ADVERTISEMENT

RCB ಸಂಭ್ರಮಾಚರಣೆಯಲ್ಲಿ ದುರಂತ; ಸಾವಿನ ಸಂಖ್ಯೆ 11ಕ್ಕೆ ಏರಿಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಜೂನ್ 2025, 16:22 IST
Last Updated 4 ಜೂನ್ 2025, 16:22 IST
   

ಬೆಂಗಳೂರು: ರಾಯಲ್‌ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಜಯೋತ್ಸವದ ವೀಕ್ಷಣೆಗೆ ಬಂದಿದ್ದ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಈ ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, ಅವರನ್ನು ಬೌರಿಂಗ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಭಾರಿ ಸಂಖ್ಯೆಯಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳು ಜಮಾಯಿಸಿದ್ದು, ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಮಧ್ಯಾಹ್ನದ 12ರಿಂದಲೇ ವಿಧಾನಸೌಧ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದತ್ತ ಆರ್‌ಸಿಬಿ ಅಭಿಮಾನಿಗಳು ಬರಲು ಆರಂಭಿಸಿದ್ದರು. ಇದರಿಂದ ಗೊಂದಲ ವಾತಾವರಣ ನಿರ್ಮಾಣವಾಗಿದೆ. ಪೋಷಕರ ಜತೆಗೆ ಪುಟ್ಟಮಕ್ಕಳು ಕ್ರೀಡಾಂಗಣದತ್ತ ಬಂದಿದ್ದು, ತೊಂದರೆಗೆ ಸಿಲುಕಿದ್ದಾರೆ.

ವಿಜಯೋತ್ಸವವನ್ನು ದಿಢೀರ್ ನಿರ್ಧಾರ ಮಾಡಿದ್ದರಿಂದ ಭದ್ರತೆಗೆ ಸಿಬ್ಬಂದಿ ನಿಯೋಜನೆಯಲ್ಲಿ ಸಮಸ್ಯೆ ಆಗಿದೆ. ದಿಢೀರ್‌ ಆಗಿ ದೊಡ್ಡಸಂಖ್ಯೆಯಲ್ಲಿ ಅಭಿಮಾನಿಗಳು ಬಂದಿದ್ದರಿಂದ ನಿಯಂತ್ರಣವು ಸಾಧ್ಯವಾಗದೇ ಪೊಲೀಸರು ಪರದಾಡಿದರು. ಕಡಿಮೆ ಸಮಸ್ಯೆಯಿದ್ದ ಕಾರಣಕ್ಕೆ ಬೇರೆ ಬೇರೆ ಭಾಗದ ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜನೆ ಮಾಡುವುದು ಸಾಧ್ಯವಾಗಲಿಲ್ಲ. ಇನ್ನು ನಿಯೋಜನೆ ಮಾಡಿದ್ದ ಸಿಬ್ಬಂದಿಯೂ ತಮ್ಮ ಸ್ಥಳಕ್ಕೆ ತಲುಪುವುದು ಕಷ್ಟವಾಗಿತ್ತು.

ಮೆಟ್ರೊ ನಿಲುಗಡೆ ಸ್ಥಗಿತಗೊಳಿಸಿದ ಬಿಎಂಆರ್‌ಸಿಎಲ್‌

ಬೆಂಗಳೂರು: ಐಪಿಎಲ್‌ ಗೆದ್ದಿರುವ ಆರ್‌ಸಿಬಿ ತಂಡದ ಅಭಿನಂದನೆಗಾಗಿ ಚಿನ್ನಸ್ವಾಮಿ ಕ್ರೀಡಾಂಗಣ ಮತ್ತು ವಿಧಾನಸೌಧಕ್ಕೆ ಬರುವವರ ಸಂಖ್ಯೆ ವಿಪರೀತವಾಗಿದ್ದರಿಂದ ವಿಧಾನಸೌಧ ಮತ್ತು ಕಬ್ಬನ್‌ ಪಾರ್ಕ್‌ ಮೆಟ್ರೊ ನಿಲ್ದಾಣಗಳಲ್ಲಿ ರೈಲು ನಿಲುಗಡೆಯನ್ನು ಬಿಎಂಆರ್‌ಸಿಎಲ್‌ ಸ್ಥಗಿತಗೊಳಿಸಿದೆ.

ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಲೂ ಟ್ರಾಫಿಕ್ ಜಾಮ್

ವಿಧಾನಸೌಧ  ಎದುರು RCB ಅಭಿಮಾನಿಗಳು ನೆರೆದಿರುವುದು

ಸೂತಕದ ಘಳಿಗೆ ಮಾಡಿರುವ ಕಾಂಗ್ರೆಸ್ ಸರ್ಕಾರ: ಅಶೋಕ

ಈ ಮಹಾದುರಂತಕ್ಕೆ ಸರ್ಕಾರವೇ ನೇರ ಹೊಣೆ: ಕುಮಾರಸ್ವಾಮಿ

ಸರಿಯಾದ ಪೂರ್ವಸಿದ್ಧತೆ ಮಾಡಿಕೊಳ್ಳದೆ, ಯಾವುದೇ ಮುನ್ನೆಚ್ಚರಿಕೆ ವಹಿಸದಿರುವುದೇ ಈ ಮಹಾದುರಂತಕ್ಕೆ ನೇರ ಕಾರಣ. ದುರಂತದ ಹೊಣೆಯನ್ನು ರಾಜ್ಯ ಸರ್ಕಾರ ಸರಕಾರವೇ ಹೊತ್ತುಕೊಳ್ಳಬೇಕು.

ವೈದೇಹಿ ಆಸ್ಪತ್ರೆಯಲ್ಲಿ ನಾಲ್ಕು ಸಾವು

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಕ್ಟರಿ ಪರೇಡ್ ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ ಎಂದು ವೈದೇಹಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ADVERTISEMENT

ಒಟ್ಟು 16 ಜನರನ್ನು ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಇದರಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಎಲ್ಲರೂ 18 ರಿಂದ 22 ವಯಸ್ಸಿನವರು. ಮೃತಪಟ್ಟವರಲ್ಲಿ ಮೂರು ಮಂದಿ ಯುವಕರು, ಒಬ್ಬಳು ಯುವತಿ ಇದ್ದಾರೆ. ಇಬ್ಬರು ಗುರುತು ಪತ್ತೆಯಾಗಿದ್ದು, ಇನ್ನೂ ಇಬ್ಬರ ಗುರುತು ಪತ್ತೆ ಆಗಿಲ್ಲ‌.12ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ಹೇಳಿದರು.

ಸಾವಿನ ಸಂಖ್ಯೆ 11ಕ್ಕೆ ಏರಿಕೆ

ಬೆಂಗಳೂರು: ರಾಯಲ್‌ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಜಯೋತ್ಸವದ ವೀಕ್ಷಣೆಗೆ ಬಂದಿದ್ದ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿದೆ. ಇನ್ನೂ ಹಲವರು ಅಸ್ವಸ್ಥರಾಗಿದ್ದು, ಅವರಿಗೆ ಬೌರಿಂಗ್‌ ಹಾಗೂ ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಕೆಲವರ ಸ್ಥಿತಿ ಗಂಭೀರವಾಗಿದೆ.

ವೈದೇಹಿ ಆಸ್ಪತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ...7.30ಕ್ಕೆ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಲಿದ್ದಾರೆ.

ಅಭಿಮಾನಿಗಳ ಪ್ರವಾಹ, ಕಾರು ಜಖಂ

ಬೆಂಗಳೂರಿನ ಎಂ.ಜಿ. ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಆರ್‌ಸಿಭಿ ಅಭಿಮಾನಿಗಳ ಸಾಗರ...

ಭಾರಿ ಸಂಖ್ಯೆಯಲ್ಲಿ ಸೇರಿದ ಅಭಿಮಾನಿಗಳು, ಪೊಲೀಸರಿಂದ ಜನರನ್ನು ನಿಯಂತ್ರಿಸಲು ಹರಸಾಹಸ

ಬೆಂಗಳೂರಿನ ಎಂ.ಜಿ. ರಸ್ತೆ ಮೆಟ್ರೊ ನಿಲ್ದಾಣ ಬಂದ್‌

ಬೆಂಗಳೂರು: ವಿಪರೀತ ಜನಸಂದಣಿಯನ್ನು ನಿಯಂತ್ರಿಸಲಾರದೇ ಮಹಾತ್ಮಗಾಂಧಿ ರಸ್ತೆ ಮೆಟ್ರೊ ನಿಲ್ದಾಣದ ಪ್ರವೇಶದ್ವಾರದ ಶಟರ್ ಎಳೆಯಲಾಯಿತು.

