ADVERTISEMENT

ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸುವ ಯತ್ನ ಖಂಡಿಸಿ ಪ್ರತಿಭಟನೆ

ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸುವ ಯತ್ನ l ಬಿಜೆಪಿ ನಡೆಗೆ ಕೆಪಿಸಿಸಿ ಖಂಡನೆ

​ಪ್ರಜಾವಾಣಿ ವಾರ್ತೆ
Published 27 ಜುಲೈ 2020, 21:40 IST
Last Updated 27 ಜುಲೈ 2020, 21:40 IST
ನಗರದ ಬಾಳೇಕುಂದ್ರಿ ವೃತ್ತದಲ್ಲಿ ಕುಳಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಸಲೀಂ ಅಹಮದ್‌ ಮತ್ತಿತರರು ಪ್ರತಿಭಟನೆ ನಡೆಸಿದರು.  – ಪ್ರಜಾವಾಣಿ ಚಿತ್ರ
ನಗರದ ಬಾಳೇಕುಂದ್ರಿ ವೃತ್ತದಲ್ಲಿ ಕುಳಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಸಲೀಂ ಅಹಮದ್‌ ಮತ್ತಿತರರು ಪ್ರತಿಭಟನೆ ನಡೆಸಿದರು.  – ಪ್ರಜಾವಾಣಿ ಚಿತ್ರ   

ಬೆಂಗಳೂರು: ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಬಿಜೆಪಿ ಅಸ್ಥಿರಗೊಳಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿ ರಾಜಭವನ ಎದುರು ಸೋಮವಾರ ಪ್ರತಿಭಟನೆ ನಡೆಸಲು ಯತ್ನಿಸಿದ್ದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಕೆಲ ಗಂಟೆಗಳ ನಂತರ ಬಿಡುಗಡೆ ಮಾಡಿದರು.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಿಂದ ಮೆರವಣಿಗೆ ಮೂಲಕ ರಾಜಭವನದತ್ತ ಪ್ರತಿಭಟನಕಾರರು ಹೊರಟಿದ್ದರು.

ಮಾರ್ಗಮಧ್ಯೆಯೇ ಅವರನ್ನು ತಡೆದಿದ್ದ ಪೊಲೀಸರು, ರಾಜಭವನಕ್ಕೆ ಹೋಗಲು ಅವಕಾಶವಿಲ್ಲವೆಂದು ಹೇಳಿದರು. ಇದೇ ವೇಳೆ ಮಾತಿನ ಚಕಮಕಿ ನಡೆಯಿತು. ಪೊಲೀಸರ ಮಾತನ್ನು ಲೆಕ್ಕಿಸದೇ ಪ್ರತಿಭಟನಕಾರರು, ರಸ್ತೆಯಲ್ಲೇ ಕುಳಿತು ಪ್ರತಿಭಟನೆ ಮುಂದುವರಿಸಿದರು. ಕೆಲವರು ರಾಜಭವನದತ್ತ ತೆರಳಲು ಮುಂದಾದರು.

ADVERTISEMENT

ಇದೇ ವೇಳೆ ಡಿ.ಕೆ.ಶಿವಕುಮಾರ್ ಸೇರಿದಂತೆ 25ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ಬಸ್ಸಿನಲ್ಲಿ ಸ್ಥಳದಿಂದ ಕರೆದೊಯ್ದರು. ಕೆಲ ಗಂಟೆಗಳ ಬಳಿಕ ಕಾಂಗ್ರೆಸ್ ಮುಖಂಡರ ನಿಯೋಗವು ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿತು.

ಪ್ರತಿಭಟನೆ ವೇಳೆ ಮಾತನಾಡಿದ ಸಿದ್ದರಾಮಯ್ಯ, ‘ರಾಜಸ್ಥಾನದಲ್ಲಿ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಹುನ್ನಾರ ನಡೆಸಿದೆ. ಈ ಷಡ್ಯಂತ್ರದಲ್ಲಿ ರಾಜಸ್ಥಾನದ ರಾಜ್ಯಪಾಲರೂ ಭಾಗಿಯಾಗಿದ್ದಾರೆ. ಸಚಿವ ಸಂಪುಟದ ತೀರ್ಮಾನದಂತೆ ನಡೆದುಕೊಳ್ಳುವುದು ರಾಜ್ಯಪಾಲರ ಕರ್ತವ್ಯ. ಆದರೆ, ಅವರು ಬಿಜೆಪಿಗೆ ಸಹಕಾರ ನೀಡಿ ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ’ ಎಂದು ದೂರಿದರು.

‘ಚುನಾಯಿತ ಸರ್ಕಾರಗಳನ್ನು ಅಸ್ಥಿರಗೊಳಿಸಿ ಶಾಸಕರನ್ನು ಕುದುರೆ ವ್ಯಾಪಾರದ ಮೂಲಕ ಖರೀದಿ ಮಾಡಿ ಬಿಜೆಪಿಯವರು ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಿದ್ದಾರೆ. ಕರ್ನಾಟಕದಲ್ಲೂ ಅದೇ ರೀತಿ ಆಯಿತು’ ಎಂದು ಅವರು ಹೇಳಿದರು.

