ADVERTISEMENT

ರೌಡಿಶೀಟರ್‌ ಜಯರಾಮ್‌ ಕೊಲೆ: ನಾಲ್ವರ ಬಂಧನ

ಸೋಲದೇವನಹಳ್ಳಿ ಠಾಣಾ ಪೊಲೀಸರ ಕಾರ್ಯಾಚರಣೆ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2025, 0:15 IST
Last Updated 9 ಮಾರ್ಚ್ 2025, 0:15 IST
<div class="paragraphs"><p>ಬಂಧನ</p></div>

ಬಂಧನ

   

ಪ್ರಾತಿನಿಧಿಕ ಚಿತ್ರ

ಬೆಂಗಳೂರು: ಹೆಸರಘಟ್ಟ ಮುಖ್ಯರಸ್ತೆಯ ಕೊಡಗಿ ತಿರುಮಲಪುರದ ಬಾರ್‌ನಲ್ಲಿ ನಡೆದಿದ್ದ ರೌಡಿಶೀಟರ್‌ ಜಯರಾಮ್‌(40) ಕೊಲೆ ಪ್ರಕರಣದ ಸಂಬಂಧ ನಾಲ್ವರು ಆರೋಪಿಗಳನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ADVERTISEMENT

ಯಲಹಂಕದ ಮುನಿರಾಜು, ರಾಜೇಶ್‌ ಅಲಿಯಾಸ್‌ ಬಬ್ಲಿ, ಯತೀಶ್‌ ಗೌಡ ಹಾಗೂ ವಿನಯ್‌ ಬಂಧಿತರು.

ಮಾರ್ಚ್‌ 4ರಂದು ರಾತ್ರಿ ಸುಮಾರು 8.30ರ ಸುಮಾರಿಗೆ ಬಾರ್‌ನಲ್ಲಿ ಮದ್ಯ ಸೇವಿಸುತ್ತಿದ್ದ ಜಯರಾಮ್‌ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು.

ಈ ಸಂಬಂಧ ಜಯರಾಮ್‌ ಕುಟುಂಬಸ್ಥರು ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಆರೋಪಿಗಳ ಬಂಧನಕ್ಕೆ ವಿಶೇಷ ಪೊಲೀಸ್ ತಂಡ ರಚಿಸಲಾಗಿತ್ತು. ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಮೊಬೈಲ್‌ ಲೊಕೇಷನ್‌ ಆಧರಿಸಿ ಪತ್ತೆಹಚ್ಚಿ ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.

ಯಲಹಂಕ ನ್ಯೂ ಟೌನ್‌ ಪೊಲೀಸ್ ಠಾಣೆಯ ರೌಡಿ ಶೀಟರ್‌ ಆಗಿದ್ದ ಜಯರಾಮ್‌, 2018ನೇ ಸಾಲಿನಲ್ಲಿ ನಡೆದಿದ್ದ ಯಲಹಂಕದ ಕಿರಣ್‌ ಎಂಬಾತನ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಜೈಲು ಸೇರಿದ್ದ. ನಂತರ, ಜಾಮೀನು ಪಡೆದು ಜೈಲಿನಿಂದ ಬಿಡುಗಡೆ ಆಗಿದ್ದ. ಚಿಕ್ಕಬೊಮ್ಮಸಂದ್ರದಲ್ಲಿ ಕೋಳಿ ಅಂಗಡಿ ಇಟ್ಟುಕೊಂಡಿದ್ದ ಎಂದು ಮೂಲಗಳು ತಿಳಿಸಿವೆ.

‘ಫೆಬ್ರುವರಿಯಲ್ಲಿ ಮುನಿರಾಜ್‌ ಹಾಗೂ ಜಯರಾಮ್‌ ಮಧ್ಯೆ ಗಲಾಟೆ ನಡೆದಿತ್ತು. ಇಬ್ಬರ ಮಧ್ಯೆ ದ್ವೇಷ ಮೂಡಿತ್ತು. ಜಯರಾಮ್‌ ಮೇಲೆ ಸೇಡು ತೀರಿಸಿಕೊಳ್ಳಲು ಮುನಿರಾಜ್‌ ಕಡೆಯವರು ಕೊಲೆಗೆ ಸಂಚು ರೂಪಿಸಿದ್ದರು. ಮಾರ್ಚ್‌ 4ರಂದು ಬಾರ್‌ನಲ್ಲಿ ಮದ್ಯ ಸೇವಿಸುತ್ತಾ ಕುಳಿತಿದ್ದ ಮಾಹಿತಿ ತಿಳಿದು ಸ್ಥಳಕ್ಕೆ ಬಂದು ಕೊಲೆ ಮಾಡಿದ್ದರು’ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.