ನಿಲ್ದಾಣದ ಒಳಗೆ ಹೋಗಿರುವ ಪ್ರಯಾಣಿಕರೆಲ್ಲರೂ ಮೆಟ್ರೊ ಹತ್ತಿದ ಮೇಲೆ ಒಮ್ಮೆ ಶಟರ್‌ ತೆಗೆದು ಎರಡೇ ನಿಮಿಷದಲ್ಲಿ ಮತ್ತೆ ಬಂದ್‌ ಮಾಡಲಾಗುತ್ತಿತ್ತು. ಅಷ್ಟು ಹೊತ್ತಿಗೆ ಮೂರು ನಾಲ್ಕು ರೈಲು ತುಂಬುವಷ್ಟು ಜನರು ಒಳಗೆ ನುಗ್ಗುತ್ತಿದ್ದರು.

ಪ್ರವೇಶದ್ವಾರದ ಮುಂದೆ ಸಾವಿರಾರು ಜನರು ಒಮ್ಮೆಲೇ ಸೇರುತ್ತಿರುವುದರಿಂದ ಪೊಲೀಸರು ನಿಯಂತ್ರಿಸಲು ಪರದಾಡಿದರು. ಟ್ರಿನಿಟಿ ನಿಲ್ದಾಣಕ್ಕೆ ಕಳುಹಿಸಿದರು.

ವಿಧಾನಸೌಧ ಮತ್ತು ಕಬ್ಬನ್‌ ಪಾರ್ಕ್‌ ನಿಲ್ದಾಣಗಳನ್ನು ಬಂದ್ ಮಾಡಿರುವುದರಿಂದ ಎಂ.ಜಿ. ರಸ್ತೆ ಮೆಟ್ರೊ ನಿಲ್ದಾಣ ತುಂಬಿ ತುಳುಕುವಂತಾಯಿತು.

ಅಭಿಮಾನ ಇರಲಿ, ಆದರೆ ಜೀವಕ್ಕಿಂತ ದೊಡ್ಡದಲ್ಲ. ದಯವಿಟ್ಟು ಎಲ್ಲರೂ ಸುರಕ್ಷಿತವಾಗಿರಿ: ಡಿ.ಕೆ. ಶಿವಕುಮಾರ್

ಆರ್‌ಸಿಬಿಯ ಐಪಿಎಲ್ ಗೆಲುವಿನ ಸಂಭ್ರಮಾಚರಣೆಗೆ ಸಾಕ್ಷಿಯಾಗಬೇಕಿದ್ದ ಜನರು ದುರಂತಕ್ಕೆ ಒಳಗಾಗಿ, ಮೃತಪಟ್ಟಿರುವುದು ತೀವ್ರ ನೋವು ಮತ್ತು ಆಘಾತ ತಂದಿದೆ. ಮೃತರಿಗೆ ನನ್ನ ಸಂತಾಪಗಳು. ಅವರ ಕುಟುಂಬಕ್ಕೆ ನನ್ನ ಸಾಂತ್ವನಗಳು. ಅಭಿಮಾನ ಇರಲಿ, ಆದರೆ ಜೀವಕ್ಕಿಂತ ದೊಡ್ಡದಲ್ಲ. ದಯವಿಟ್ಟು ಎಲ್ಲರೂ ಸುರಕ್ಷಿತವಾಗಿರಿ ಎಂದು ಮನವಿ ಮಾಡಿಕೊಳ್ಳುತ್ತೇನೆ.
ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ

ಈ ದುರಂತದ ನೋವು ಗೆಲುವಿನ ಸಂಭ್ರಮವನ್ನೂ ಅಳಿಸಿಹಾಕಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆ ವೇಳೆ ನೂಕುನುಗ್ಗಲು ಉಂಟಾಗಿ ಹಲವರು ಪ್ರಾಣ ಕಳೆದುಕೊಂಡು, ಮತ್ತೆ ಕೆಲವರು ಗಂಭೀರ ಗಾಯಗೊಂಡ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಈ ದುರಂತದ ನೋವು ಗೆಲುವಿನ ಸಂಭ್ರಮವನ್ನೂ ಅಳಿಸಿಹಾಕಿದೆ.
ಸಿದ್ದರಾಮಯ್ಯ, ಮುಖ್ಯಮಂತ್ರಿ

