ADVERTISEMENT

ಕಾಂಗ್ರೆಸ್‌ ಶಾಸಕರ ಕ್ಷೇತ್ರಗಳಿಗೆ ಅನುದಾನ ತಾರತಮ್ಯ: ರಾಮಲಿಂಗಾ ರೆಡ್ಡಿ ಕಿಡಿ

ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಕಿಡಿ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2022, 19:31 IST
Last Updated 12 ಮಾರ್ಚ್ 2022, 19:31 IST
ರಾಮಲಿಂಗಾ ರೆಡ್ಡಿ
ರಾಮಲಿಂಗಾ ರೆಡ್ಡಿ   

ಬೆಂಗಳೂರು: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾಂಗ್ರೆಸ್‌ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಿಗೆ ಸರಿಯಾಗಿ ಅನುದಾನ ನೀಡದೇ ತಾರತಮ್ಯ ಮನಾಡಲಾಗುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಧ್ಯ ಪ್ರವೇಶಿಸಿ ಅನ್ಯಾಯ ಸರಿಪಡಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಆಗ್ರಹಿಸಿದರು.

ಶನಿವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿ ಸರ್ಕಾರ ಬಂದ ಬಳಿಕ ನಗರದ ಬಿಜೆಪಿ ಶಾಸಕರ 15 ಕ್ಷೇತ್ರಗಳಿಗೆ ₹ 9,888 ಕೋಟಿ ಅನುದಾನ ನೀಡಲಾಗಿದೆ. ಕಾಂಗ್ರೆಸ್‌ ಶಾಸಕರ 12 ಕ್ಷೇತ್ರಗಳಿಗೆ ₹ 2,186.48 ಕೋಟಿ ಮತ್ತು ಜೆಡಿಎಸ್‌ ಶಾಸಕರ ಒಂದು ಕ್ಷೇತ್ರಕ್ಕೆ ₹ 288.5 ಕೋಟಿ ಅನುದಾನ ನೀಡಲಾಗಿದೆ. ಕಾಂಗ್ರೆಸ್‌, ಜೆಡಿಎಸ್‌ ಶಾಸಕರ ಕ್ಷೇತ್ರಗಳಿಗೆ ಹೋಲಿಸಿದರೆ ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಐದು ಪಟ್ಟು ಹೆಚ್ಚು ಅನುದಾನ ನೀಡಲಾಗಿದೆ’ ಎಂದು ದೂರಿದರು.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ₹ 7,200 ಕೋಟಿ ಮತ್ತು ನಂತರ ಬಂದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ₹ 1,000 ಕೋಟಿಯನ್ನು ನಗರದ ವಿವಿಧ ಕ್ಷೇತ್ರಗಳಿಗೆ ಹಂಚಿಕೆ ಮಾಡಲಾಗಿತ್ತು. ಬಿಜೆಪಿ ಸರ್ಕಾರ ಬಂದ ಬಳಿಕ ಈ ಅನುದಾನಗಳನ್ನು ಹಿಂಪಡೆಯಲಾಗಿದೆ. ಬಳಿಕ ಅಮೃತ ನಗರೋತ್ಥಾನ ಯೋಜನೆ ಹೆಸರಿನಲ್ಲಿ ಹಂಚಿಕೆ ಮಾಡಲಾಗಿದೆ. ಈ ಸಂದರ್ಭದಲ್ಲಿ ತಾರತಮ್ಯ ಮಾಡಲಾಗಿದೆ ಎಂದರು.

ADVERTISEMENT

ಪಕ್ಷದ ಆಧಾರದಲ್ಲಿ ಅನುದಾನ ಹಂಚಿಕೆ ಮಾಡುವುದು ಸರಿಯಲ್ಲ. ಆ ರೀತಿ ಮಾಡುವುದನ್ನು ಬೆಂಗಳೂರು ಅಭಿವೃದ್ಧಿ ಎನ್ನಲಾಗದು. ಬಿಜೆಪಿ ಶಾಸಕರ ಕ್ಷೇತ್ರಗಳ ಅಭಿವೃದ್ಧಿ ಎಂದು ಕರೆಯಬೇಕು. ಈ ಅನ್ಯಾಯ ಸರಿಪಡಿಸುವಂತೆ ಮುಖ್ಯಮಂತ್ರಿಯವರಿಗೆ ಪತ್ರ ಬರೆಯಲಾಗುವುದು. ವಿಧಾನಸಭೆಯಲ್ಲೂ ವಿಷಯ ಪ್ರಸ್ತಾಪಿಸಲಾಗುವುದು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.