ಪವಿತ್ರಾಗೌಡ
ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಮೊದಲನೇ ಆರೋಪಿ ಪವಿತ್ರಾಗೌಡ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ 57ನೇ ಸೆಷನ್ಸ್ ನ್ಯಾಯಾಲಯವು ಅರ್ಜಿಯನ್ನು ವಜಾಗೊಳಿಸಿ ಮಂಗಳವಾರ ಆದೇಶಿಸಿದೆ.
‘ಸಿಂಗಲ್ ಪೇರೆಂಟ್ ಆಗಿರುವುದರಿಂದ ಪುತ್ರಿ ಆರೈಕೆ ಮಾಡಬೇಕಿದೆ’ ಎಂಬ ಕಾರಣ ನೀಡಿ ಪವಿತ್ರಾ ಅವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಧೀಶರು, ಪವಿತ್ರಾ ಅವರು ನೀಡಿದ್ದ ಯಾವುದೇ ಕಾರಣಗಳನ್ನು ಪರಿಗಣಿಸದೆ ಅರ್ಜಿಯನ್ನು ವಜಾಗೊಳಿಸಿದ್ದಾರೆ.
ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಸೇರಿ 7 ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಷರತ್ತುಬದ್ಧ ಜಾಮೀನನ್ನು ಸುಪ್ರೀಂ ಕೋರ್ಟ್ ಆಗಸ್ಟ್ 14ರಂದು ರದ್ದುಪಡಿಸಿತ್ತು. ಬಳಿಕ, ಏಳು ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ಬಂಧಿಸಿದ್ದರು. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು.
ಮತ್ತೊಂದೆಡೆ ದರ್ಶನ್ ಅವರನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ಸಂಬಂಧ ಸಲ್ಲಿಸಿದ್ದ ಅರ್ಜಿಯ ವಿಚಾರಣೆ 64ನೇ ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯಿತು.
ದರ್ಶನ್ ಪರ ವಕೀಲರು ಅರ್ಜಿಗೆ ಆಕ್ಷೇಪ ವ್ಯಕ್ತಪಡಿಸಿದರು. ಬಳಿಕ ಅರ್ಜಿಯ ವಿಚಾರಣೆಯನ್ನು ಬುಧವಾರಕ್ಕೆ ನ್ಯಾಯಾಲಯವು ಮುಂದೂಡಿತು.
ಈ ಪ್ರಕರಣದಲ್ಲಿ 272 ಸಾಕ್ಷಿಗಳು ಇದ್ದಾರೆ. ಸುಪ್ರೀಂ ಕೋರ್ಟ್ ಸಹ ತ್ವರಿತ ವಿಚಾರಣೆಗೆ ಸೂಚಿಸಿದೆ. ವಿಡಿಯೊ ಕಾನ್ಫರೆನ್ಸ್ನಲ್ಲಿ ವಿಚಾರಣೆಗೆ ಹಾಜರಾಗುವುದು ಸೂಕ್ತ ಅಲ್ಲ. ದರ್ಶನ್ ಅವರನ್ನು ಬಳ್ಳಾರಿಗೆ ಸ್ಥಳಾಂತರ ಮಾಡಲು ಯಾವುದೇ ಕಾರಣ ಇಲ್ಲ. ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡುವುದು ಬೇಡ ಎಂದು ದರ್ಶನ್ ಪರ ವಕೀಲರು ನ್ಯಾಯಾಧೀಶರಲ್ಲಿ ಮನವಿ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.