
ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನಗಳು ಗುಡುಗು–ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೇ 13ರಂದು ಹಾವೇರಿ, ಧಾರವಾಡ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ರಾಮನಗರ, ಮಂಡ್ಯ, ದಾವಣಗೆರೆ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ಈ ಎಲ್ಲ ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್’ ಸೂಚನೆ ನೀಡಲಾಗಿದೆ. ಗಾಳಿಯು 40 ರಿಂದ 50 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು ಮಳೆಯೂ ಆಗಲಿದೆ ಎಂದು ಸೂಚನೆ ನೀಡಿದೆ. ಅದೇ ದಿನ ಸಂಜೆ ಅಥವಾ ರಾತ್ರಿ ವೇಳೆ ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.
ಮೇ 14ರಂದು ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಧಾರವಾಡ, ಗದಗ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಕೊಪ್ಪಳ, ಹಾವೇರಿ, ಹಾಸನ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಈ ಜಿಲ್ಲೆಗಳಲ್ಲಿ ಮಳೆಯೊಂದಿಗೆ ಬಿರುಗಾಳಿ ಬೀಸುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ರಾಜ್ಯದಲ್ಲೇ ಗರಿಷ್ಠ ಉಷ್ಣಾಂಶ 40.4 ಡಿಗ್ರಿ ಸೆಲ್ಸಿಯಸ್ ಕಲಬುರಗಿ ಜಿಲ್ಲೆಯಲ್ಲಿ ಭಾನುವಾರ ದಾಖಲಾಗಿತ್ತು.
ಭಾನುವಾರ ಬೆಳಿಗ್ಗೆ 8.30ಕ್ಕೆ ಕೊನೆಯಾದಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಹುಬ್ಬಳ್ಳಿ 8 ಸೆಂ.ಮೀ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ 6, ಉತ್ತರ ಕನ್ನಡದ ಹಳಿಯಾಳ ಹಾಗೂ ಬೆಳಗಾವಿಯ ಸಂಕೇಶ್ವರ 5, ಚಿಕ್ಕಮಗಳೂರಿನಲ್ಲಿ 5, ಬೆಳಗಾವಿಯಲ್ಲಿ 4, ಕೊಪ್ಪಳದ ಕುಕನೂರು ಹಾಗೂ ಮುನಿರಾಬಾದ್‌ನಲ್ಲಿ 3 ಸೆಂ.ಮೀ ಮಳೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.