನಿಗಾವಹಿಸಬೇಕು’ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
'ವಿವಿಧ ಇಲಾಖೆಗಳ ಸಹಕಾರದೊಂದಿಗೆ ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದ ಬಗ್ಗೆ ನಗರ ಮತ್ತು ಗ್ರಾಮೀಣ ಪ್ರದೇಶಗಳ ಜನರಲ್ಲಿ ಜಾಗೃತಿ ಮೂಡಿಸಿ ಶೇ 100ರಷ್ಟು ಗುರಿ ಸಾಧಿಸಬೇಕು' ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರವೀಂದ್ರನಾಥ್ ಮೇಟಿ ಮಾತನಾಡಿ, 'ಜಿಲ್ಲೆಯಲ್ಲಿ 5 ವರ್ಷದೊಳಗಿನ 2,05,530 ಮಕ್ಕಳು ಇದ್ದು, ಒಟ್ಟು 728 ಲಸಿಕಾ ಬೂತ್, 44 ಟ್ರಾನ್ಸಿಟ್ ತಂಡ ಮತ್ತು 55 ಮೊಬೈಲ್ ತಂಡಗಳು ಲಸಿಕೆ ಹಾಕಲಿವೆ. ಡಿ.21ರ ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ಬೂತ್ ಮಟ್ಟದಲ್ಲಿ ಲಸಿಕೆ ಹಾಕಲಾಗುತ್ತದೆ. ಇದಾದ ನಂತರ ಮೂರು ದಿನ ಮನೆ ಮನೆಗೆ ಭೇಟಿ ನೀಡಲಾಗುವುದು. ಈ ಕಾರ್ಯಕ್ಕೆ 2,912 ಲಸಿಕಾ ಕಾರ್ಯಕರ್ತರು, 146 ಮೇಲ್ವಿಚಾರಕರನ್ನು ನಿಯೋಜನೆ ಮಾಡಲಾಗಿದೆ’ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯತೀಶ್.ಆರ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ನದೀಮ್ ಅಹಮದ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸುರೇಶ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶರತ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.