ಡಿ.ಕೆ.ಶಿವಕುಮಾರ್, ’ವಿವಿಧ ರಾಜ್ಯಗಳಲ್ಲಿ ಚುನಾಯಿತ ಸರ್ಕಾರವನ್ನು ಕೆಡವಿ ವಾಮಮಾರ್ಗದ ಮೂಲಕ ಬಿಜೆಪಿ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿದ್ದು, ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ‘ ಎಂದು ದೂರಿದರು.

’ಬಿಜೆಪಿಯ ಅಧಿಕಾರ ದುರ್ಬಳಕೆ, ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟ ನಿರಂತರ ಮುಂದುವರಿಯುತ್ತದೆ. ನಮ್ಮ ಧ್ವನಿ ಹತ್ತಿಕ್ಕಲು ಬಿಡುವುದಿಲ್ಲ. ಕಾಂಗ್ರೆಸ್ ಪಕ್ಷದ ಉತ್ಸಾಹ ಕುಗ್ಗಿಸಲು ಬಿಜೆಪಿಗಾಗಲಿ ಪ್ರಧಾನಮಂತ್ರಿಗಳಿಗಾಗಲಿ ಸಾಧ್ಯವಿಲ್ಲ‘ ಎಂದರು.

****

ಕಾಂಗ್ರೆಸ್‌ ಪ್ರಜಾಪ್ರಭುತ್ವ ವಿರೋಧಿ: ನಳಿನ್‌ ಕುಮಾರ್‌ ಕಟೀಲ್‌ ವ್ಯಂಗ್ಯ

‘ದೇಶದಲ್ಲಿ 1975ರಲ್ಲಿ ತುರ್ತುಪರಿಸ್ಥಿತಿ ಹೇರುವ ಮೂಲಕ ಎಲ್ಲ ಹಕ್ಕುಗಳನ್ನು ದಮನ ಮಾಡಿದ್ದ ಕಾಂಗ್ರೆಸ್‌ ಪಕ್ಷ ಈಗ ಪ್ರಜಾಪ್ರಭುತ್ವ ಉಳಿಸಿ ಎಂದು ಬೀದಿಗೆ ಇಳಿದಿರುವುದು ಹಾಸ್ಯಾಸ್ಪದ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್‌ ಕಟೀಲ್‌ ವ್ಯಂಗ್ಯವಾಡಿದ್ದಾರೆ.

ತುರ್ತುಪರಿಸ್ಥಿತಿಯಲ್ಲಿ ಪತ್ರಿಕಾ ಸ್ವಾತಂತ್ರ್ಯವನ್ನುಮೊಟಕು ಮಾಡಲಾಗಿತ್ತು. ಇದನ್ನು ವಿರೋಧಿಸಿದ್ದ ಅಂದಿನ ಎಲ್ಲ ರಾಜಕೀಯ ನಾಯಕರನ್ನು ಜೈಲಿಗಟ್ಟಲಾಗಿತ್ತು. ಪ್ರಜಾಪ್ರಭುತ್ವಕ್ಕೆ ಗ್ರಹಣ ಬಡಿಯುವಂತೆ ಮಾಡಿದ್ದು ಕಾಂಗ್ರೆಸ್‌ ಪಕ್ಷ. ಅದಕ್ಕಾಗಿ ಜನತೆ ತಕ್ಕ ಪಾಠ ಕಲಿಸಿದರು ಎಂದು ಅವರು ಹೇಳಿದ್ದಾರೆ.

ಜನರಿಂದ ತಿರಸ್ಕೃತಗೊಂಡು ಅಧಿಕಾರ ಕಳೆದುಕೊಂಡು ಹತಾಶರಾಗಿರುವ ಕಾಂಗ್ರೆಸ್‌ ನಾಯಕರು ಈಗ ಪ್ರಜಾಪ್ರಭುತ್ವದ ಹೆಸರಿನಲ್ಲಿ ಬೀದಿಗಿಳಿದಿದ್ದಾರೆ. ಪ್ರಜ್ಞಾವಂತ ಜನತೆ ಇದನ್ನೆಲ್ಲಾ ಸೂಕ್ಷ್ಮವಾಗಿ ಗಮನಿಸುತ್ತಾರೆ. ಇಂತಹ ನಾಟಕಗಳಿಗೆ ಮರುಳಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಈ ದೇಶದಲ್ಲಿ ಕಾಂಗ್ರೆಸ್‌ ಪಕ್ಷ ಸಂವಿಧಾನದ 356 ನೇ ವಿಧಿ ದುರುಪಯೋಗಪಡಿಸಿಕೊಂಡಷ್ಟು ಬೇರೆ ಯಾವುದೇ ಪಕ್ಷ ದುರುಪಯೋಗ ಮಾಡಿಲ್ಲ. ಕರ್ನಾಟಕದಲ್ಲಿ ಎಸ್.ಆರ್‌.ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಅವಕಾಶ ನೀಡದೇ, ವಜಾ ಮಾಡಲಾಯಿತು. ಆಗ ಇಲ್ಲಿ ಕಾಂಗ್ರೆಸ್‌ನಿಂದ ನೇಮಕವಾಗಿದ್ದ ರಾಜ್ಯಪಾಲ ವಿ.ವೆಂಕಟಸುಬ್ಬಯ್ಯ ಕಾಂಗ್ರೆಸ್‌ ಕೈಬೊಂಬೆಯಾಗಿ ವರ್ತಿಸಿದ್ದರು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.