ADVERTISEMENT

ನಟಿ ರಮ್ಯಾಗೆ ಬೆದರಿಕೆ ಪ್ರಕರಣ: 11 ಮಂದಿ ವಿರುದ್ಧ ಕೋರ್ಟ್‌ಗೆ ದೋಷಾರೋಪ ಪಟ್ಟಿ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2025, 14:29 IST
Last Updated 11 ಅಕ್ಟೋಬರ್ 2025, 14:29 IST
ರಮ್ಯಾ 
ರಮ್ಯಾ    

ಬೆಂಗಳೂರು: ನಟಿ, ಮಾಜಿ ಸಂಸದೆ ರಮ್ಯಾ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಸಿಸಿಬಿ ಪೊಲೀಸರು, 11 ಮಂದಿ ವಿರುದ್ಧ ನಗರದ ಎಸಿಎಂಎಂ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ಪ್ರಕರಣ ದಾಖಲಾದ ಬಳಿಕ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಕಾರ್ಯಾಚರಣೆ ನಡೆಸಿ ರೇಣುಕಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ, ನಟ ದರ್ಶನ್ ಅಭಿಮಾನಿಗಳನ್ನು ಬಂಧಿಸಲಾಗಿತ್ತು.

ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ 180 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ಸಿಸಿಬಿ ಮೂಲಗಳ ತಿಳಿಸಿವೆ.

ADVERTISEMENT

‘ಆರೋಪಿಗಳನ್ನು ಬಂಧಿಸಿ, ವಿಚಾರಣೆ ನಡೆಸಲಾಗಿತ್ತು. ಆರೋಪಿಗಳ ಮೊಬೈಲ್‌ ಜಪ್ತಿ ಮಾಡಿಕೊಂಡು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್‌) ರವಾನೆ ಮಾಡಲಾಗಿತ್ತು. ಆ ವರದಿ ಬಂದಮೇಲೆ ಅದನ್ನೂ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು’ ಎಂದು ಸಿಸಿಬಿ ಮೂಲಗಳ ತಿಳಿಸಿವೆ.

‘ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಇನ್ನೂ ಕೆಲವರ ಪತ್ತೆ ಕಾರ್ಯ ನಡೆಯುತ್ತಿದೆ. ಅವರ ಬಂಧನದ ಬಳಿಕ ನ್ಯಾಯಾಲಯಕ್ಕೆ ಹೆಚ್ಚುವರಿ ದೋಷಾರೋಪ ಪಟ್ಟಿ ಸಲ್ಲಿಸಲಾಗುವುದು’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ದರ್ಶನ್ ಅವರ ಅಭಿಮಾನಿಗಳು ಎಂದು ಹೇಳಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಸಂದೇಶಗಳನ್ನು ಹಾಕಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ರಮ್ಯಾ ಅವರು ಜುಲೈ 28ರಂದು ನಗರ ಪೊಲೀಸ್ ಕಮಿಷನರ್‌ ಸೀಮಾಂತ್‌ ಕುಮಾರ್ ಸಿಂಗ್‌ ಅವರಿಗೆ ಲಿಖಿತ ದೂರು ಸಲ್ಲಿಸಿದ್ದರು. 43 ಖಾತೆಗಳನ್ನು ಉಲ್ಲೇಖಿಸಿ ದೂರು ನೀಡಿ ಕ್ರಮಕ್ಕೆ ಕೋರಿದ್ದರು. ದೂರಿನ ಪ್ರತಿಯನ್ನು ಸೈಬರ್‌ ಠಾಣೆಗೆ ವರ್ಗಾವಣೆ ಮಾಡಿದ್ದ ಕಮಿಷನರ್‌ ತನಿಖೆಗೆ ಸೂಚಿಸಿದ್ದರು.

ಕೊಲೆ ಪ್ರಕರಣದಲ್ಲಿ ದರ್ಶನ್‌ ಅವರಿಗೆ ಹೈಕೋರ್ಟ್‌ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್‌ ರದ್ದು ಪಡಿಸಿತ್ತು. ಬಳಿಕ ರಮ್ಯಾ ಅವರು ತಮ್ಮ ‘ಎಕ್ಸ್‌’ ಖಾತೆಯಲ್ಲಿ ‘ಭಾರತದ ಸಾಮಾನ್ಯ ಜನರಿಗೆ ಸುಪ್ರೀಂ ಕೋರ್ಟ್‌ ಒಂದು ಭರವಸೆಯ ಕಿರಣ ಇದ್ದಂತೆ. ರೇಣುಕಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿದೆ ಎನ್ನುವ ನಿರೀಕ್ಷೆಯಲ್ಲಿ’ ಎಂದು ಪೋಸ್ಟ್‌ ಮಾಡಿದ್ದರು.

ರಮ್ಯಾ ಅವರು ಆ ಪೋಸ್ಟ್‌ ಹಾಕಿದ ಬಳಿಕ ಇನ್‌ಸ್ಟಾಗ್ರಾಂ ಖಾತೆಗಳಿಗೆ ಅವಹೇಳನಕಾರಿ ಸಂದೇಶಗಳು ಬಂದಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.