ಬೆಂಗಳೂರು: ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಬಾಲಕಿ ಅತ್ಯಾಚಾರ ಪ್ರಕರಣದ ಅಪರಾಧಿಗೆ 2ನೇ ತ್ವರಿತ ವಿಶೇಷ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿ ಆದೇಶಿಸಿದೆ.
ಸಿದ್ದರಾಜು (24) ಶಿಕ್ಷೆಗೆ ಒಳಗಾದ ಅಪರಾಧಿ.
ಠಾಣಾ ವ್ಯಾಪ್ತಿಯ ಬಡಾವಣೆಯೊಂದರಲ್ಲಿ 2019ರ ನವೆಂಬರ್ 28ರಂದು ಬಾಲಕಿಯೊಬ್ಬಳು ಕಾಣೆಯಾಗಿದ್ದಳು. ಪೋಷಕರ ದೂರು ಆಧರಿಸಿ, ತನಿಖೆ ಕೈಗೊಳ್ಳಲಾಗಿತ್ತು. ಕೆಲವು ದಿನಗಳ ನಂತರ ತಾಯಿ ಜತೆಗೆ ಬಾಲಕಿ ಠಾಣೆಗೆ ಹಾಜರಾಗಿದ್ದರು. ಅಂದು ಬಾಲಕಿಯ ಹೇಳಿಕೆ ಪಡೆದುಕೊಂಡಾಗ ಅತ್ಯಾಚಾರ ನಡೆದಿರುವುದು ಗೊತ್ತಾಗಿತ್ತು. ಅಪರಾಧಿ ವಿರುದ್ಧ ಪೋಕ್ಸೊ ಕಾಯ್ದೆ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಿಕೊಂಡು ಆರೋಪಿಯನ್ನು ಬಂಧಿಸಲಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಕರಣದ ತನಿಖೆ ನಡೆಸಿ ಸಾಕ್ಷ್ಯಾಧಾರ ಕಲೆಹಾಕಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆದು ಮಂಗಳವಾರ ಅಪರಾಧಿಗೆ ನ್ಯಾಯಾಲಯವು ಶಿಕ್ಷೆ ವಿಧಿಸಿದೆ. ಸಂತ್ರಸ್ತ ಬಾಲಕಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ₹4 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದೆ. ಸರ್ಕಾರಿ ವಕೀಲರಾಗಿ ಎ.ವಿ.ಮಧು ಅವರು ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.