
ಬೆಂಗಳೂರು: ಬಾಂಗ್ಲಾದೇಶದ ಅಕ್ರಮ ವಲಸಿಗರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡುವ ಮೂಲಕ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಗೆ ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆ ತಂದ ಆರೋಪದಡಿ ರಾಷ್ಟ್ರ ರಕ್ಷಣಾ ಪಡೆ ಮುಖಂಡ ಪುನೀತ್ ಕೆರೆಹಳ್ಳಿ ವಿರುದ್ಧ ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಜನವರಿ 22ರಂದು ಪುನೀತ್ ಕೆರೆಹಳ್ಳಿ ಮತ್ತು ಸಹಚರರು ಸೋಲದೇವನಹಳ್ಳಿ ಬಳಿಯ ಕೆಂಪಾಪುರದ ಶ್ವೇತಾ ಫಾರಂ ರಸ್ತೆಯಲ್ಲಿನ ಸಕೀನಾ ತಸ್ನೀಮ್ ಎಂಬುವರಿಗೆ ಸೇರಿದ ಜಾಗಕ್ಕೆ ಹೋಗಿ ಗಲಾಟೆ ಮಾಡಿದ್ದರು. ಬಾಂಗ್ಲಾದೇಶದವರನ್ನು ಮಾನವ ಕಳ್ಳ ಸಾಗಾಣಿಕೆ ಮೂಲಕ ಕರೆತಂದು ಅಕ್ರಮ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ವಾಗ್ವಾದ ನಡೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಶ್ವೇತಾ ಫಾರಂ ರಸ್ತೆಯ ಜಾಗವು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಎಂ.ಎ.ಸಲೀಂ ಅವರ ಬೇನಾಮಿ ಆಸ್ತಿ ಎಂದು ಪುನೀತ್ ಮತ್ತು ಸಹಚರರು ಸುಳ್ಳು ಆರೋಪ ಮಾಡಿ ಸ್ಥಳದಲ್ಲಿ ವಿಡಿಯೊ ಮಾಡಿದ್ದರು. ಅಲ್ಲದೆ, ಆ ಜಾಗದಲ್ಲಿ ಬಾಂಗ್ಲಾ ಪ್ರಜೆಗಳು ಅಕ್ರಮವಾಗಿ ನೆಲಸಿದ್ದಾರೆ ಎಂದು ವಿಡಿಯೊ ಚಿತ್ರೀಕರಿಸಿ ಫೇಸ್‍ಬುಕ್ ಮತ್ತು ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದರು ಎಂದು ಪೊಲೀಸರು ಹೇಳಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಿಬಿಟ್ಟು ಸಮಾಜದಲ್ಲಿ ಶಾಂತಿ ಕದಡಿದ, ಕೋಮು ಸಾಮರಸ್ಯಕ್ಕೆ ಧಕ್ಕೆ ತಂದ, ಸಾರ್ವಜನಿಕರನ್ನು ಪ್ರಚೋದಿಸಿದ, ಸಮುದಾಯಗಳ ನಡುವೆ ದ್ವೇಷ ಮೂಡಿಸಿದ ಹಾಗೂ ಮಾಹಿತಿ ತಂತ್ರಜ್ಞಾನ ದುರ್ಬಳಕೆ ಆರೋಪದಡಿ ಪುನೀತ್ ಕೆರೆಹಳ್ಳಿ ಮತ್ತು ಸಹಚರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
2025ರ ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆಗೆ ಗೈರಾಗಿದ್ದ ಪುನೀತ್ ಕೆರೆಹಳ್ಳಿಯನ್ನು ಬಾಗಲಗುಂಟೆ ಠಾಣೆ ಪೊಲೀಸರು ಜನವರಿ 23ರಂದು ಬಂಧಿಸಿದ್ದರು. ಬಳಿಕ ನ್ಯಾಯಾಲಯವು ಜಾಮೀನಿನ ಮೇಲೆ ಬಿಡುಗಡೆ ಮಾಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.