ADVERTISEMENT

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುಂದುವರಿಕೆ

​ಪ್ರಜಾವಾಣಿ ವಾರ್ತೆ
Published 18 ಜೂನ್ 2023, 15:57 IST
Last Updated 18 ಜೂನ್ 2023, 15:57 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದ ವಿವಿಧೆಡೆ ಸೋಮವಾರವೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆ ಗುಡುಗು ಸಹಿತ ಮಳೆ ಆಗಬಹುದು. ಒಳನಾಡಿನಲ್ಲಿ ಗಾಳಿಯ ವೇಗವು ಗಂಟೆಗೆ 30–40 ಕಿ.ಮೀ. ತಲುಪಬಹುದು. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ. 

ಕರಾವಳಿಯಲ್ಲಿ ಬಿರುಗಾಳಿಯ ವೇಗ ಗಂಟೆಗೆ 40–45 ಕಿ.ಮೀ.ಯಿಂದ 55 ಕಿ.ಮೀ. ವೇಗದಲ್ಲಿ ಬೀಸುವ ಸಂಭವವಿದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಮುನ್ನೆಚ್ಚರಿಕೆ ನೀಡಿದೆ.

ADVERTISEMENT

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳ ಹಲವೆಡೆ ಮುಂದಿನ ಐದು ದಿನಗಳು ಗುಡುಗು ಸಹಿತ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಹಲವೆಡೆ ಒಣ ಹವೆ ಕಾಣಿಸಿಕೊಳ್ಳಲಿದೆ ಎಂದು ಇಲಾಖೆ ಹೇಳಿದೆ. 

ಭಾನುವಾರ ಬೆಳಿಗ್ಗೆ 8.30ಕ್ಕೆ ಅನ್ವಯಿಸಿದಂತೆ ಕಳೆದ 24 ಗಂಟೆಗಳಲ್ಲಿ  ರಾಜ್ಯದ ವಿವಿಧೆಡೆ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿಮಾನ ನಿಲ್ದಾಣದಲ್ಲಿ ಗರಿಷ್ಠ (12 ಸೆಂ.ಮೀ.) ಮಳೆಯಾಗಿದೆ. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ (39.1 ಡಿಗ್ರಿ ಸೆಲ್ಸಿಯಸ್) ದಾಖಲಾಗಿದೆ ಎಂದು ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.