ADVERTISEMENT

ಶೇ 56ರಷ್ಟು ಮೀಸಲಾತಿ: 9ನೇ ಪರಿಚ್ಛೇದಕ್ಕೆ ಸೇರಿಸಲು ವಿ.ಎಸ್‌. ಉಗ್ರಪ್ಪ ಆಗ್ರಹ

​ಪ್ರಜಾವಾಣಿ ವಾರ್ತೆ
Published 25 ಜನವರಿ 2026, 14:22 IST
Last Updated 25 ಜನವರಿ 2026, 14:22 IST
ವಿ.ಎಸ್.ಉಗ್ರಪ್ಪ
ವಿ.ಎಸ್.ಉಗ್ರಪ್ಪ   

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗದವರಿಗೆ ಮೀಸಲಾತಿ ಪ್ರಮಾಣವನ್ನು 2022ರಲ್ಲಿ ಶೇಕಡ 56ಕ್ಕೆ ಹೆಚ್ಚಿಸಿದ್ದರೂ, ಅದು ಜಾರಿಗೆ ಬಂದಿಲ್ಲ. ಇದನ್ನು ಸಂವಿಧಾನದ 9ನೇ ಪರಿಚ್ಛೇದಕ್ಕೆ ಸೇರಿಸುವ ಮೂಲಕ ಈ ಸಮುದಾಯಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಅನುಕೂಲ ಮಾಡಿಕೊಡಬೇಕು ಎಂದು ರಾಜ್ಯ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆಯ ಅಧ್ಯಕ್ಷ ವಿ.ಎಸ್‌. ಉಗ್ರಪ್ಪ ಆಗ್ರಹಿಸಿದರು.

ಭಾನುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನದಾಸ್‌ ಆಯೋಗದ ಶಿಫಾರಸಿನಂತೆ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರವು ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ 15ರಿಂದ ಶೇ 17ಕ್ಕೆ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ 3ರಿಂದ ಶೇ 7ಕ್ಕೆ ಏರಿಸಿತ್ತು. ಇದರಿಂದ ಒಟ್ಟು ಮೀಸಲಾತಿ ಪ್ರಮಾಣ ಶೇ 56ಕ್ಕೆ ಏರಿಕೆಯಾಗಿತ್ತು. ಆದರೆ, ಕೆಲವರು ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು. ನ್ಯಾಯಾಲಯ ತಡೆಯಾಜ್ಞೆ ನೀಡಿದ್ದು, ಹಿಂದಿನ ಮೀಸಲಾತಿಯೇ ಮುಂದುವರಿದಿದೆ’ ಎಂದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ ಮೀಸಲಾತಿ ಕಾಯ್ದೆ–2022 ಅನ್ನು 9ನೇ ಪರಿಚ್ಛೇದಕ್ಕೆ ಸೇರಿಸಲು ರಾಜ್ಯ ಸರ್ಕಾರ ವಿಧಾನಮಂಡಲದ ಬೆಳಗಾವಿ ಅಧಿವೇಶನದಲ್ಲಿ ನಿರ್ಣಯ ಕೈಗೊಂಡಿರುವುದು ಸ್ವಾಗತಾರ್ಹ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಬೇಕು. ಕೇಂದ್ರ ಸರ್ಕಾರ ಕೂಡ ಈ ಸಮುದಾಯಗಳೊಂದಿಗೆ ಚೆಲ್ಲಾಟವಾಡದೇ ನಿರ್ಣಯ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ADVERTISEMENT

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರದ ಕೆಲವರು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದುಕೊಂಡು ಮೀಸಲಾತಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ವೇದಿಕೆಯ ಕಾರ್ಯಾಧ್ಯಕ್ಷ ಎಂ. ನರಸಿಂಹಯ್ಯ, ಖಜಾಂಚಿ ಇ. ರಾಜಪ್ಪ, ಉಪಾಧ್ಯಕ್ಷರಾದ ರೇವತಿ ಭಿಪುತ್ರಿ, ರಾಜಣ್ಣ ಟಿ., ಅನಸೂಯ ಕೆಂಪನಹಳ್ಳಿ, ಸಣ್ಣ ನಾಯಕ್‌, ರಮೇಶ್‌ ಹಿರೇಜಂಬೂರು, ನಾಗರಾಜ್ ಗಾಣದಹುಣಸೆ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.