ADVERTISEMENT

ಒತ್ತುವರಿ: ಶ್ವೇತಪತ್ರಕ್ಕೆ ಎಚ್‌ಡಿಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2022, 20:18 IST
Last Updated 2 ಸೆಪ್ಟೆಂಬರ್ 2022, 20:18 IST
ಎಚ್‌.ಡಿ.ಕುಮಾರಸ್ವಾಮಿ
ಎಚ್‌.ಡಿ.ಕುಮಾರಸ್ವಾಮಿ   

ಬೆಂಗಳೂರು: ರಾಜಧಾನಿ ವ್ಯಾಪ್ತಿಯಲ್ಲಿ ಕೆರೆ, ರಾಜಕಾಲುವೆಗಳನ್ನು ಒತ್ತುವರಿ ಮಾಡಿರುವವರ ಕುರಿತು ಶ್ವೇತಪತ್ರ ಪ್ರಕಟಿಸಬೇಕು ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಆಗ್ರಹಿಸಿದರು.

ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ‘ನಗರದಲ್ಲಿ ಒತ್ತುವರಿ ಸಮಸ್ಯೆಗೆ ಹಿಂದಿನ ಮುಖ್ಯಮಂತ್ರಿಗಳು ಕಾರಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಭೂಗಳ್ಳರಿಗೆ ನನ್ನಿಂದ ಸಹಾಯ ಆಗಿದೆ ಎಂಬುದನ್ನು ತೋರಿಸಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ’ ಎಂದರು.

‘ಕಾಂಗ್ರೆಸ್ ಬಗ್ಗೆ ಅವರು ಏನು ಬೇಕಾದರೂ ಮಾತನಾಡಲಿ. ನನ್ನ ಬಗ್ಗೆ ಮಾತನಾಡುವಾಗ ಎಚ್ಚರಿಕೆಯಿಂದ ಇದ್ದರೆ ಉತ್ತಮ. ರಾಜಕಾಲುವೆ ಅಭಿವೃದ್ಧಿಗೆ ಸಾವಿರಾರು ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಹೇಳುತ್ತಾರೆ. ಹಾಗಾದರೆ ಅ ಹಣ ಯಾರ ಮನೆಗೆ ಹೋಯಿತು? ಧೈರ್ಯ ಇದ್ದರೆ ಒತ್ತುವರಿ ಮಾಡಿಕೊಂಡವರ ಹೆಸರುಗಳನ್ನು ಬಹಿರಂಗ ಮಾಡಲಿ. ಬೆಂಗಳೂರಿನಲ್ಲಿ ಕೆರೆ, ರಾಜಕಾಲುವೆ ಒತ್ತುವರಿದಾರರು ಯಾರು ಎನ್ನುವುದು ಜನರಿಗೂ ಗೊತ್ತಾಗಲಿ’ ಎಂದು ಹೇಳಿದರು.

ADVERTISEMENT

ಕೆಂಪೇಗೌಡರ ಹೆಸರಿನಲ್ಲಿ ಪ್ರಚಾರ ಪಡೆಯಲು ಬಿಜೆಪಿ ಯತ್ನಿಸುತ್ತಿದೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಮಣ್ಣು ಸಂಗ್ರಹ ಮಾಡಿ ಥೀಮ್‌ ಪಾರ್ಕ್‌ ಮಾಡುವುದಾಗಿ ಹೇಳುತ್ತಿದ್ದಾರೆ. ಮಳೆಯಿಂದ ಸಮಸ್ಯೆಯಲ್ಲಿರುವ ಜನರಿಗೆ ಮೊದಲು ಪರಿಹಾರ ಒದಗಿಸಲಿ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.