ADVERTISEMENT

ರಾಜಕಾಲುವೆಗಳ ಒತ್ತುವರಿ ತೆರವಿಗೆ ಏಳು ತಿಂಗಳ ಗಡುವು

​ಪ್ರಜಾವಾಣಿ ವಾರ್ತೆ
Published 2 ಜುಲೈ 2019, 18:48 IST
Last Updated 2 ಜುಲೈ 2019, 18:48 IST

ಬೆಂಗಳೂರು: ನಗರದ ರಾಜಕಾಲುವೆಗಳ ಒತ್ತುವರಿಯನ್ನು ಏಳು ತಿಂಗಳಲ್ಲಿ ತೆರವುಗೊಳಿಸಬೇಕು ಎಂದು ಬಿಬಿಎಂಪಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್‌ ನಿರ್ದೇಶನ ನೀಡಿದ್ದಾರೆ.

ಒತ್ತುವರಿ ತೆರವಿಗೆ ಪಾಲಿಕೆ ವಿಳಂಬ ಮಾಡುತ್ತಿದೆ ಎಂದು ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಹಾಗೂ ವಿವಿಧ ನಾಗರಿಕ ಸಂಘಟನೆಗಳ ಪದಾಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದರು. ಅದರ ಬೆನ್ನಲ್ಲೇ, ವಿವಿಧ ಇಲಾಖೆಗಳ ಸಮನ್ವಯ ಸಮಿತಿ ಸಭೆ ನಡೆಸಿರುವ ಮುಖ್ಯ ಕಾರ್ಯದರ್ಶಿ, ಈ ಸೂಚನೆ ನೀಡಿದ್ದಾರೆ.

ಸರ್ವೇಯರ್‌ಗಳ ಕೊರತೆ ಇದ್ದ ಕಾರಣ ಒತ್ತುವರಿ ತೆರವು ವಿಳಂಬವಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಸಮಜಾಯಿಷಿ ನೀಡಿದರು. ಭೂದಾಖಲೆಗಳ ಜಂಟಿ ನಿರ್ದೇಶಕರ ಕಚೇರಿ ಮತ್ತು ಬಿಬಿಎಂಪಿ ಅಧಿಕಾರಿಗಳು ಪರಸ್ಪರ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಬೇಕು ಎಂದು ವಿಜಯ ಭಾಸ್ಕರ್‌ ಸೂಚನೆ ನೀಡಿದ್ದಾರೆ.

ADVERTISEMENT

‘ಪ್ರತಿ ತಿಂಗಳು 250 ಕಡೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಬೇಕು ಎಂಬ ನಿರ್ದೇಶನ ಬಂದಿದೆ. ಏಳು ತಿಂಗಳಲ್ಲಿ ಕಾರ್ಯಾಚರಣೆ ಪೂರ್ಣಗೊಳಿಸುತ್ತೇವೆ’ ಎಂದು ಬಿಬಿಎಂಪಿ ರಾಜಕಾಲುವೆ ವಿಭಾಗದ ಮುಖ್ಯ ಎಂಜಿನಿಯರ್ ಬಿ.ಎಸ್. ಪ್ರಹ್ಲಾದ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.