ADVERTISEMENT

ಒಳ ಮೀಸಲಾತಿ ಅನುಷ್ಠಾನಕ್ಕೆ ಆಗ್ರಹಿಸಿ ನಿರ್ಣಯ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2022, 15:28 IST
Last Updated 6 ಡಿಸೆಂಬರ್ 2022, 15:28 IST

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಲ್ಲಿ ಒಳ ಮೀಸಲಾತಿ ಅನುಷ್ಠಾನಕ್ಕೆ ತರಬೇಕು. ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯನ್ನು ಬಿಡುಗಡೆ ಮಾಡಿ ಸಾರ್ವಜನಿಕ ಚರ್ಚೆಗೆ ಅವಕಾಶ ಕಲ್ಪಿಸಿ, ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿ ನಗರದಲ್ಲಿ ಮಂಗಳವಾರ ನಡೆದ ‘ದಲಿತರ ಸಾಂಸ್ಕೃತಿಕ ಪ್ರತಿರೋಧ’ ಸಮಾವೇಶದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ ನೇತೃತ್ವದಲ್ಲಿ ನಡೆದ ಸಮಾವೇಶದಲ್ಲಿ ಒಟ್ಟು 15 ನಿರ್ಣಯಗಳನ್ನು ಅಂಗೀಕರಿಸಲಾಗಿದೆ. ಜಾತಿ ಆಧಾರಿತ ತಾರತಮ್ಯ ಹಾಗೂ ಅಸ್ಪೃಶ್ಯತೆ ಆಚರಣೆಯನ್ನು ಖಂಡಿಸುವ ನಿರ್ಣಯ ಮಾಡಲಾಗಿದೆ. ಸಂವಿಧಾನವು ನೀಡಿರುವ ಮೂಲಭೂತ ಹಕ್ಕುಗಳನ್ನು ಎಲ್ಲ ಭಾರತೀಯರು ಸಮಾನವಾಗಿ ಅನುಭವಿಸುವಂತಹ ವಾತಾವರಣ ಕಲ್ಪಿಸಬೇಕು ಎಂದು ಸಮಾವೇಶವು ಕೇಂದ್ರ ಸರ್ಕಾರವನ್ನು ಆಗ್ರಹಿಸಿದೆ.

ಅರ್ಚಕ ಮತ್ತು ಪೌರ ಕಾರ್ಮಿಕ ವೃತ್ತಿಗಳನ್ನು ಸಾರ್ವತ್ರೀಕರಣಗೊಳಿಸಬೇಕು. ಎರಡೂ ವೃತ್ತಿಗಳಲ್ಲಿ ಮೀಸಲಾತಿ ಜಾರಿಗೊಳಿಸಿ, ಸೂಕ್ತ ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿ ನಿರ್ಣಯ ಅಂಗೀಕರಿಸಲಾಗಿದೆ.

ADVERTISEMENT

ನಿರ್ಣಯಗಳಲ್ಲಿರುವ ಆಗ್ರಹಗಳು:

* ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡಗಳ ಯೋಜನೆಗೆ ರಾಜ್ಯ ಬಜೆಟ್‌ನ ಒಟ್ಟು ಗಾತ್ರದ ಶೇಕಡ 24.10ರಷ್ಟು ಅನುದಾನವನ್ನು ಕಡ್ಡಾಯವಾಗಿ ಮೀಸಲಿಡಬೇಕು. ಅನ್ಯ ಉದ್ದೇಶಕ್ಕೆ ಈ ಅನುದಾನ ಬಳಸಲು ಅವಕಾಶ ಕಲ್ಪಿಸುವ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಕಾಯ್ದೆಯ ಸೆಕ್ಷನ್‌ 7–ಡಿಯನ್ನು ರದ್ದುಗೊಳಿಸಬೇಕು.

* ಕೇಂದ್ರ ಸರ್ಕಾರ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಶೇ 10ರಷ್ಟು ಮೀಸಲಾತಿ ನೀಡಿರುವುದನ್ನು ರದ್ದುಗೊಳಿಸಬೇಕು. ರಾಷ್ಟ್ರೀಯ ಶಿಕ್ಷಣ ನೀತಿ–2022 ಅನ್ನೂ ರದ್ದುಗೊಳಿಸಬೇಕು.

* ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಕೆಲವು ಜಮೀನುಗಳ ಪರಭಾರೆ ನಿಷೇಧ) (ಪಿಟಿಸಿಎಲ್‌) ಕಾಯ್ದೆಯನ್ನು ಬಲಪಡಿಸಬೇಕು.

* ರಾಜ್ಯ ಸರ್ಕಾರವು ಗೋಹತ್ಯೆ ನಿಷೇಧ ಕಾಯ್ದೆ ಹಾಗೂ ಮತಾಂತರ ನಿಷೇಧ ಕಾಯ್ದೆಗಳಿಗೆ ತಂದಿರುವ ತಿದ್ದುಪಡಿಗಳನ್ನು ತಕ್ಷಣ ರದ್ದುಪಡಿಸಬೇಕು.

* ಭೂ ಸುಧಾರಣಾ ಕಾಯ್ದೆ, ಕೃಷಿ ಉತ್ಪನ್ನ ಮಾರುಕಟ್ಟೆ ನಿಯಂತ್ರಣ ಸಮಿತಿ ಕಾಯ್ದೆಗಳ ತಿದ್ದುಪಡಿ, ವಿದ್ಯುತ್‌ ಖಾಸಗೀಕರಣ ಮಸೂದೆ ಮತ್ತು ಕಾರ್ಮಿಕ ಕಾಯ್ದೆ ತಿದ್ದುಪಡಿಗಳನ್ನು ಹಿಂಪಡೆಯಬೇಕು.

* ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ರದ್ದುಗೊಳಿಸುವ ನಿರ್ಧಾರ ಕೈಬಿಡಬೇಕು. ಈ ಸಮುದಾಯಗಳ ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯ ಪಡೆಯಲು ನಿಗದಿಪಡಿಸಿರುವ ವಾರ್ಷಿಕ ಆದಾಯ ಮಿತಿಯನ್ನು ₹ 10 ಲಕ್ಷಕ್ಕೆ ಹೆಚ್ಚಿಸಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.