ಬೆಂಗಳೂರು: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ ಪಡೆದ 185 ಅಭ್ಯರ್ಥಿಗಳಿಗೆ ಕೇಂದ್ರ ಸಣ್ಣ ಮತ್ತು ಮಧ್ಯಮ ಉದ್ಯಮಗಳು ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಅವರು ಶನಿವಾರ ನೇಮಕಾತಿ ಪತ್ರಗಳನ್ನು ವಿತರಿಸಿದರು.
ನಂತರ ಮಾತನಾಡಿದ ಅವರು, ‘ರಾಷ್ಟ್ರ ನಿರ್ಮಾಣದಲ್ಲಿ ಸರ್ಕಾರಿ ನೌಕರರ ಪಾತ್ರ ಪ್ರಮುಖವಾಗಿದೆ. ಜ್ಞಾನ, ಕೌಶಲ ಮತ್ತು ಕಠಿಣ ಪರಿಶ್ರಮ ಹಾಗೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವ ಮೂಲಕ ಇಲಾಖೆಗಳ ಬೆಳವಣಿಗೆಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.
‘ಪ್ರಧಾನಿ ನರೇಂದ್ರ ಮೋದಿ ಅವರು ಉದ್ಯೋಗ ಸೃಷ್ಟಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ದೇಶದ ಯುವಜನರ ಸಬಲೀಕರಣ ಮತ್ತು ದೇಶ ನಿರ್ಮಾಣದಲ್ಲಿ ಅವರ ಪಾಲ್ಗೊಳ್ಳುವಿಕೆಯನ್ನು ಅರ್ಥಪೂರ್ಣ ಅವಕಾಶ ನೀಡುವಲ್ಲಿ ಉದ್ಯೋಗ ಮೇಳವು ಮಹತ್ವದ ಪಾತ್ರ ವಹಿಸುತ್ತಿದೆ. ದೇಶದಾದ್ಯಂತ ಇದುವರೆಗೆ 10 ಲಕ್ಷಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಲಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ರೈಲ್ವೆ ಇಲಾಖೆ (61), ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ (46), ಬಿಎಸ್ಎಫ್ ಮತ್ತು ಸಿಐಎಸ್‌ಎಫ್‌ನಲ್ಲಿ (14), ಅಂಚೆ ಇಲಾಖೆಯ (12), ಆದಾಯ ತೆರಿಗೆ ಇಲಾಖೆ (7), ಆಯುಷ್ ಇಲಾಖೆ (2), ನಿಮ್ಹಾನ್ಸ್ (10), ಭಾರತೀಯ ಪುರಾತತ್ವ ಇಲಾಖೆ (11), ಮರ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ (9) ಮತ್ತು ಕೇಂದ್ರ ತೆರಿಗೆ (ಸಿಜಿಎಸ್‌ಟಿ) (13) ಅಭ್ಯರ್ಥಿಗಳು ಸೇರಿದಂತೆ ಒಟ್ಟು 185 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಾಯಿತು.
ನೈರುತ್ಯ ರೈಲ್ವೆಯ ಹೆಚ್ಚುವರಿ ವಿಭಾಗೀಯ ವ್ಯವಸ್ಥಾಪಕ ಆಶುತೋಷ್ ಮಾಥುರ್, ಹಿರಿಯ ವಿಭಾಗೀಯ ಸಿಬ್ಬಂದಿ ಅಧಿಕಾರಿ ಉಮಾ ಶರ್ಮಾ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.