ಬೌರಿಂಗ್ ಹಾಗೂ ವೈದೇಹಿ ಆಸ್ಪತ್ರೆಗೆ ಸಿಎಂ ಭೇಟಿ

ವಿಧಾನಸೌಧದಲ್ಲಿ ಮೆಟ್ರೊ ಗೇಟ್‌ ತೆರೆದ ಬಿಎಂಆರ್‌ಸಿಎಲ್‌

ಜನಸಂದಣಿ ನಿಯಂತ್ರಿಸಲು ವಿಧಾನಸೌಧ ಮತ್ತು ಕಬ್ಬನ್‌ ಪಾರ್ಕ್‌ ಮೆಟ್ರೊ ನಿಲ್ದಾಣದಲ್ಲಿ ಮೆಟ್ರೊ ನಿಲುಗಡೆಯನ್ನು ಸಂಜೆ 4.30ರಿಂದ ಸ್ಥಗಿತಗೊಳಿಸಲಾಗಿತ್ತು. ರಾತ್ರಿ 7.20ರಿಂದ ವಿಧಾನಸೌಧದಲ್ಲಿ ನಿಲುಗಡೆ ನೀಡಲಾಗಿದೆ ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗಡೆ ಕಾಲ್ತುಳಿತದಲ್ಲಿ ಅಭಿಮಾನಿಗಳ ಸಾವು ಸಂಭವಿಸಿದ್ದು ‘ದುರದೃಷ್ಟಕರ’. ಆರ್‌ಸಿಬಿಯ ಐಪಿಎಲ್‌ ವಿಜಯೋತ್ಸವ ಕಾರ್ಯಕ್ರಮಕ್ಕೆ ಸೂಕ್ತ ರೀತಿಯಲ್ಲಿ ಯೋಜನೆ ರೂಪಿಸಿಕೊಳ್ಳಬೇಕಿತ್ತು.
ದೇವಜಿತ್‌ ಸೈಕಿಯಾ, ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿ ಕಾರ್ಯದರ್ಶಿ

ಮೃತರ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರ: ಸಿದ್ದರಾಮಯ್ಯ

ಬೆಂಗಳೂರು: ರಾಯಲ್‌ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಜಯೋತ್ಸವದ ವೀಕ್ಷಣೆಗೆ ಬಂದಿದ್ದ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಳಿಗೆ ತಲಾ ₹10 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ದುರ್ಘಟನೆಗೆ ಸರ್ಕಾರವೇ ಹೊಣೆ - ಸಿಪಿಐ(ಎಂ) ಆರೋಪ

ದುರಂತಕ್ಕೆ ಸರ್ಕಾರವೇ ಹೊಣೆ: ಟೀಕೆಗಳ ಸುರಿಮಳೆ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಕಾಲ್ತುಳಿತಕ್ಕೆ ಸರ್ಕಾರವೇ ಹೊಣೆ. ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು ಎಂದು ಬಿಜೆಪಿಯ ಹಲವು ನಾಯಕರು ಒತ್ತಾಯಿಸಿದ್ದಾರೆ.

ವಿಜಯೋತ್ಸವದ ವೇಳೆ ನಿರೀಕ್ಷೆ ಮೀರಿ ಜನರು ಬಂದಿದ್ದಾರೆ. ಕಾಲ್ತುಳಿತಕ್ಕೆ ಸಿಲುಕಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಕೆಲವರು ಸಾವು–ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಇಂತಹ ದುರಂತಕ್ಕೆ ಸರ್ಕಾರದ ನಿರ್ಲಕ್ಷ್ಯವೇ ಕಾರಣ
ಬಿ.ವೈ. ವಿಜಯೇಂದ್ರ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ
ಪೂರ್ವಸಿದ್ಧತೆ ಮಾಡಿಕೊಳ್ಳದೆ ಅವಸರದಲ್ಲಿ ಎರಡು ಕಾರ್ಯಕ್ರಮ ಆಯೋಜನೆ ಮಾಡಿದ್ದು, ದೊಡ್ಡ ಸಂಖ್ಯೆಯಲ್ಲಿ ಜನರು ಸೇರಲು ಅವಕಾಶ ಮಾಡಿಕೊಟ್ಟಿದ್ದು ದುರಂತಕ್ಕೆ ಕಾರಣ. ಘಟನೆ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸಬೇಕು
ಬಸವರಾಜ ಬೊಮ್ಮಾಯಿ, ಸಂಸದ
ಸರಿಯಾದ ಪೂರ್ವಸಿದ್ಧತೆ ಇಲ್ಲದೆ, ಯೋಜನೆ ಇಲ್ಲದೆ, ಪೊಲೀಸರಿಗೆ ಸಮಯ ಕೊಡದೆ ಅಭಿನಂದನಾ ಸಮಾರಂಭ ನಡೆಸಲು ರಾಜ್ಯ ಸರ್ಕಾರ ದುಂಬಾಲು ಬಿದ್ದಿದ್ದೆ ಈ ಅನಾಹುತಕ್ಕೆ ಕಾರಣ
ಆರ್‌. ಅಶೋಕ, ವಿಧಾನಸಭೆ ವಿರೋಧ ಪಕ್ಷದ ನಾಯಕ

