
ಬೆಂಗಳೂರು: ‘ಎಸ್‌ಎಸ್‌ಎಲ್‌ಸಿ ಪೂರ್ವಭಾವಿ ಪರೀಕ್ಷೆಗೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಹರಿಬಿಟ್ಟು, ₹30ಕ್ಕೆ ಮಾರಾಟ ಮಾಡುತ್ತಿರುವ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಎಸ್. ಕೋಸಂಬೆ ಸೂಚಿಸಿದ್ದಾರೆ.
ಈ ಬಗ್ಗೆ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅಧ್ಯಕ್ಷರಿಗೆ ಪತ್ರ ಬರೆದಿರುವ ಅವರು, ‘ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಇಂತಹ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಹರಿಬಿಟ್ಟಿರುವುದು ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ. ಇದರಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಹಿನ್ನಡೆ ಆಗುವ ಸಾಧ್ಯತೆ ಇದೆ’ ಎಂದು ಉಲ್ಲೇಖಿಸಿದ್ದಾರೆ.
‘ಈ ಬಗ್ಗೆ ಆಯೋಗವು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಮುಂದೆ ಇಂತಹ ಅವಘಡಗಳು ಸಂಭವಿಸದಂತೆ ಮಂಡಳಿಯು ಮುಂಜಾಗ್ರತೆ ವಹಿಸಬೇಕು. ಇದರ ಜೊತೆಗೆ ಈ ಘಟನೆಗೆ ಸಂಬಂಧಿಸಿದ ವರದಿಯನ್ನು ಆಯೋಗಕ್ಕೆ ನೀಡಬೇಕು’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.