ಬಂಧನ
(ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ಈಶಾನ್ಯ ವಿಭಾಗದ ಯಲಹಂಕ ಉಪನಗರ ವ್ಯಾಪ್ತಿಯಲ್ಲಿ ಸಹಚರರೊಂದಿಗೆ ಸೇರಿಕೊಂಡು ಕಾನೂನು ಬಾಹಿರ ಕೃತ್ಯಗಳನ್ನು ಎಸಗಿದ್ದ ರೌಡಿ ಮಂಜುನಾಥ್ ಅಲಿಯಾಸ್ ‘ಹೂವು’ ಮಂಜನನ್ನು ಪೊಲೀಸರು ಬಂಧಿಸಿದ್ದಾರೆ.
2013ರಿಂದಲೂ ಕೊಲೆ, ಕೊಲೆ ಪ್ರಯತ್ನ, ಹಲ್ಲೆ, ದೊಂಬಿ, ಕಳವು, ಬೆದರಿಕೆಯಂತಹ ಅಪರಾಧ ಕೃತ್ಯಗಳಲ್ಲಿ ಮಂಜುನಾಥ್ ಭಾಗಿಯಾಗುತ್ತಿದ್ದ. ಈತನ ವಿರುದ್ಧ ವಿವಿಧ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಜಾಮೀನಿನ ಮೇಲೆ ಕಾರಾಗೃಹದಿಂದ ಬಿಡುಗಡೆಯಾಗಿದ್ದ ರೌಡಿ, ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಜಾಮೀನಿನ ಷರತ್ತು ಉಲ್ಲಂಘಿಸಿ ಓಡಾಟ ನಡೆಸುತ್ತಿದ್ದ. ಅಲ್ಲದೇ ಕಾನೂನು ಬಾಹಿರ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದ ಮಾಹಿತಿ ಲಭಿಸಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ರೌಡಿಯ ಕೃತ್ಯದಿಂದ ಸಾರ್ವಜನಿಕರು ಭೀತಿಗೆ ಒಳಗಾಗಿದ್ದರು. ಶಾಂತಿ ಸುವ್ಯವಸ್ಥೆ ಕಾಪಾಡಲು ಮಂಜುನಾಥ್‌ನನ್ನು ಗೂಂಡಾ ಕಾಯ್ದೆ ಅಡಿ ಬಂಧಿಸಲು ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಆದೇಶ ಹೊರಡಿಸಿದ್ದರು. ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಲಾಯಿತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.