ಕಾಲ್ತುಳಿತ ಸಂಭವಿಸಿದ ಸ್ಥಳದ ವಿಡಿಯೊ

ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಇಂತಹ ದುರಂತ ನಡೆಯಬಾರದಾಗಿತ್ತು: ಡಿಸಿಎಂ

ಗಾಯಗೊಂಡವರ ಚಿಕಿತ್ಸೆ ವೆಚ್ಚವನ್ನು ಸರ್ಕಾರ ಭರಿಸಲಿದೆ: ಸಿದ್ದರಾಮಯ್ಯ

ಮೃತಪಟ್ಟವರ ಕುಟುಂಬದವರಿಗೆ ₹10 ಲಕ್ಷ ಪರಿಹಾರ ನೀಡಲಿದ್ದೇವೆ. ಗಾಯಗೊಂಡವರ ಚಿಕಿತ್ಸೆ ವೆಚ್ಚವನ್ನು ಸರ್ಕಾರ ಭರಿಸಲಿದೆ. ಗಾಯಗೊಂಡವರು ಪ್ರಾಣಾಪಾಯಾದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ದುರಂತದ ಬಗ್ಗೆ ಮ್ಯಾಜಿಸ್ಟ್ರೀಯಲ್ ತನಿಖೆಗೆ ಆದೇಶಿಸಿದ್ದೇನೆ. ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು. 15ದಿನಗಳ ಒಳಗಾಗಿ ತನಿಖೆಯ ವರದಿಯನ್ನು ಸಲ್ಲಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸುರಕ್ಷತೆಗೆ ಆದ್ಯತೆ ಇರಲಿ: ಖರ್ಗೆ, ರಾಹುಲ್ ಸಂತಾಪ

ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಘಟನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ರಾಹುಲ್‌ ಗಾಂಧಿ ಬುಧವಾರ ಶೋಕ ವ್ಯಕ್ತಪಡಿಸಿದ್ದಾರೆ.

‘ಭವಿಷ್ಯದಲ್ಲಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ವೇಳೆ ಸುರಕ್ಷತೆಗೆ ಆದ್ಯತೆ ನೀಡಬೇಕು ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಉಭಯ ನಾಯಕರು ಸಲಹೆ ನೀಡಿದ್ದಾರೆ.

‘ಈ ಘಟನೆಯಲ್ಲಿ ಸಂತ್ರಸ್ತರಾದವರೊಂದಿಗೆ ಕಾಂಗ್ರೆಸ್‌ ಪಕ್ಷ ನಿಲ್ಲುವುದು. ಕರ್ನಾಟಕ ಸರ್ಕಾರದಿಂದ ಪರಿಹಾರ ವೈದ್ಯಕೀಯ ನೆರವು ಒದಗಿಸುವುದಕ್ಕೂ ಪಕ್ಷ ಪ್ರಯತ್ನಿಸಲಿದೆ’ ಎಂದು ಖರ್ಗೆ ಅವರು ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬೆಂಗಳೂರು ಕಾಲ್ತುಳಿತ: ನಾಳಿನ ಎಲ್ಲ ಸರ್ಕಾರಿ ಕಾರ್ಯಕ್ರಮ ಮುಂದೂಡಿಕೆ

ಬೆಂಗಳೂರು: ವಿಧಾನಸೌಧದಲ್ಲಿ ಗುರುವಾರ ನಡೆಯಲಿರುವ ಎಲ್ಲ ಸರ್ಕಾರಿ ಕಾರ್ಯಕ್ರಮಗಳನ್ನು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟ ಕಾರಣ ಮುಂದೂಡಲಾಗಿದೆ.

