ADVERTISEMENT

ರಾಜಕಾಲುವೆ ಒತ್ತುವರಿ 714 ಪ್ರಕರಣ ಬಾಕಿ: ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 23 ಡಿಸೆಂಬರ್ 2021, 20:22 IST
Last Updated 23 ಡಿಸೆಂಬರ್ 2021, 20:22 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ    

ಬೆಳಗಾವಿ (ಸುವರ್ಣ ವಿಧಾನಸೌಧ):ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ಮಾಡಿರುವ 2,626 ಪ್ರಕರಣಗಳು ಪತ್ತೆಯಾಗಿದ್ದು, 1,912 ಒತ್ತುವರಿಗಳನ್ನು ತೆರವು ಮಾಡಲಾಗಿದೆ. 714 ಒತ್ತುವರಿಗಳನ್ನು ತೆರವುಗೊಳಿಸಬೇಕಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ಗುರುವಾರ ಕಾಂಗ್ರೆಸ್‌ನ ಯು.ಬಿ. ವೆಂಕಟೇಶ್‌ ಪ್ರಶ್ನೆಗೆ ಉತ್ತರಿಸಿದ ಅವರು, ‘ರಾಜಕಾಲುವೆಗೆ ಸೇರಿದ 382 ಎಕರೆ 27 ಗುಂಟೆ ಜಮೀನುಗಳನ್ನು ಒತ್ತುವರಿ ಮಾಡಲಾಗಿದೆ. ಒತ್ತುವರಿದಾರರ ವಿರುದ್ಧ ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆಯ ಅಡಿಯಲ್ಲಿ 98 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದರು.

ಒತ್ತುವರಿ ಪ್ರಕರಣದಲ್ಲಿ 20 ಅಧಿಕಾರಿಗಳ ವಿರುದ್ಧ ಬೆಂಗಳೂರು ಮಹಾನಗರ ಕಾರ್ಯಪಡೆಯಲ್ಲಿ ಎಫ್‌ಐಆರ್‌ ದಾಖಲು ಮಾಡಲಾಗಿದೆ. ರಾಜಕಾಲುವೆ ಒತ್ತುವರಿಯಿಂದ ಪ್ರವಾಹ ಸೃಷ್ಟಿಯಾಗಿ ಸಂಕಷ್ಟಕ್ಕೆ ಸಿಲುಕಿದ 1,800 ಜನರಿಗೆ ₹ 2.31 ಕೋಟಿ ಪರಿಹಾರ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ADVERTISEMENT

ಯು.ಬಿ. ವೆಂಕಟೇಶ್ ಮಾತನಾಡಿ, ‘ರಾಜಕಾಲುವೆ ಒತ್ತುವರಿ ಹೆಸರಿನಲ್ಲಿ 842 ಬಡವರ ಮನೆಗಳನ್ನು ತೆರವು ಮಾಡಲಾಗಿದೆ. ಆದರೆ, ಬಲಾಢ್ಯರ ವಿರುದ್ಧ ಯಾವುದೇ ಕ್ರಮ ಜರುಗಿಸಿಲ್ಲ’ ಎಂದು ದೂರಿದರು.

ಉತ್ತರ ನೀಡಿದ ಮುಖ್ಯಮಂತ್ರಿ, ‘ಒತ್ತುವರಿ ತೆರವಿನ ವಿಚಾರದಲ್ಲಿ ಸರ್ಕಾರ ಯಾವುದೇ ತಾರತಮ್ಯ ಮಾಡುವುದಿಲ್ಲ. ಎಷ್ಟೇ ದೊಡ್ಡವರಿದ್ದರೂ ಕ್ರಮ ಜರುಗಿಸುತ್ತೇವೆ’ ಎಂದು ಭರವಸೆ ನೀಡಿದರು.

413 ಕಿ.ಮೀ. ಕಾಮಗಾರಿ ಬಾಕಿ: ರಾಜಕಾಲುವೆ ಪುನರ್‌ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪಿ.ಆರ್‌. ರಮೇಶ್‌ ಅವರ ಪ್ರಶ್ನೆಗೆ ಉತ್ತರಿಸಿದ ಬಸವರಾಜ ಬೊಮ್ಮಾಯಿ, ‘ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಥಮ ಹಂತದ 348.25 ಕಿ.ಮೀ. ಮತ್ತು ದ್ವಿತೀಯ ಹಂತದ 493.44 ಕಿ.ಮೀ. ಉದ್ದದ ರಾಜಕಾಲುವೆಗಳಿವೆ. ಒಟ್ಟು 842 ಕಿ.ಮೀ. ಉದ್ದದ ರಾಜಕಾಲುವೆಗಳ ಪೈಕಿ 428 ಕಿ.ಮೀ. ಪುನರ್‌ ನಿರ್ಮಾಣ ಪೂರ್ಣಗೊಂಡಿದೆ’ ಎಂದರು.

413.77 ಕಿ.ಮೀ. ಉದ್ದದ ರಾಜಕಾಲುವೆಗಳ ಪುನರ್‌ ನಿರ್ಮಾಣ ಬಾಕಿ ಇದೆ. ಇದಕ್ಕಾಗಿ ₹ 4,670.42 ಕೋಟಿ ಅನುದಾನ ಅಗತ್ಯವಿದೆ. ಈವರೆಗೆ ₹ 1,658.41 ಕೋಟಿ ವೆಚ್ಚ ಮಾಡಲಾಗಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.