ADVERTISEMENT

ಬಡ್ತಿ: ರೇವಣ್ಣ ಗೊಂದಲ ಸೃಷ್ಟಿ: ದಲಿತ ಸಂಘರ್ಷ ಸಮಿತಿ ಒಕ್ಕೂಟ ಆರೋಪ

​ಪ್ರಜಾವಾಣಿ ವಾರ್ತೆ
Published 17 ಜೂನ್ 2019, 20:13 IST
Last Updated 17 ಜೂನ್ 2019, 20:13 IST
ಎಚ್‌.ಡಿ.ರೇವಣ್ಣ
ಎಚ್‌.ಡಿ.ರೇವಣ್ಣ   

ಬೆಂಗಳೂರು: ‘ಬಡ್ತಿ ಮೀಸಲಾತಿ ಕಾಯ್ದೆ ಅನುಷ್ಠಾನದಲ್ಲಿ ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಹಸ್ತಕ್ಷೇಪ ನಡೆಸಿ ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ’ ಎಂದು ದಲಿತ ಸಂಘರ್ಷ ಸಮಿತಿ ಒಕ್ಕೂಟ ಆರೋಪಿಸಿದೆ.

ಸೋಮವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್‌, ‘ಬಡ್ತಿ ಮೀಸಲಾತಿ ಕಾಯ್ದೆಯನ್ನು ಸುಪ್ರೀಂ ಕೋರ್ಟ್‌ ಈ ವರ್ಷದ ಮೇ 10ರಂದು ಎತ್ತಿ ಹಿಡಿದಿದೆ. ಆದರೆ, ಸಚಿವರು ಹಾಗೂ ಅಧಿಕಾರಿಗಳು ಜವಾಬ್ದಾರಿಯುತವಾಗಿ ವರ್ತಿಸದೆ ಹಳೆ ಚಾಳಿಯನ್ನೇ ಮುಂದುವರಿಸಿದ್ದಾರೆ. ಇಡೀ ಲೋಕೋಪಯೋಗಿ ಇಲಾಖೆಯನ್ನೇ ತನ್ನ ಪಿತ್ರಾರ್ಜಿತ ಆಸ್ತಿ ಎಂದು ರೇವಣ್ಣ ಭಾವಿಸಿದಂತಿದೆ’ ಎಂದು ಕಿಡಿಕಾರಿದರು.

‘ರೇವಣ್ಣ ಒಕ್ಕಲಿಗರು, ಲಿಂಗಾಯತರು, ಬ್ರಾಹ್ಮಣ (ಸಾಮಾನ್ಯ ಜಾತಿ) ನೌಕರರ ಹಿತಾಸಕ್ತಿಯನ್ನು ಮಾತ್ರ ರಕ್ಷಿಸುತ್ತಿದ್ದು, ದಲಿತ ನೌಕರರ ಅವಕಾಶಗಳನ್ನು ಶಾಶ್ವತವಾಗಿ ಮುಚ್ಚುತ್ತಿದ್ದಾರೆ. ಅವರು ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ಅವರು ಆಗ್ರಹಿಸಿದರು.

ADVERTISEMENT

‘ಲೋಕೋಪಯೋಗಿ ಇಲಾಖೆಯಲ್ಲಿ ಇಬ್ಬರು ಕಾರ್ಯಪಾಲಕ ಎಂಜಿನಿಯರ್‌ಗಳಿಗೆ ಮಾತ್ರ ಬಡ್ತಿ ನೀಡಲಾಗಿದೆ. ಉಳಿದ 215 ಕಾರ್ಯಪಾಲಕ ಎಂಜಿನಿಯರ್‌ಗಳನ್ನು ಬೇರೆ ಬೇರೆ ಇಲಾಖೆಗಳಿಗೆ ಹಂಚಿಕೆ ಮಾಡಿದ್ದಾರೆ. ಜ್ಯೇಷ್ಠತಾ ಪಟ್ಟಿ ಸಿದ್ಧಪಡಿಸಲು 30 ದಿನಗಳ ಗಡುವು ವಿಧಿಸಲಾಗಿತ್ತು. ಈ ಅವಧಿ ಮುಕ್ತಾಯಗೊಂಡ ಬಳಿಕವೂ 107 ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗಳಿಗೆ ಸ್ಥಳನಿಯುಕ್ತಿ ಮಾಡಿಲ್ಲ. ಕರ್ತವ್ಯಲೋಪ ಎಸಗಿದ ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿ ಕೃಷ್ಣಾ ರೆಡ್ಡಿ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು’ ಎಂದು ಅವರು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.