
ಬೆಂಗಳೂರು: ಅಕ್ರಮವಾಗಿ ಗೋವು ಸಾಗಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಗೋವು ಸಾಗಣೆದಾರರ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ ರಾಷ್ಟ್ರ ರಕ್ಷಣಾ ಪಡೆಯ ಮುಖಂಡ ಪುನೀತ್ ಕೆರೆಹಳ್ಳಿ ಅವರನ್ನು ಬಾಗಲಗುಂಟೆ ಠಾಣೆಯ ಪೊಲೀಸರು ಶುಕ್ರವಾರ ಬಂಧಿಸಿ, ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.
ಈ ಪ್ರಕರಣದಲ್ಲಿ ಪುನೀತ್ ಕೆರೆಹಳ್ಳಿ ಅವರು ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗಿರಲಿಲ್ಲ. ನ್ಯಾಯಾಲಯವು ಬಂಧನದ ವಾರಂಟ್ ಜಾರಿ ಮಾಡಿತ್ತು. ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ನ್ಯಾಯಾಲಯವು ಜಾಮೀನು ಮಂಜೂರು ಮಾಡಿದ್ದರಿಂದ ಬಿಡುಗಡೆ ಮಾಡಲಾಯಿತು ಎಂದು ಪೊಲೀಸ್ ಮೂಲಗಳು ಹೇಳಿವೆ.
ಬಾಂಗ್ಲಾದೇಶದ ಅಕ್ರಮ ವಲಸಿಗರ ಶೆಡ್‌ಗಳಿಗೆ ತೆರಳಿ ಅವರ ಆಧಾರ್ ಕಾರ್ಡ್, ಗುರುತಿನ ಚೀಟಿ ಪರಿಶೀಲನೆ ನಡೆಸಲಾಗಿದೆ ಎಂಬ ದೂರಿನ ಮೇರೆಗೆ ಪುನೀತ್ ಅವರನ್ನು ಬನ್ನೇರುಘಟ್ಟ ಠಾಣೆ ಪೊಲೀಸರು ಜ.16ರಂದು ಬಂಧಿಸಿದ್ದರು. ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದರು.
ಬಾಂಗ್ಲಾ ವಲಸಿಗರ ರಾಷ್ಟ್ರೀಯತೆಯನ್ನು ಪುನೀತ್ ಹಾಗೂ ಪಡೆಯ ಸದಸ್ಯರು ಪ್ರಶ್ನಿಸಿದ್ದರು. ಇದಕ್ಕೆ ಸಂಬಂಧಿಸಿದ ವಿಡಿಯೊ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಬೆನ್ನಲ್ಲೇ ಅವರನ್ನು ಬಂಧಿಸಿ ವಿಚಾರಣೆ ನಡೆಸಿದ್ದರು.
ಮ್ಯಾನ್ಮಾರ್ ನಿರಾಶ್ರಿತರೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಪುನೀತ್ ಕೆರೆಹಳ್ಳಿ ಹಾಗೂ ಸಹಚರರ ವಿರುದ್ಧ ಸಿ.ಕೆ.ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಡಿ.8ರಂದು ಪ್ರಕರಣ ದಾಖಲಾಗಿತ್ತು. ಹಲ್ಲೆಗೆ ಒಳಗಾಗಿರುವ ಜಹಂಗೀರ್ ಆಲಂ ಎಂಬುವರು ದೂರು ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.