ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಪೊಲೀಸರು ದಿಢೀರ್ ದಾಳಿ ನಡೆಸಿ, ಪರಿಶೀಲಿಸಿದರು.
‘ದಾಳಿಯ ವೇಳೆ ವಿವಿಧ ಬ್ಯಾರಕ್‌ಗಳನ್ನು ಪರಿಶೀಲನೆ ನಡೆಸಲಾಯಿತು. ಒಂದು ಮೊಬೈಲ್, ಎಲೆಕ್ಟ್ರಿಕ್ ಸ್ಟೌ, ಮೊಬೈಲ್ ಚಾರ್ಜರ್ ಹಾಗೂ ₹16 ಸಾವಿರ ನಗದು ಪತ್ತೆಯಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
‘ಎಸಿಪಿ, ಐವರು ಇನ್‌ಸ್ಪೆಕ್ಟರ್ ನೇತೃತ್ವದಲ್ಲಿ ದಾಳಿ ಮಾಡಿ ತಪಾಸಣೆ ನಡೆಸಲಾಯಿತು’ ಎಂದು ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ತಿಳಿಸಿದರು.
ಪರಪ್ಪನ ಅಗ್ರಹಾರದ ಜೈಲಿನಲ್ಲಿ ಕಳೆದ ತಿಂಗಳು ಕೈದಿಗಳ ಮಧ್ಯೆ ಮಾರಾಮಾರಿ ನಡೆದಿತ್ತು. ಈ ಘಟನೆಯಲ್ಲಿ ಕೈದಿಯೊಬ್ಬನ ಕೈ ಮುರಿದಿತ್ತು. ಇನ್ನೊಂದು ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ವಿಚಾರಣಾಧೀನ ಕೈದಿಯಾಗಿ ಜೈಲಿನಲ್ಲಿರುವ ಮಹಿಳೆ, ಕೊಠಡಿ ಬದಲಾವಣೆಗೆ ತೆರಳಿದ್ದ ವೀಕ್ಷಕಿಯ ಕೈಕಚ್ಚಿದ್ದ ಘಟನೆಯೂ ನಡೆದಿತ್ತು. ಜೈಲಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜೈಲಿನ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಯಿತು’ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.