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಅರಣ್ಯ ಇಲಾಖೆ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ವತಿಯಿಂದ ವಿಧಾನಸೌಧದ ಪೂರ್ವದ್ವಾರ ಬಳಿ ಹಮ್ಮಿಕೊಂಡಿದ್ದ ‘ಪರಿಸರ ನಡಿಗೆ’ ಜಾಥಾ ಕಾರ್ಯಕ್ರಮ ಮತ್ತು ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ‌‘ವಿಶ್ವ ಪರಿಸರ ದಿನಾಚರಣೆ’ ಮತ್ತು ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮುಂದೂಡಲಾಗಿದೆ.

ಈ ವಿಷಯದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ: ಸಿದ್ದರಾಮಯ್ಯ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ ನಡೆದ ಈ ವಿಷಯದಲ್ಲಿ ರಾಜಕೀಯ ನಡೆಸುವುದು ಸರಿಯಲ್ಲ. ಈ ದುರಂತ ನಡೆಯಬಾರದಿತ್ತು, ನಡೆದು ಹೋಗಿದೆ. ಇದಕ್ಕಾಗಿ ಸರ್ಕಾರ ಅತ್ಯಂತ ಹೆಚ್ಚಿನ ದುಃಖ ವ್ಯಕ್ತಪಡಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ನಿನ್ನೆ ತಡರಾತ್ರಿವರೆಗೂ ಐಪಿಎಲ್ ಫೈನಲ್ ಪಂದ್ಯ ನಡೆದಿತ್ತು. ಕ್ರಿಕೆಟ್ ಅಸೋಸಿಯೇಶನ್ ಅವರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಸರ್ಕಾರದ ವತಿಯಿಂದ ವಿಧಾನಸೌಧದ ಬಳಿ ಕಾರ್ಯಕ್ರಮ ಆಯೋಜಿಸಲಾಗಿತ್ತು ಎಂದು ಹೇಳಿದ್ದಾರೆ.

ನಮ್ಮ ನಿರೀಕ್ಷೆಗೂ ಮೀರಿ ಜನ, ಅಭಿಮಾನಿಗಳು ಸೇರಿದ್ದರು. ವಿಧಾನಸೌಧ ಎದುರು ಸುಮಾರು 1ಲಕ್ಷಕ್ಕೂ ಹೆಚ್ಚು ಜನ ಸೇರಿದ್ದರು. ಆದರೂ ಸರ್ಕಾರ ಆಯೋಜಿಸಿದ್ದ ಸಮಾರಂಭದಲ್ಲಿ ಯಾವುದೇ ಅನಿರೀಕ್ಷಿತ ಘಟನೆಗಳು, ದುರಂತ ನಡೆದಿಲ್ಲ ಎಂದು ತಿಳಿಸಿದ್ದಾರೆ.

ಆದರೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ದುರಂತ ಸಂಭವಿಸಿದೆ. ಯಾರೂ ಇದನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಕ್ರಿಕೆಟ್ ಅಸೋಸಿಯೇಶನ್ ಅಥವಾ ನಾವು ನಿರೀಕ್ಷಿಸಿರಲಿಲ್ಲ. ಕ್ರಿಕೆಟ್ ಸ್ಟೇಡಿಯಂನಲ್ಲಿ 35 ಸಾವಿರ ಜನರು ಕುಳಿತುಕೊಳ್ಳುವ ಆಸನ ವ್ಯವಸ್ಥೆಯಿದೆ. ಆದರೆ 2-3 ಲಕ್ಷ ಜನರು ಆಗಮಿಸಿದ್ದಾರೆ. ಇಷ್ಟೊಂದು ಪ್ರಮಾಣದಲ್ಲಿ ಜನರು ಬರುವ ನಿರೀಕ್ಷೆ ಮಾಡಿರಲಿಲ್ಲ. ಸ್ಟೇಡಿಯಂ ಸಾಮರ್ಥ್ಯದಷ್ಟು ಜನರ ನಿರೀಕ್ಷೆಯಿತ್ತು. ಕ್ರಿಕೆಟ್ ಅಸೋಸಿಯೇಷನ್ ನಡೆಸುವ ಕಾರ್ಯಕ್ರಮಗಳಿಗೆ ಭದ್ರತೆ ಒದಗಿಸುವ ಕೆಲಸ ಸರ್ಕಾರ ಮಾಡುತ್ತದೆಯಷ್ಟೇ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.