ADVERTISEMENT

ಮಳೆ: 7 ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್‌’ ಘೋಷಣೆ

​ಪ್ರಜಾವಾಣಿ ವಾರ್ತೆ
Published 20 ಜುಲೈ 2021, 18:53 IST
Last Updated 20 ಜುಲೈ 2021, 18:53 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ರಾಜ್ಯದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜು.21 ಮತ್ತು 22ರಂದು ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

‘ಮುಂಗಾರು ಚುರುಕಾಗಿರುವುದರಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ.ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜುಲೈ 25ರವರೆಗೆ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ’ ಎಂದು ಮಾಹಿತಿ ನೀಡಿದೆ.

‘ಕರಾವಳಿಯಲ್ಲಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಗರಿಷ್ಠ 3.6 ಮೀಟರ್‌ಗಳಷ್ಟು ಎತ್ತರದ ಅಲೆಗಳು ಏಳುವ ಸಾಧ್ಯತೆ ಇರುವುದರಿಂದ ಮೀನುಗಾರರು ಇದೇ 24ರವರೆಗೆ ಸಮುದ್ರಕ್ಕೆ ಇಳಿಯಬಾರದು’ ಎಂದು ಇಲಾಖೆ ಎಚ್ಚರಿಸಿದೆ.

ADVERTISEMENT

‘ಉತ್ತರ ಒಳನಾಡಿನಲ್ಲಿ ಎರಡು ದಿನ ಮಳೆ ತಗ್ಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ವಿಜಯಪುರ ಜಿಲ್ಲೆಗಳಲ್ಲಿ ಜು.22ರಿಂದ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಲ್ಲೂ ‘ಯೆಲ್ಲೊ ಅಲರ್ಟ್‌’ ನೀಡಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗಬಹುದು’ ಎಂದು ತಿಳಿಸಿದೆ.

ಮಳೆ–ಎಲ್ಲಿ, ಎಷ್ಟು?:‌ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ಮಂಗಳವಾರ 12 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಕಾರ್ಕಳ 6, ಭಟ್ಕಳ 5, ಕಾರವಾರ, ತೀರ್ಥಹಳ್ಳಿ, ಸಕಲೇಶಪುರ 4, ಬೆಳ್ತಂಗಡಿ, ಉಡುಪಿ, ಶ್ರೀನಿವಾಸಪುರ, ಬಂಗಾರಪೇಟೆ, ನೆಲಮಂಗಲ 3, ಕುಂದಾಪುರ, ತರೀಕೆರೆ, ಸಾಗರ 2, ಮಂಗಳೂರು, ಪುತ್ತೂರು, ಮಾಲೂರು, ಕೋಲಾರ, ಚಿಂತಾಮಣಿ, ಅರಕಲಗೂಡು, ದೇವನಹಳ್ಳಿ,ತುಮಕೂರಿನಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.