ADVERTISEMENT

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ ಹತ್ಯೆ; ರಾತ್ರಿಯೇ ಆರೋಪಿಗಳ ಸೆರೆ

​ಪ್ರಜಾವಾಣಿ ವಾರ್ತೆ
Published 29 ಮೇ 2020, 18:40 IST
Last Updated 29 ಮೇ 2020, 18:40 IST
   

ಬೆಂಗಳೂರು: ಅಪರಾಧ ಪ್ರಕರಣವೊಂದರಲ್ಲಿ ಜೈಲಿಗೆ ಹೋಗಿ ಬಂದಿದ್ದ ರೌಡಿ ಸಾಬು ಎಂಬಾತನನ್ನು ಗುರುವಾರ ರಾತ್ರಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದ್ದು, ಘಟನೆ ನಡೆದ ಕೆಲ ಗಂಟೆಗಳಲ್ಲಿ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸ್ಥಳೀಯ ನಿವಾಸಿಗಳಾದ ಚಾಂದ್ ಪಾಷಾ, ಸಲ್ಮಾನ್, ಸೈಯದ್ ವಾಸೀಂ, ಇಮ್ರಾನ್, ಮುಜಾರ್ ಪಾಷ ಹಾಗೂ ಅಜಮ್ ಬಂಧಿತರು.

‘ತಲಘಟ್ಟಪುರ ಠಾಣೆ ರೌಡಿಶೀಟರ್ ಆಗಿದ್ದ ಸಾಬು ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆಯಾಗಿ ಬಂದಿದ್ದ. ಆತನಿಗೂ ಹಾಗೂ ಆರೋಪಿ ಚಾಂದ್ ಪಾಪಾ ನಡುವೆ ಅವಲಹಳ್ಳಿ ಬಳಿಯ ಜಮೀನು ವಿಚಾರವಾಗಿ ವೈಮನಸ್ಸು ಉಂಟಾಗಿತ್ತು. ಹಲವು ಬಾರಿ ಮಾತಿನ ಚಕಮಕಿಯೂ ನಡೆದಿತ್ತು’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

ADVERTISEMENT

‘ಗುರುವಾರ ರಾತ್ರಿ 11.30ರ ಸುಮಾರಿಗೆ ಸಾಬು ದ್ವಿಚಕ್ರ ವಾಹನದಲ್ಲಿ ಹೊರಟಿದ್ದ. ಕಾರಿನಲ್ಲಿ ಬಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಸಿದ್ದ ಆರೋಪಿಗಳು, ಸಾಬು ಮೇಲೆ ದಾಳಿ ಮಾಡಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದಿದ್ದರು’ ಎಂದರು.

‘ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ತಲಘಟ್ಟಪುರ ಪೊಲೀಸರು ಹಾಗೂ ಸಿಸಿಬಿ ಸಂಘಟಿತ ಅಪರಾಧ ನಿಯಂತ್ರಣ ದಳದ ತಂಡ, ರಾತ್ರಿಯೇ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ. ಜಮೀನು ವಿಚಾರದಲ್ಲಿ ಬೆದರಿಕೆ ಹಾಕಿದ್ದಕ್ಕಾಗಿ ಕೃತ್ಯ ಎಸಗಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ’ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.